ಮಂಡ್ಯ, ಮಾ.15- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪುತ್ರ, ನಟ ನಿಖಿಲ್ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ದಿ.ಅಂಬರೀಶ್ ಅವರ ಪತ್ನಿ ಹಾಗೂ ನಟಿ ಸುಮಲತಾ ಅವರ ಸ್ಪರ್ಧೆಯಿಂದಾಗಿ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಕಾವು ಏರತೊಡಗಿದೆ.
ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲ ಕೆರಳಿಸಿರುವ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿರುವ ಕ್ಷೇತ್ರಗಳಲ್ಲಿ ಮಂಡ್ಯ ಕ್ಷೇತ್ರವೂ ಒಂದು.
ಜೆಡಿಎಸ್ನ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಮಂಡ್ಯ ಕ್ಷೇತ್ರದಲ್ಲಿ ದಿನದಿಂದ ದಿನಕ್ಕೆ ಚುನಾವಣೆ ರಂಗೇರತೊಡಗಿದೆ.
ಕಳೆದ ಉಪಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಂತೆ ಈ ಚುನಾವಣೆಯಲ್ಲೂ ಕಾಂಗ್ರೆಸ್-ಜೆಡಿಎಸ್ ಚುನಾವಣಾ ಮೈತ್ರಿ ಮಾಡಿಕೊಂಡಿದ್ದು, ಮಂಡ್ಯ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಡಲಾಗಿದೆ.
ಹೀಗಾಗಿ ಈ ಕ್ಷೇತ್ರದಲ್ಲಿ ಎರಡನೆ ಬಾರಿಗೆ ಕಾಂಗ್ರೆಸ್ ಸ್ಪರ್ಧೆ ಇಲ್ಲದಂತಾಗಿದೆ. ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಅಭ್ಯರ್ಥಿಯಾಗಿದ್ದಾರೆ.
ಬಿಜೆಪಿ ಅಭ್ಯರ್ಥಿ ಯಾರೆಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ, ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅವರನ್ನು ಬಿಜೆಪಿ ಬೆಂಬಲಿಸುವ ಮಾತುಗಳು ಕೇಳಿಬರುತ್ತಿವೆ.
ಚಿತ್ರರಂಗದ ನಟ-ನಟಿಯರು ಚುನಾವಣಾ ಅಖಾಡದಲ್ಲಿರುವುದರಿಂದ ರಾಜಕೀಯದ ಜತೆಗೆ ತಾರಾರಂಗು ಮೇಳೈಸಿದೆ.
ನಿಖಿಲ್ ಕುಮಾರಸ್ವಾಮಿ ಹಾಗೂ ಸುಮಲತಾ ಈ ಬಾರಿಯ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಪ್ರತಿಸ್ಪರ್ಧಿಗಳಾಗಲಿದ್ದು, ನೇರ ಹಣಾಹಣಿ ಏರ್ಪಡುವ ಸಾಧ್ಯತೆಗಳಿವೆ.
ಈಗಾಗಲೇ ಇಬ್ಬರು ಅಭ್ಯರ್ಥಿಗಳು ಕ್ಷೇತ್ರದಲ್ಲಿ ಬಿರುಸಿನ ಚುನಾವಣಾ ಪ್ರಚಾರ ಕೈಗೊಂಡಿದ್ದಾರೆ. ಅಲ್ಲದೆ, ಇಬ್ಬರ ಬಗ್ಗೆಯೂ ಪರ-ವಿರೋಧದ ಚರ್ಚೆಗಳು ನಡೆಯುತ್ತಿವೆ.
ಹಾಲಿ ಸಂಸದ ಎಲ್.ಆರ್.ಶಿವರಾಮೇಗೌಡ ಅವರಿಗೆ ಜೆಡಿಎಸ್ ಟಿಕೆಟ್ ನೀಡಿಲ್ಲ. ಆದರೆ, ಜಿಲ್ಲೆ ಪ್ರತಿನಿಧಿಸುವ ಸಚಿವರು, ಶಾಸಕರು ಹಾಗೂ ಜೆಡಿಎಸ್ ಪಕ್ಷದ ಮುಖಂಡರ ಒಪ್ಪಿಗೆ ಪಡೆದು ನಿಖಿಲ್ ಕುಮಾರಸ್ವಾಮಿ ಅವರನ್ನು ಅಭ್ಯರ್ಥಿಯನ್ನಾಗಿ ನಿನ್ನೆ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.
ನಿನ್ನೆ ಮಂಡ್ಯದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್ ಪಕ್ಷದ ಸಚಿವರು, ಶಾಸಕರು, ಮುಖಂಡರು ನಿಖಿಲ್ ಕುಮಾರಸ್ವಾಮಿ ಪರವಾಗಿ ಮತಯಾಚನೆ ಮಾಡಿದ್ದಾರೆ.
ಅದೇ ರೀತಿ ಸುಮಲತಾ ಅವರು ಕೂಡ ಪ್ರತ್ಯೇಕವಾಗಿ ಬೆಂಬಲಿಗರೊಂದಿಗೆ ಹಾಗೂ ಅಂಬರೀಶ್ ಅಭಿಮಾನಿಗಳೊಂದಿಗೆ ಪ್ರಚಾರ ಕಾರ್ಯ ಕೈಗೊಂಡಿದ್ದಾರೆ. ಹೀಗಾಗಿ ಈ ಮಂಡ್ಯ ಲೋಕಸಭಾ ಕ್ಷೇತ್ರ ರಾಜ್ಯ ರಾಜಕೀಯದಲ್ಲೇ ಭಾರೀ ಕುತೂಹಲ ಕೆರಳಿಸಿದೆ.
ಮಂಡ್ಯ ಕ್ಷೇತ್ರವ್ಯಾಪ್ತಿಯ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ ಜೆಡಿಎಸ್ ಶಾಸಕರಿದ್ದಾರೆ. ಕ್ಷೇತ್ರದಲ್ಲಿ ಮೂವರು ಸಚಿವರಿದ್ದಾರೆ. ಇದರಿಂದ ನಿಖಿಲ್ ಕುಮಾರಸ್ವಾಮಿ ಅವರ ಪ್ರಚಾರಕ್ಕೆ ಹೆಚ್ಚಿನ ಒತ್ತಾಸೆ ದೊರೆಯಲಿದೆ. ಆದರೆ, ಸುಮಲತಾ ಅವರಿಗೆ ಅನುಕಂಪದ ಅಲೆ ಇದೆ. ಪರೋಕ್ಷವಾಗಿ ಇತರೆ ರಾಜಕೀಯ ಪಕ್ಷಗಳ ಮುಖಂಡರು ಬೆಂಬಲ ನೀಡುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿಬರುತ್ತಿವೆ.
ನಿಖಿಲ್ ಕುಮಾರಸ್ವಾಮಿ ಅವರು ದೇವೇಗೌಡರು ಹಾಗೂ ಕುಮಾರಸ್ವಾಮಿ ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು ಮತಯಾಚನೆಯಲ್ಲಿ ತೊಡಗಿದ್ದಾರೆ.
ಮದ್ದೂರು, ಮಳವಳ್ಳಿ, ಮಂಡ್ಯ, ನಾಗಮಂಗಲ, ಪಾಂಡವಪುರ, ಶ್ರೀರಂಗಪಟ್ಟಣ, ಕೆಆರ್ ಪೇಟೆ ಹಾಗೂ ಕೆಆರ್ ನಗರ ವಿಧಾನಸಭಾ ಕ್ಷೇತ್ರಗಳು ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುತ್ತಿದ್ದು, ಎಲ್ಲ ಕ್ಷೇತ್ರಗಳಲ್ಲೂ ಜೆಡಿಎಸ್ ಪ್ರಾಬಲ್ಯ ಹೆಚ್ಚಿದೆ.
ಈ ಬಾರಿಯ ಚುನಾವಣೆಯಲ್ಲಿ ಮತದಾರ ಪ್ರಭುಗಳು ಯಾರಿಗೆ ಮಣೆ ಹಾಕಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.