ಮೈತ್ರಿ ಪಕ್ಷಗಳು ಪ್ರಾಮಾಣಿಕತೆಯಿಂದ ಕೆಲಸ ಮಾಡಿದರೆ ಬಿಜೆಪಿಗಿಂತ ಹೆಚ್ಚು ಸ್ಥಾನ-ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

ಬೆಂಗಳೂರು, ಮಾ.18- ಮೈತ್ರಿ ಪಕ್ಷಗಳು ಪರಸ್ಪರ ಪ್ರಾಮಾಣಿಕತೆಯಿಂದ ಕೆಲಸ ಮಾಡಿದರೆ ಬಿಜೆಪಿಗಿಂತಲೂ ಹೆಚ್ಚು ಸ್ಥಾನ ಗೆಲ್ಲಲು ಸಾಧ್ಯವಾಗುತ್ತದೆ. ಆ ನಿಟ್ಟಿನಲ್ಲಿ ಎರಡೂ ಪಕ್ಷಗಳ ಮುಖಂಡರು ಪ್ರಯತ್ನಿಸುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪಮರೇಶ್ವರ್ ಹೇಳಿದರು.

ಸದಾಶಿವನಗರದ ಬಿಡಿಎ ಕ್ವಾಟ್ರಸ್‍ನಲ್ಲಿರುವ ತಮ್ಮ ಸರ್ಕಾರಿ ಬಂಗಲೆಯಲ್ಲಿ ಪದ್ಮಶ್ರೀ ಪುರಸ್ಕøತ ಸಾಲುಮರದ ತಿಮ್ಮಕ್ಕ ಅವರನ್ನು ಅಭಿನಂದಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯೆ ನೀಡಿದರು.

ಜೆಡಿಎಸ್-ಕಾಂಗ್ರೆಸ್ ಒಂದಾದರೆ ನಮ್ಮಿಬ್ಬರ ಶಕ್ತಿ ಬಿಜೆಪಿಗಿಂತ ಹೆಚ್ಚಾಗಲಿದೆ. ಎರಡೂ ಪಕ್ಷಗಳು ಬುದ್ದಿವಂತಿಕೆಯಿಂದ ಗೆಲ್ಲುವ ಕ್ಷೇತ್ರಗಳನ್ನು ಹಂಚಿಕೊಳ್ಳಬೇಕು.

ಬಳ್ಳಾರಿ ಉಪ ಚುನಾವಣೆ ಗೆಲುವು ಸೇರಿದಂತೆ ಕಾಂಗ್ರೆಸ್ ರಾಜ್ಯದಲ್ಲಿ 10 ಕ್ಷೇತ್ರಗಳಲ್ಲಿ ಸಂಸದರನ್ನು ಹೊಂದಿದ್ದು, ಜೆಡಿಎಸ್ ಮಂಡ್ಯ, ಹಾಸನ ಸೇರಿ ಎರಡು ಕ್ಷೇತ್ರಗಳನ್ನು ಗೆದ್ದಿತ್ತು. ಒಟ್ಟು ಈ 12 ಕ್ಷೇತ್ರಗಳಲ್ಲಿ ಹಾಲಿ ಸಂಸದರಿಗೆ ಟಿಕೆಟ್ ನೀಡಬೇಕೆಂದು ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಮತ್ತು ಚುನಾವಣಾ ಸಮಿತಿ ಸಭೆಯಲ್ಲಿ ಚರ್ಚೆಯಾಗಿತ್ತು. ಯಾವುದೇ ಕಾರಣಕ್ಕೂ ಹಾಲಿ ಸಂಸದರನ್ನು ಬದಲಾವಣೆ ಮಾಡಬಾರದು ಎಂಬ ಒತ್ತಾಯವನ್ನು ನಾವು ಮಾಡಿದ್ದೆವು.

ಆದರೆ, 2014ರ ಚುನಾವಣೆಯಲ್ಲಿ ಗೆದ್ದಿದ್ದ ತುಮಕೂರು ಸಂಸದ ಎಸ್.ಪಿ.ಮುದ್ದಹನುಮೇಗೌಡರಿಗೆ ಟಿಕೆಟ್ ತಪ್ಪಿರುವುದು ನನ್ನಲ್ಲಿ ಆತಂಕ ಮತ್ತು ಅಸಮಾಧಾನ ಉಂಟು ಮಾಡಿದೆ. ಇದನ್ನು ನಾನು ವರಿಷ್ಠರ ಗಮನಕ್ಕೆ ತಂದಿದ್ದೇನೆ. ಜೆಡಿಎಸ್ ನಾಯಕರ ಜತೆ ಚರ್ಚೆ ಮಾಡಿ ತುಮಕೂರು ಕ್ಷೇತ್ರವನ್ನು ಮತ್ತೆ ಬಿಟ್ಟುಕೊಡುವಂತೆ ಮನವಿ ಮಾಡಿದ್ದೇನೆ ಎಂದರು.

ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಜತೆಯಲ್ಲೂ ಚರ್ಚಿಸಿದ್ದೇನೆ. ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಆದರೆ, ಅಂತಿಮ ನಿರ್ಣಯ ಏನಾಗಲಿದೆ ಎಂಬುದು ನಮಗೆ ಗೊತ್ತಿಲ್ಲ ಎಂದು ತಿಳಿಸಿದರು.

ದೇವೇಗೌಡರು ತುಮಕೂರಿನಿಂದ ಸ್ಪರ್ಧಿಸುವುದಾದರೆ ನಾವು ಆ ಕ್ಷೇತ್ರ ಬಿಟ್ಟುಕೊಡಲು ಸಿದ್ದರಿದ್ದೇವೆ. ಅವರನ್ನು ಹೊರತು ಪಡಿಸಿ ಬೇರೆ ಯಾರನ್ನೇ ಅಭ್ಯರ್ಥಿ ಮಾಡಿದರೂ ಕ್ಷೇತ್ರವನ್ನು ಮರಳಿ ನಮಗೆ ಬಿಟ್ಟುಕೊಡಬೇಕು ಎಂಬುದು ನಮ್ಮ ಒತ್ತಾಯ. ಇದನ್ನು ದೇವೇಗೌಡರ ಬಳಿಯೂ ಹೇಳಿದ್ದೇವೆ ಎಂದರು.

ಮಾಧ್ಯಮಗಳಲ್ಲಿ ತುಮಕೂರು ಕ್ಷೇತ್ರ ಕೈ ತಪ್ಪಿದ್ದಕ್ಕೆ ಬೇರೆ ಬೇರೆ ವ್ಯಾಖ್ಯಾನಗಳು ಕೇಳಿ ಬರುತ್ತಿವೆ. ನಾವೆಲ್ಲ ಒಟ್ಟಾಗಿದ್ದೇವೆ. ನಮ್ಮ ಮುಖಂಡರ ನಡುವೆ ಯಾವುದೇ ಭೇದ-ಭಾವ ಇಲ್ಲ. ಇಲ್ಲಿ ಯಾವ ಮುಖಂಡರೂ ಒಂದು ಪಾಯಿಂಟ್ ಹೆಚ್ಚು ಸ್ಕೋರ್ ಮಾಡುವ ಪೈಪೋಟಿಯೂ ಇಲ್ಲ. ಚುನಾವಣಾ ಸಂದರ್ಭದಲ್ಲಿ ಆ ರೀತಿಯ ಬೆಳವಣಿಗೆಗಳೂ ಒಳ್ಳೆಯದಲ್ಲ.

ಬಿಜೆಪಿಯನ್ನು ಸೋಲಿಸುವುದಷ್ಟೇ ನಮ್ಮ ಗುರಿ. ಅದಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದೇವೆ. ನರೇಂದ್ರ ಮೋದಿ ಅವರ ಆಡಳಿತದಲ್ಲಿ ಬೇರೆ ಬೇರೆ ರೀತಿಯ ಭ್ರಷ್ಟಾಚಾರ ನಡೆದಿವೆ. ನೋಟು ಅಮಾನೀಕರಣ, ಜಿಎಸ್‍ಟಿ ದರ ನಿಗದಿಯಿಂದ ಜನಸಾಮಾನ್ಯರಿಗೆ ತೊಂದರೆಯಾಗಿದೆ. ರೈತರ ಸಮಸ್ಯೆ ಹಾಗೂ ನಿರುದ್ಯೋಗ ಸಮಸ್ಯೆ ಗಂಭೀರ ಸ್ವರೂಪ ಪಡೆದುಕೊಂಡಿದೆ. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಮಾತ್ರ ಇಂತಹ ಸಮಸ್ಯೆಗಳಿಗೆ ಪರಿಹಾರ ಸಿಗಲು ಸಾಧ್ಯ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ