ಬೆಂಗಳೂರು,ಮಾ.8-ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಎಚ್.ಹಾಲಪ್ಪ ಅವರು, ಮಂಗನ ಕಾಯಿಲೆ ನಿಯಂತ್ರಣ ಹಾಗೂ ಪರಿಹಾರ ನೀಡುವ ಬಗ್ಗೆ ಸ್ಥಳೀಯ ನಿಯೋಗದೊಂದಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರಿಗೆ ಮನವಿ ಪತ್ರ ಸಲ್ಲಿಸಿರುವುದಾಗಿ ತಿಳಿಸಿದರು.
ಮಂಗನ ಕಾಯಿಲೆ ನಿಯಂತ್ರಣಕ್ಕೆ ತರುವ ಸಂಬಂಧ ಸೋಮವಾರ ಸಭೆ ನಡೆಸುವುದಾಗಿ ಮುಖ್ಯ ಕಾರ್ಯದರ್ಶಿ ಭರವಸೆ ನೀಡಿದ್ದಾರೆ. ಸುಮಾರು 200 ಮಂದಿಯಲ್ಲಿ ಕಾಯಿಲೆ ಗುರುತಿಸಲಾಗಿದ್ದು, 14 ಮಂದಿ ಮೃತಪಟ್ಟಿದ್ದಾರೆ.
ಮೃತಪಟ್ಟವರು ಬಡವರಾಗಿರುವುದರಿಂದ ಅವರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಧನ ನೀಡಬೇಕು. ಈ ಪ್ರಕರಣವನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಪರಿಹಾರ ನೀಡಬೇಕು ಎಂದು ಮನವಿ ಮಾಡಿದರು.
ರಾಜ್ಯ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ ಮಲೆನಾಡು ಭಾಗದಲ್ಲಿ ರೋಗ ಉಲ್ಬಣಗೊಂಡಿದೆ. ಜನವರಿ ಮತ್ತು ಫೆಬ್ರವರಿಯಲ್ಲಿ ರೋಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದ ಅವರು, ಈ ರೋಗ ನಿಯಂತ್ರಣಕ್ಕೆ ಶಾಶ್ವತ ಪರಿಹಾರ ಒದಗಿಸಬೇಕು ಹಾಗೂ ಸೂಕ್ತ ಲಸಿಕೆಯನ್ನು ಕಂಡು ಹಿಡಿದು ಒದಗಿಸಬೇಕು. ಸಾಗರ ನಗರದಲ್ಲಿ ಮಂಗನ ಕಾಯಿಲೆ ಪತ್ತೆ ಮಾಡುವ ಪ್ರಯೋಗಾಲಯವನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.
ಈ ಕಾಯಿಲೆಗೆ ಎಲ್ಲಾ ಆಯಾಮಗಳಿಂದ ಕಾರಣಗಳನ್ನು ಪತ್ತೆಹಚ್ಚಿ ಪರಿಹಾರ ಕಂಡುಕೊಳ್ಳಬೇಕು. ಅರಣ್ಯ ಹಾಗೂ ಪಶುವೈದ್ಯಕೀಯ ಇಲಾಖೆ ಪರಸ್ಪರ ಸಹಕಾರದಿಂದ ರೋಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದರು.