ಮಂಡ್ಯ,ಮಾ.14- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪುತ್ರ ಹಾಗೂ ನಟ ನಿಖಿಲ್ ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂದು ಅಧಿಕೃತವಾಗಿ ಘೋಷಣೆ ಮಾಡಲಾಯಿತು.
ನಗರದ ಸಿಲ್ವರ್ಜೂಬಿಲಿ ಪಾರ್ಕ್ನಲ್ಲಿ ಜೆಡಿಎಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, ನಿಖಿಲ್ ಕುಮಾರಸ್ವಾಮಿ ಅವರನ್ನು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ಘೋಷಣೆ ಮಾಡಿದರು.
ಕಾರ್ಯಕ್ರಮಕ್ಕೂ ಮುನ್ನ ಮದ್ದೂರಿನಿಂದ ಮಂಡ್ಯದವರೆಗೆ ಬೈಕ್ ರ್ಯಾಲಿಯನ್ನು ಕೂಡ ಆಯೋಜಿಸಲಾಗಿತ್ತು. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಕುಮಾರಸ್ವಾಮಿ, ಜಿಲ್ಲೆಯ ಸಚಿವರು, ಶಾಸಕರು ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಕಾಂಗ್ರೆಸ್-ಜೆಡಿಎಸ್ ಚುನಾವಣಾಪೂರ್ವ ಮೈತ್ರಿ ಮಾಡಿಕೊಂಡಿದ್ದು, ಮಂಡ್ಯ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಡಲಾಗಿದೆ.
ಉಭಯ ಪಕ್ಷಗಳ ಒಮ್ಮತ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಕಣದಲ್ಲಿದ್ದು, ಇಂದಿನಿಂದ ತಮ್ಮ ಚುನಾವಣ ಪ್ರಚಾರವನ್ನು ಆರಂಭಿಸಿದ್ದಾರೆ.
ಮೊದಲ ಬಾರಿಗೆ ರಾಜಕೀಯ ಪ್ರವೇಶ ಮಾಡಿರುವ ನಿಖಿಲ್ ಕುಮಾರಸ್ವಾಮಿ ಅವರನ್ನು ಚುನಾಯಿಸಬೇಕೆಂದು ಜೆಡಿಎಸ್ ನಾಯಕರು ಮಂಡ್ಯ ಜನರಲ್ಲಿ ಮನವಿ ಮಾಡಿಕೊಂಡರು.
ನಿಖಿಲ್ ಕುಮಾರಸ್ವಾಮಿ ಈಗಾಗಲೇ ಕ್ಷೇತ್ರದ ಹಲವು ಭಾಗಗಳಲ್ಲಿ ಪ್ರವಾಸ ಕೈಗೊಂಡು ಪಕ್ಷದ ಮುಖಂಡರು ಹಾಗೂ ಸ್ವಾಮಿ ಅವರ ಸ್ಪರ್ಧೆಯಿಂದಾಗಿ ಮಂಡ್ಯ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರತೊಡಗಿದೆ. ಅಲ್ಲದೆ ರಾಜಕೀಯವಾಗಿಯೂ ಬಹುಚರ್ಚೆಗೆ ಗ್ರಾಸವಾಗಿದೆ.
ಮಾಜಿ ಸಚಿವ ದಿವಂಗತ ಅಂಬರೀಶ್ ಅವರ ಪತ್ನಿ ಹಾಗೂ ನಟಿ ಸುಮಲತಾ ಅಂಬರೀಶ್ ಇದೇ ಕ್ಷೇತ್ರದಿಂದ ಸ್ಪರ್ಧೆಗಿಳಿಯುತ್ತಿರುವುದರಿಂದ ಜೆಡಿಎಸ್ನ ಭದ್ರಕೋಟೆಯಾದ ಮಂಡ್ಯದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆಗಳು ಹೆಚ್ಚಾಗಿವೆ.