ಜೆಡಿಎಸ್‍ನಿಂದ ಆರು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಮಾತ್ರ ಬಾಕಿ

ಬೆಂಗಳೂರು, ಮಾ.14- ಕಾಂಗ್ರೆಸ್‍ನೊಂದಿಗೆ ಚುನಾವಣಾ ಪೂರ್ವ ಮೈತ್ರಿ ಅಂತಿಮಗೊಂಡು ಕ್ಷೇತ್ರಗಳ ಹಂಚಿಕೆಯಾದ ಬೆನ್ನಲ್ಲೇ ಜೆಡಿಎಸ್ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುತ್ತಿದ್ದು, ಇಂದು ಸಂಜೆ ಅಥವಾ ನಾಳೆ ಪ್ರಕಟವಾಗುವ ಸಾಧ್ಯತೆಗಳಿವೆ.

ರಾಜ್ಯದ 28 ವಿಧಾನಸಭಾ ಕ್ಷೇತ್ರಗಳ ಪೈಕಿ ಜೆಡಿಎಸ್ 8 ಕ್ಷೇತ್ರಗಳಲ್ಲಿ ಸ್ಪರ್ಧೆಗಿಳಿಯಲಿದ್ದು, ಈಗಾಗಲೇ ಮಂಡ್ಯ, ಹಾಸನ ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ.

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬುದು ರಾಜಕೀಯವಾಗಿ ತೀವ್ರ ಕುತೂಹಲ ಕೆರಳಿಸಿದೆ.

ಬೆಂಗಳೂರು ಉತ್ತರ ಹಾಗೂ ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಒತ್ತಡ ಹೇರಿದ್ದರು. ಆದರೆ, ದೇವೇಗೌಡರು ಮಾತ್ರ ಗುಟ್ಟು ಬಿಟ್ಟುಕೊಟ್ಟಿಲ್ಲ.

ಮುಂಬರುವ ಬಿಬಿಎಂಪಿ ಚುನಾವಣೆಗೆ ಪಕ್ಷ ಸಂಘಟಿಸಲು ಹೆಚ್ಚು ಅನುಕೂಲವಾಗಲಿದೆ ಎಂಬ ವಾದ ಮುಂದಿಟ್ಟು ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸುವಂತೆ ಬೆಂಗಳೂರಿನ ಜೆಡಿಎಸ್ ಮುಖಂಡರು, ಕಾರ್ಯಕರ್ತರು ದೇವೇಗೌಡರಲ್ಲಿ ಮನವಿ ಮಾಡಿದ್ದರು.

ಹಾಸನ ಲೋಕಸಭಾ ಕ್ಷೇತ್ರವನ್ನು ತಮ್ಮ ಮೊಮ್ಮಗ ಹಾಗೂ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಅವರಿಗೆ ಗೌಡರು ಬಿಟ್ಟುಕೊಟ್ಟಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮತ್ತೊಬ್ಬ ಮೊಮ್ಮಗನಾದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪುತ್ರ ಮತ್ತು ನಟ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ.

ಮೈಸೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ದೇವೇಗೌಡರ ಮೇಲೆ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಒತ್ತಡ ಹೇರಿದ್ದರು. ದೇವೇಗೌಡರು ಕೂಡ ಸ್ಪರ್ಧಿಸಲು ಆಸಕ್ತಿ ಹೊಂದಿದ್ದರು. ಆದರೆ, ಕಾಂಗ್ರೆಸ್-ಜೆಡಿಎಸ್ ನಡುವಿನ ಚುನಾವಣಾ ಪೂರ್ವ ಮೈತ್ರಿಯಾಗಿದ್ದು, ಮೈಸೂರು ಕ್ಷೇತ್ರವನ್ನು ಕಾಂಗ್ರೆಸ್‍ಗೆ ಬಿಟ್ಟುಕೊಡಲಾಗಿದೆ. ಹೀಗಾಗಿ ತುಮಕೂರು ಇಲ್ಲವೆ ಬೆಂಗಳೂರು ಉತ್ತರ ಅವರು ಕ್ಷೇತ್ರದಲ್ಲಿ ಸ್ಪರ್ಧಿಸಬೇಕಿದೆ.

ಜೆಡಿಎಸ್‍ನ ಉನ್ನತ ಮೂಲಗಳ ಪ್ರಕಾರ ದೇವೇಗೌಡರು ಬೆಂಗಳೂರು ಉತ್ತರ ಕ್ಷೇತ್ರದಿಂದಲೇ ಸ್ಪರ್ಧಿಸಲಿದ್ದಾರೆ. ಹಾಲಿ ಸಂಸದರಿದ್ದರೂ ತುಮಕೂರು ಕ್ಷೇತ್ರವನ್ನು ಜೆಡಿಎಸ್‍ಗೆ ಕಾಂಗ್ರೆಸ್ ಬಿಟ್ಟುಕೊಟ್ಟಿದೆ.

ಸಂಸದ ಮುದ್ದಹನುಮೇಗೌಡರು ಜೆಡಿಎಸ್‍ಗೆ ಸೇರ್ಪಡೆಯಾದರೆ ಅವರನ್ನೇ ಅಭ್ಯರ್ಥಿಯನ್ನಾಗಿ ಮಾಡುವ ಪ್ರಸ್ತಾಪವೂ ಜೆಡಿಎಸ್ ಮುಂದಿತ್ತು.

ಇಂದು ಸಂಜೆ ಬೆಂಗಳೂರು ಉತ್ತರ, ತುಮಕೂರು, ಶಿವಮೊಗ್ಗ, ಉಡುಪಿ-ಚಿಕ್ಕಮಗಳೂರು, ಉತ್ತರ ಕನ್ನಡ ಹಾಗೂ ವಿಜಯಪುರ ಕ್ಷೇತ್ರಗಳ ಪಕ್ಷದ ಮುಖಂಡರ ಸಭೆಯನ್ನು ದೇವೇಗೌಡರು ನಡೆಸಲಿದ್ದು, ಅಭ್ಯರ್ಥಿಗಳ ಆಯ್ಕೆ ಹಾಗೂ ಚುನಾವಣಾ ಕಾರ್ಯತಂತ್ರದ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ.

ಸಭೆಯಲ್ಲಿ ಉಳಿದ ಆರೂ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಅಂತಿಮಗೊಂಡರೆ ಇಂದು ರಾತ್ರಿ ಅಥವಾ ನಾಳೆ ಪ್ರಕಟಿಸಲಾಗುತ್ತದೆ ಎಂದು ಪಕ್ಷದ ಮೂಲಗಳು ಸ್ಪಷ್ಟಪಡಿಸಿವೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಮಾಜಿ ಶಾಸಕ ಮಧು ಬಂಗಾರಪ್ಪ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ್ದು, ಘೋಷಣೆಯೊಂದು ಬಾಕಿ ಉಳಿದಿದೆ.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ವಿಧಾನ ಪರಿಷತ್ ಸದಸ್ಯ ಭೋಜೇಗೌಡ ಅವರನ್ನು ಕಣಕ್ಕಿಳಿಸುವ ಬಗ್ಗೆ ಗಂಭೀರ ಚಿಂತನೆ ನಡೆದಿದೆ. ಬಹುತೇಕ ಅಭ್ಯರ್ಥಿಯಾಗುವ ಸಾಧ್ಯತೆಗಳು ಹೆಚ್ಚಾಗಿವೆ. ಹಿರಿಯ ನಾಯಕ ಜಯಪ್ರಕಾಶ್ ಹೆಗಡೆ ಜೆಡಿಎಸ್‍ಗೆ ಸೇರ್ಪಡೆಯಾದರೆ ಟಿಕೆಟ್ ನೀಡುವ ಬಗ್ಗೆಯೂ ಜೆಡಿಎಸ್‍ನಲ್ಲಿ ಚರ್ಚೆಯಾಗಿತ್ತು. ಆದರೆ, ಇದುವರೆಗೂ ಹೆಗಡೆ ಅವರು ಯಾವುದೇ ನಿರ್ಧಾರ ಕೈಗೊಳ್ಳದೆ ನಿಗೂಢ ನಡೆ ಅನುಸರಿಸುತ್ತಿದ್ದಾರೆ.

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಅವರನ್ನು ಕಣಕ್ಕಿಳಿಸಲು ಜೆಡಿಎಸ್ ಉದ್ದೇಶಿಸಿದೆ. ವಿಜಯಪುರ ಲೋಕಸಭಾ ಕ್ಷೇತ್ರಕ್ಕೆ ಸಿದ್ದುಬಂಡಿ, ಸುನಿತಾ ರಾಥೋಡ್, ರವಿ ಚೌಹಾಣ್ ಅವರ ಹೆಸರುಗಳು ಪ್ರಸ್ತಾಪವಾಗುತ್ತಿದ್ದು, ರವಿ ಚೌಹಾಣ್ ಅವರಿಗೆ ಟಿಕೆಟ್ ನೀಡುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ