ಮೈಸೂರು, ಮಾ.2- ಲೋಕಸಭೆ ಚುನಾವಣೆಗೆ ಮಂಡ್ಯದಿಂದ ಸ್ಪರ್ಧಿಸುವ ಕುರಿತಂತೆ ಜೆಡಿಎಸ್ನಿಂದ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಎಂದು ಸುಮಲತಾ ಅಂಬರೀಶ್ ತಿಳಿಸಿದರು.
ಸುತ್ತೂರು ಮಠಕ್ಕೆ ಭೇಟಿ ನೀಡಿದ್ದ ಅವರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ರಾಜಕೀಯದಲ್ಲಿ ಸದ್ಯದ ಯಾವುದೇ ಬೆಳವಣಿಗೆ ಆಗಿಲ್ಲ. ಹಾಗಾಗಿ ರಾಜಕೀಯದ ಬಗ್ಗೆ ಯಾವುದೇ ವಿಷಯ ಮಾತನಾಡುವುದಿಲ್ಲ ಎಂದ ಅವರು, ಈ ಬಾರಿ ಸಂಸತ್ ಚುನಾವಣೆಯಲ್ಲಿ ತಾವು ಸ್ಪರ್ಧಿಸುವ ಕುರಿತಂತೆ ಜನಾಭಿಪ್ರಾಯ ಸಂಗ್ರಹಿಸಲು ಮಂಡ್ಯ ಜಿಲ್ಲೆಯಾದ್ಯಂತ ಪ್ರವಾಸ ಮಾಡಲಿದ್ದೇನೆ. ಈ ನಿಟ್ಟಿನಲ್ಲಿ ಇಂದು ಕೆಆರ್ ನಗರಕ್ಕೂ ಭೇಟಿ ನೀಡಿ ಅಲ್ಲಿನ ಜನರೊಂದಿಗೆ ಮಾತುಕತೆ ನಡೆಸುವುದಾಗಿ ತಿಳಿಸಿದರು.
ಪ್ರಸ್ತುತ ವಿದ್ಯಮಾನಗಳು ಹಾಗೂ ತಮ್ಮ ಮಗ ಅಭಿ ಸಿನಿಮಾ ಕುರಿತಂತೆ ಶ್ರೀಗಳೊಂದಿಗೆ ಮಾತನಾಡಿದ್ದೇನೆ ಎಂದರು.ಈ ಸಂದರ್ಭದಲ್ಲಿ ನಟ ಹಾಗೂ ನಿರ್ಮಾಪಕ ರಾಕ್ಲೈನ್ ವೆಂಕಟೇಶ್, ದೊಡ್ಡಣ್ಣ ಮತ್ತಿತರರಿದ್ದರು.