ಬೆಂಗಳೂರು, ಮಾ.6- ರಾಜ್ಯದಲ್ಲಿರುವ ಅಲ್ಪಸಂಖ್ಯಾತರಾದ ಮುಸ್ಲಿಮರು, ಕ್ರೈಸ್ತರು, ಸಿಖ್ರು ಹಾಗೂ ಪಾರ್ಸಿಗಳಿಗೆ ಸರಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಜಫ್ರುಲ್ಖಾನ್ ಭರವಸೆ ನೀಡಿದ್ದಾರೆ.
ಆಯೋಗದ ಕಛೇರಿಯಲ್ಲಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ಶೀಘ್ರದಲ್ಲೇ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮುಂದಿನ ಕಾರ್ಯಕ್ರಮಗಳ ಕುರಿತು ಚರ್ಚೆ ನಡೆಸಲಾಗುವುದು ಎಂದರು.
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿಪ್ರಧಾನಿ ಎಚ್.ಡಿ.ದೇವೇಗೌಡರು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ನನ್ನ ಮೇಲೆ ವಿಶ್ವಾಸವಿಟ್ಟು ಮಹತ್ತರ ಜವಾಬ್ದಾರಿ ವಹಿಸಿದ್ದಾರೆ. ಅದಕ್ಕಾಗಿ ನಾನು ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಅವರು ನಮಗೆ ನೀಡಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸುತ್ತೇನೆ ಎಂದರು.