ಚಿತ್ರದುರ್ಗ, ಮಾ.7- ಚಿತ್ರದುರ್ಗ ಲೋಕಸಭಾ ಮೀಸಲು ಕ್ಷೇತ್ರಕ್ಕೆ ನಾನು ಸಹ ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದು ಲಿಂಗಸಗೂರು ಮಾಜಿ ಶಾಸಕ ಮಾನಪ್ಪ ವಜ್ಜಲ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಪಕ್ಷಕ್ಕಾಗಿ ನಿಷ್ಠೆಯಿಂದ ಕೆಲಸ ಮಾಡಿ ಕೇಂದ್ರದಲ್ಲಿ ಮತ್ತೆ ನರೇಂದ್ರ ಮೋದಿಯವರು ಪ್ರಧಾನಿಯಾಗುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ. ಮೀಸಲು ಕ್ಷೇತ್ರವಾಗಿರುವ ಕಾರಣ ನಾನು ಸಹ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಸ್ಥಳೀಯರಿಗೆ ಟಿಕೆಟ್ ಕೊಡಬೇಕು ಎಂದು ಕೇಳುತ್ತಿರುವುದು ತಪ್ಪಲ್ಲ. ಈಗಾಗಲೇ ಜಿಲ್ಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯಿಂದ ಬಂದು ಗೆದ್ದು ಸಂಸದರಾಗಿದ್ದಾರೆ. ಪಕ್ಕದ ಬಳ್ಳಾರಿ ಜಿಲ್ಲೆಯಲ್ಲೂ ಸಹ, ಬೇರೆ ಕಡೆಯಿಂದ ಬಂದು ಗೆದ್ದು ಸಂಸದರಾಗಿದ್ದಾರೆ. ಅದೇ ರೀತಿ ನಾನೂ ಸಹ ಕೇಳುತ್ತಿರುವುದು ತಪ್ಪಲ್ಲ ಎಂದರು.
ಪಕ್ಷ ನನಗೆ ಟಿಕೆಟ್ ನೀಡಿದರೆ ಜಿಲ್ಲೆಯ 5 ಜನ ಶಾಸಕರ ಜತೆ ವಿಶ್ವಾಸದಿಂದ ಕೆಲಸ ಮಾಡಿ, ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಈ ಹಿಂದೆ ನಾನು ಶಾಸಕನಾಗಿದ್ದ ಸಂದರ್ಭದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ನನ್ನ ಕ್ಷೇತ್ರದಲ್ಲಿ ಮಾಡಿದ್ದೇನೆ. ನಂದವಾಡಿಗಿ ಏತ ನೀರಾವರಿ ಯೋಜನೆಯನ್ನು ತರಲು ಶ್ರಮಿಸಿದ್ದೇನೆ.
ಗ್ರಾಮೀಣ ಪ್ರದೇಶದಲ್ಲಿನ ಬಹುತೇಕ ರಸ್ತೆಗಳಿಗೆ ಡಾಂಬರೀಕರಣ ಮಾಡಿಸಿ ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಆದ್ಯತೆ ಆದ್ಯತೆ ನೀಡಿದ್ದೇನೆ. ಗ್ರಾಮೀಣ ಪ್ರದೇಶಗಳಲ್ಲಿ ಹಲವಾರು ಸಾಮೂಹಿಕ ವಿವಾಹಗಳನ್ನು ಮಾಡಿದ್ದೇನೆ. 150 ಕ್ಕೂ ಹೆಚ್ಚು ದೇವಸ್ಥಾನಗಳನ್ನು ಜೀರ್ಣೋದ್ಧಾರ ಮಾಡಿಸಿದ್ದೆನೆ ಎಂದು ಹೇಳಿದರು.
ಈಗಾಗಲೇ ಜಿಲ್ಲೆಯ ಕೆಲವು ಭಾಗಗಳಲ್ಲಿ ಸುತ್ತಾಡಿ ಇಲ್ಲಿನ ಗಂಭೀರ ಸಮಸ್ಯೆಗಳನ್ನು ಅರಿತಿದ್ದೇನೆ. ಸರ್ಕಾರದಿಂದ ಜಿಲ್ಲೆಗೆ ಸರಿಯಾಗಿ ಅನುದಾನ ಬಿಡುಗಡೆಯಾಗುತ್ತಿಲ್ಲ ಭದ್ರಾಮೇಲ್ದಂಡೆ ಯೋಜನೆ ಕುಂಠಿತವಾಗಿದೆ ಎಂದರು.
ಕುಡಿಯುವ ನೀರಿನ ಸಮಸ್ಯೆ ಸಾಕಷ್ಟಿದೆ ಹೀಗಾಗಿ ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸಲು ಸಿದ್ಧನಿದ್ದೇನೆ ಪಕ್ಷ ನನಗೆ ಟಿಕೆಟï ಕೊಡುವ ಭರವಸೆ ಇದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಗೋವಿಂದ ರೆಡ್ಡಿ, ನಿವೃತ್ತ ಇಒ ರುದ್ರಮುನಿ, ಕಲ್ಲಂ ಸೀತಾರಾಮ ರೆಡ್ಡಿ, ಇತರರಿದ್ದರು.