ಮೈಸೂರು, ಮಾ.14-ತಮ್ಮ ತಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಶಾಸಕ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.
ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ಕ್ಷೇತ್ರವನ್ನು ಕಾಂಗ್ರೆಸ್ಗೆ ಬಿಟ್ಟುಕೊಡುವುದರಿಂದ ನಿಮ್ಮ ತಂದೆ ಸ್ಪರ್ಧಿಸುತ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿ, ನನ್ನ ತಂದೆ ಸ್ಪರ್ಧಿಸುವುದಿಲ್ಲ. ಅವರು ಈ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಯಾವುದೇ ಕ್ಷೇತ್ರದಿಂದಲೂ ಸ್ಪರ್ಧಿಸುವುದಿಲ್ಲ ಎಂದು ತಿಳಿಸಿದ್ದಾರೆ ಎಂದು ಅವರು ಹೇಳಿದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಈಗಾಗಲೇ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿ ಹೈಕಮಾಂಡ್ಗೆ ಕಳಿಸಲಾಗಿದೆ. 16 ರಂದು ಪಕ್ಷದ ವರಿಷ್ಠರು ಅಧಿಕೃತ ಅಭ್ಯರ್ಥಿಯ ಬಗ್ಗೆ ಪ್ರಕಟಿಸಲಿದ್ದಾರೆ ಎಂದರು.
ಈ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಬೇಡಿ ಎಂದು ತಿಳಿಸಲು ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಪರಿವರ್ತನಾ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಈ ಹಿನ್ನೆಲೆಯಲ್ಲಿ ಮೊದಲ ಪರಿವರ್ತನಾ ರ್ಯಾಲಿ ನಾಳೆ (ಮಾ.15) ಚಾಮರಾಜನಗರದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ಆಯೋಜಿಸಲಗಿದೆ ಎಂದರು.
ಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಬಸವರಾಜು, ಮಂಜುನಾಥ್ ಮತ್ತಿತರರು ಹಾಜರಿದ್ದರು.