
ಹಾವೇರಿ : ಹಾವೇರಿಯಲ್ಲಿ ಇಂದು ಕಾಂಗ್ರೆಸ್ ಪರಿವರ್ತನಾ ಸಮಾವೇಶ ಆಯೋಜಿಸಲಾಗಿದ್ದು, ಈ ಈ ಬೃಹತ್ ಸಮಾವೇಶದ ಮೂಲಕ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಕರ್ನಾಟಕದಲ್ಲಿ ರಣಕಹಳೆ ಊದಲಿದ್ದಾರೆ.
ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಇದೇ ಮೊದಲ ಬಾರಿಗೆ ಹಾವೇರಿಗೆ ಆಗಮಿಸುತ್ತಿರುವ ರಾಹುಲ್ ಗಾಂಧಿ ಇಲ್ಲಿಂದಲೇ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ.
ಹಾವೇರಿಯ ಮುನ್ಸಿಪಲ್ ಮೈದಾನದಲ್ಲಿ ಈ ಐತಿಹಾಸಿಕ ಸಮಾವೇಶ ನಡೆಯುತ್ತಿದ್ದು, ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಲಕ್ಷಾಂತರ ಜನ ಭಾಗವಹಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯಲ್ಲಿ ಬಿಗಿ ಪೋಲಿಸ್ ಬಂದೋಬಸ್ತ್ ವಹಿಸಲಾಗಿದೆ.
ಕಾಂಗ್ರೆಸ್ ಅಧ್ಯಕ್ಷರ ರಾಹುಲ್ ಗಾಂಧಿ ಜೊತೆಗೆ ಮಾಜಿ ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಜಿಲ್ಲಾ ಉಸ್ತುವಾರಿ ಜಮೀರ್ ಅಹಮದ್ ಮತ್ತಿತರ ಕಾಂಗ್ರೆಸ್ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಈ ಮೊದಲು 2013ರಲ್ಲಿ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ರಾಹುಲ್ ಹಾವೇರಿಗೆ ಆಗಮಿಸಿದ್ದರು. ಈ ಬಾರಿ ಲೋಕಸಭಾ ಚುನಾವಣೆಯ ಮೊದಲ ಪ್ರಚಾರ ಭಾಷಣವನ್ನು ಹಾವೇರಿಯಿಂದಲೇ ಆರಂಭಿಸುತ್ತಿದ್ದಾರೆ. ಇಂದು ಲೋಕಸಭಾ ಚುನಾವಣಾ ದಿನಾಂಕವೂ ಪ್ರಕಟವಾಗುವ ಸಾಧ್ಯತೆ ಇದೆ.
ಸಮಾವೇಶಕ್ಕಾಗಿ ಬೃಹತ್ ವೇದಿಕೆ ನಿರ್ಮಿಸಲಾಗಿದ್ದು, ಹಾವೇರಿ ಮತ್ತು ಗದಗ ಜಿಲ್ಲೆಗಳ ಕಾರ್ಯಕರ್ತರು ಮತ್ತು ಸಾರ್ವಜನಿಕರು ಆಗಮಿಸುವ ಹಿನ್ನೆಲೆಯಲ್ಲಿ 40 ಸಾವಿರಕ್ಕೂ ಹೆಚ್ಚು ಖುರ್ಚಿಗಳು, 10 ಎಲ್ಇಡಿ ಟಿ.ವಿ. ಪರದೆಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಭದ್ರತೆ ದೃಷ್ಟಿಯಿಂದ ಸುತ್ತಮುತ್ತಲೂ ಸಿ.ಸಿ. ಕ್ಯಾಮರಾ ಕಣ್ಗಾವಲು ಅಳವಡಿಸಲಾಗಿದೆ.