ಬಿಜೆಪಿಯಿಂದ ಇದೇ 18ರಂದು ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬೆಂಗಳೂರು,ಮಾ.13-ಬೇರೆ ಪಕ್ಷಗಳಿಗಿಂತಲೂ ಲೋಕಸಭೆ ಚುನಾವಣೆಯಲ್ಲಿ ಒಂದು ಹೆಜ್ಜೆ ಮುಂದಿರುವ ಬಿಜೆಪಿ ಇದೇ 18ರಂದು ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಿದೆ.

ಶುಕ್ರವಾರ ಇಲ್ಲವೇ ಶನಿವಾರ ನವದೆಹಲಿಯಲ್ಲಿ ಬಿಜೆಪಿಯ ರಾಷ್ಟ್ರೀಯ ಸಂಸದೀಯ ಮಂಡಳಿ ಸಭೆ ನಡೆಯಲಿದೆ. ಕೇಂದ್ರ ಚುನಾವಣಾ ಸಮಿತಿ ನೀಡುವ ಪಟ್ಟಿಗೆ ಅಂತಿಮ ಮುದ್ರೆ ಒತ್ತಲಿದೆ.

ಬಳಿಕ ಸೋಮವಾರ ಹಾಲಿ ಸಂಸದರು ಸೇರಿದಂತೆ ಸುಮಾರು 200ಕ್ಕೂ ಹೆಚ್ಚು ಸಂಸದರ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಿದೆ. ಇದರಲ್ಲಿ ಕರ್ನಾಟಕದ ಹಾಲಿ ಸಂಸದರ ಹೆಸರುಗಳು ಇರಲಿವೆ ಎಂದು ತಿಳಿದುಬಂದಿದೆ.

ಮೊದಲ ಹಂತದಲ್ಲಿ 16 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿ ನಂತರ ಉಳಿದ 12 ಲೋಕಸಭಾ ಕ್ಷೇತ್ರಗಳಿಗೆ 2ನೇ ಹಂತದಲ್ಲಿ ಬಿಡುಗಡೆ ಮಾಡಲು ವರಿಷ್ಠರು ತೀರ್ಮಾನಿಸಿದ್ದಾರೆ.

ಕೇಂದ್ರ ಸಚಿವ ಅನಂತಕುಮಾರ್ ನಿಧನದಿಂದ ತೆರವಾಗಿರುವ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಅವರ ಪತ್ನಿ ತೇಜಸ್ವಿನಿ ಅನಂತಕುಮಾರ್ ಅಭ್ಯರ್ಥಿಯಾಗುವುದು ಬಹುತೇಕ ಖಚಿತವಾಗಿದೆ.

ಈ ಕ್ಷೇತ್ರದಿಂದ ರಾಜ್ಯ ಬಿಜೆಪಿ ಘಟಕ ತೇಜಸ್ವಿನಿ ಅನಂತಕುಮಾರ್ ಅವರ ಹೆಸರನ್ನು ಮಾತ್ರ ಶಿಫಾರಸು ಮಾಡಿದೆ. ಬೇರೆ ಯಾರೊಬ್ಬರೂ ಆಕಾಂಕ್ಷಿಗಳು ಇಲ್ಲದಿರುವ ಕಾರಣ ತೇಜಸ್ವಿನಿ ಸ್ಪರ್ಧೆಗೆ ಹಾದಿ ಸುಗಮವಾಗಿದೆ.

ಕಗ್ಗಂಟಾದ ಕೆಲವು ಕ್ಷೇತ್ರಗಳು:
ಇನ್ನು ಕೆಲವು ಕ್ಷೇತ್ರಗಳಲ್ಲಿ ಆಕಾಂಕ್ಷಿಗಳ ಪಟ್ಟಿ ದಿನದಿಂದ ದಿನಕ್ಕೆ ಹನುಮಂತನ ಬಾಲದಂತೆ ಬೆಳೆಯುತ್ತಿರುವುದರಿಂದ ಯಾರನ್ನು ಕಣಕ್ಕಿಳಿಸಬೇಕು ಎಂಬುದೇ ವರಿಷ್ಠರಿಗೆ ತಲೆನೋವಾಗಿ ಪರಿಣಮಿಸಿದೆ.

ಒಂದೊಂದು ಕ್ಷೇತ್ರದಲ್ಲಿ ಮೂರರಿಂದ ಐವರು ಆಕಾಂಕ್ಷಿಗಳು ತಮಗೇ ಟಿಕೆಟ್ ನೀಡಬೇಕೆಂದು ಪಟ್ಟು ಹಿಡಿದಿರುವುದರಿಂದ ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಸಾಧ್ಯವಾಗುತ್ತಿಲ್ಲ. ಏ.18ರಂದು ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ನಾಮಪತ್ರ ಸಲ್ಲಿಕೆ, ಪರಿಶೀಲನೆ, ವಾಪಸ್ ಪಡೆಯುವುದು ಇಂತಹ ಪ್ರಕ್ರಿಯೆಗಳು ಮುಗಿದು ಪ್ರಚಾರ ನಡೆಸಲು ಕೇವಲ 20 ದಿನಗಳು ಮಾತ್ರ ಬಾಕಿ ಇರುತ್ತವೆ.

ಒಂದೊಂದು ಲೋಕಸಭಾ ಕ್ಷೇತ್ರಗಳಲ್ಲಿ 8 ವಿಧಾನಸಭಾ ಕ್ಷೇತ್ರಗಳು ಇರುವುದರಿಂದ ಕಡೆ ಪಕ್ಷ 2ರಿಂದ 3 ಬಾರಿಯಾದರೂ ಮತದಾರರನ್ನು ತಲುಪಿದರೆ ಗೆಲುವಿಗೆ ಸಹಕಾರಿಯಾಗುತ್ತದೆ ಎಂಬ ಲೆಕ್ಕಾಚಾರದಲ್ಲಿ ಬಿಜೆಪಿ ಇದೆ. ಹೀಗಾಗಿ ಅಳೆದುತೂಗಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಹರಸಾಹಸ ನಡೆಸುತ್ತಿದೆ.

ಗಣಿ ಜಿಲ್ಲೆ ಬಳ್ಳಾರಿಯಲ್ಲಿ ಯಾರಿಗೆ ಟಿಕೆಟ್ ನೀಡಬೇಕು ಎಂಬುದೇ ಕಗ್ಗಂಟಾಗಿದೆ. ಮಾಜಿ ಸಚಿವರಾದ ಸಣ್ಣ ಫಕೀರಪ್ಪ, ಜೆ.ಶಾಂತಾ, ಸುರೇಶ್ ಬಾಬು, ಶಾಸಕ ಬಿ.ನಾಗೇಂದ್ರ ಸಹೋದರ ವೆಂಕಟೇಶ್ ಪ್ರಸಾದ್, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎನ್.ವೈ.ಹನುಮಂತಪ್ಪನವರ ಪುತ್ರ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಂಬಂಧಿ ದೇವೇಂದ್ರಪ್ಪ ಆಕಾಂಕ್ಷಿಗಳಾಗಿದ್ದಾರೆ.

ಅಂತಿಮವಾಗಿ ಶಾಸಕ ಶ್ರೀರಾಮುಲು ಶಿಫಾರಸು ಮಾಡುವ ಅಭ್ಯರ್ಥಿಯೇ ಕಣಕ್ಕಿಳಿಯಲಿದ್ದಾರೆ.

ಕೋಲಾರದಲ್ಲೂ ಡಿ.ಎಸ್.ವೀರಯ್ಯ, ಛಲವಾದಿ ನಾರಾಯಣಸ್ವಾಮಿ, ಚಿ.ನಾ.ರಾಮು ನಡುವೆ ಸ್ಪರ್ಧೆ ಏರ್ಪಟ್ಟಿದೆ. ಗಡಿ ಜಿಲ್ಲೆ ಚಾಮರಾಜನಗರದಲ್ಲೂ ಆಕಾಂಕ್ಷಿಗಳು ಹೆಚ್ಚಾಗಿರುವುದು ಅಭ್ಯರ್ಥಿಯನ್ನು ಆಯ್ಕೆ ಮಾಡಲು ಸಾಧ್ಯವಾಗುತ್ತಿಲ್ಲ.

ಬೆಂಗಳೂರು ಗ್ರಾಮಾಂತರದಿಂದ ಮಾಜಿ ಶಾಸಕರಾದ ಸಿ.ಪಿ.ಯೋಗೇಶ್ವರ್,ಎ ಚ್.ಸಿ.ಬಾಲಕೃಷ್ಣ, ತುಳಸೀ ಮುನಿರಾಜು, ರುದ್ರೇಶ್ ಹೆಸರು ಚಾಲ್ತಿಯಲ್ಲಿದೆ.

ತುಮಕೂರಿನಿಂದ ಮಾಜಿ ಸಚಿವ ಜಿ.ಎಚ್.ಬಸವರಾಜು ಹೆಸರು ಬಹುತೇಕ ಅಂತಿಮಗೊಂಡಿದೆ. ಚಿತ್ರದುರ್ಗದಿಂದ ಮಾಜಿ ಸಚಿವ ಜನಾರ್ಧನಸ್ವಾಮಿ, ನಿವೃತ್ತ ಐಎಎಸ್ ಅಧಿಕಾರಿ ಲಕ್ಷ್ಮಿನಾರಾಯಣ ತಮಗೆ ಟಿಕೆಟ್ ನೀಡುವಂತೆ ವರಿಷ್ಠರ ಮೇಲೆ ಒತ್ತಡ ಹಾಕುತ್ತಿದ್ದಾರೆ.

ಹಾಸನದಲ್ಲಿ ಮಾಜಿ ಸಚಿವ ಎ.ಮಂಜು ಬಿಜೆಪಿಗೆ ಸೇರ್ಪಡೆಯಾದರೆ ಬಹುತೇಕ ಅವರೇ ಅಭ್ಯರ್ಥಿಯಾಗುವ ಸಾಧ್ಯತೆ ಇದೆ. ಇದರ ಜೊತೆಗೆ ನಿವೃತ್ತ ಐಎಎಸ್ ಅಧಿಕಾರಿ ರಾಮೇಗೌಡರನ್ನು ಬಿಜೆಪಿ ಕರೆತರಲು ಮುಂದಾಗಿದೆ.

ಹೀಗೆ ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿ ಆಯ್ಕೆ ಜಟಿಲವಾಗಿರುವುದರಿಂದ ಈ ವಾರದ ಅಂತ್ಯಕ್ಕೆ ಬಹುತೇಕ 28 ಲೋಕಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳ್ಳಲಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ