ಬೆಂಗಳೂರು, ಮಾ.19- ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಅಡಗೂರು ಎಚ್.ವಿಶ್ವನಾಥ್ ಅವರನ್ನು ಇಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಆಸ್ಪತ್ರೆಯಲ್ಲಿ ವಿಶ್ವನಾಥ್ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಕುಮಾರಸ್ವಾಮಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು. ಆಸ್ಪತ್ರೆಯ ನಿರ್ದೇಶಕ ಡಾ.ಮಂಜುನಾಥ್ ಅವರಿಂದಲೂ ವಿಶ್ವನಾಥ್ ಆರೋಗ್ಯದ ಬಗ್ಗೆ ಮುಖ್ಯಮಂತ್ರಿ ಮಾಹಿತಿ ಪಡೆದರು.
ನಿನ್ನೆ ಸಂಜೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕೂಡ ಜಯದೇವ ಆಸ್ಪತ್ರೆಗೆ ಭೇಟಿ ನೀಡಿ ವಿಶ್ವನಾಥ್ ಅವರ ಆರೋಗ್ಯ ವಿಚಾರಿಸಿದ್ದರು.
ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೈದರಾಬಾದ್ಗೆ ತೆರಳಿದ್ದ ಸಂದರ್ಭದಲ್ಲಿ ವಿಶ್ವನಾಥ್ ಅವರು ಲಘು ಹೃದಯಾಘಾತಕ್ಕೆ ಒಳಗಾಗಿದ್ದು, ಶನಿವಾರ ಸಂಜೆ ಬೆಂಗಳೂರಿಗೆ ಮರಳಿದ್ದರು.
ಬೆಂಗಳೂರಿಗೆ ಆಗಮಿಸಿದ ನಂತರ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.