ನವದೆಹಲಿ: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಇಂದು ಸಂಜೆ 5 ಗಂಟೆಗೆ ಕೇಂದ್ರ ಚುನಾವನಾ ಆಯೋಗ ಲೋಕಸಭಾ ಚುನಾವಣೆ ದಿನಾಂಕವನ್ನು ಘೋಷಿಸಲಿದೆ.
ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ನಡೆಸಲಿರುವ ಚುನಾವಣಾ ಆಯೋಗ ದಿನಾಂಕವನ್ನು ಪ್ರಕಟಿಸಲಿದೆ ಎನ್ನಲಾಗಿದೆ. ಈಗಿನ ಲೋಕಸಭಾ ಅವಧಿ ಜೂ.3ಕ್ಕೆ ಕೊನೆಗೊಳ್ಳಲಿದೆ.
ಅಲ್ಲದೆ ಇದೇ ವೇಳೆ ಆಂಧ್ರಪ್ರದೇಶ, ಓಡಿಶಾ, ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶ ರಾಜ್ಯಗಳ ವಿಧಾನಸಭಾ ಚುನಾವಣೆಯ ದಿನಾಂಕವನ್ನೂ ಚುನಾವಣಾ ಆಯೋಗ ತಿಳಿಸಲಿದೆ ಎನ್ನಲಾಗಿದೆ.
ಚುನಾವಣಾ ಆಯೋಗ ಚುನಾವಣೆಯ ದಿನಾಂಕವನ್ನು ಪ್ರಕಟಿಸುತ್ತಿದ್ದಂತೆ ನೀತಿ ಸಂಹಿತೆ ಜಾರಿಯಾಗಲಿದ್ದು ಸರ್ಕಾರ ಯಾವುದೇ ಹೊಸ ಯೋಜನೆಗಳನ್ನೂ ಜಾರಿಗೆ ತರುವಂತಿಲ್ಲ.
ನೀತಿ ಸಂಹಿತೆ: ಚುನಾವಣಾ ಸಮಯದಲ್ಲಿ ಆಯೋಗ ರಾಜಕೀಯ ಪಕ್ಷಗಳಿಗೆ ಮತ್ತು ಮತದಾರರಿಗೆ ನಡತೆ ಸಂಹಿತೆಯನ್ನು ನೀಡಿ ಕೆಲವು ಮಾರ್ಗಸೂಚಿಯನ್ನು ಕೊಡುತ್ತದೆ. ಈ ನೀತಿ ಸಂಹಿತೆಯನ್ನು ಜನಪ್ರತಿನಿಧಿಗಳು ಉಲ್ಲಂಘಿಸುವಂತಿಲ್ಲ. ನೀತಿ ಸಂಹಿತೆಯನ್ನು ಉಲ್ಲಂಘಿಸಿದರೆ ಅವರ ವಿರುದ್ಧ ಪ್ರಕರಣ ದಾಖಲಿಸಬಹುದು.
ನೀತಿ ಸಂಹಿತೆ ಜಾರಿಯಾದ ಬಳಿಕ ಹಾಲಿ ಸರ್ಕಾರ ಯಾವುದೇ ಯೋಜನೆಗಳನ್ನು ಪ್ರಕಟಿಸುವಂತಿಲ್ಲ. ಜನಪ್ರತಿನಿಧಿಗಳು ಸರ್ಕಾರದ ಕಾರ್ಯಕ್ರಮದಲ್ಲಿ ಭಾಗವಹಿಸುವಂತಿಲ್ಲ. ತುರ್ತು ಸಂದರ್ಭ ಹೊರತು ಪಡಿಸಿ ಸರ್ಕಾರದ ಅಧಿಕಾರಿಗಳು ನಡೆಸುವ ಸಭೆಗಳಲ್ಲಿ ಭಾಗವಹಿಸುವಂತಿಲ್ಲ.
ಸರ್ಕಾರಿ ಅಧಿಕಾರಿಗಳು ರಾಜಕೀಯ ನಾಯಕರ ಜೊತೆ ಗುರುತಿಸಿಕೊಳ್ಳುವಂತಿಲ್ಲ. ತನ್ನ ಪರವಾಗಿ ಕೆಲಸ ಮಾಡುವ ಅಧಿಕಾರಿಯನ್ನು ತನ್ನ ಕ್ಷೇತ್ರಕ್ಕೆ ವರ್ಗಾವಣೆ ಮಾಡುವಂತಿಲ್ಲ. ತುರ್ತು, ಅನಿವಾರ್ಯ ಸಂದರ್ಭದಲ್ಲಿ ಆಯೋಗದ ಅನುಮತಿ ಪಡೆದು ಅಧಿಕಾರಿಯನ್ನು ವರ್ಗಾವಣೆ ಮಾಡಬಹುದು.
Lok Sabha, State Election Dates To Be Announced at 5 pm