ಇಂದು ರಾತ್ರಿ ಜೆಡಿಎಸ್‍ನ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳ್ಳುವ ಸಾಧ್ಯತೆಯಿದೆ

ಬೆಂಗಳೂರು, ಮಾ.19-ಲೋಕಸಭೆ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಆಯ್ಕೆ ಗೊಂದಲ ಮುಂದುವರೆದಿದ್ದು, ಇಂದು ರಾತ್ರಿ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳ್ಳುವ ಸಾಧ್ಯತೆ ಇದೆ.

ಪ್ರಸಕ್ತ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕೆಂಬ ಉದ್ದೇಶದಿಂದ ಚುನಾವಣಾ ತಯಾರಿ ನಡೆಸಲಾಗುತ್ತಿದೆ.

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯ ಹುಡುಕಾಟ ನಡೆಸಲಾಗುತ್ತಿದೆ. ಈ ಹಿಂದೆ ಇದೇ ಕ್ಷೇತ್ರದಿಂದ ದೇವೇಗೌಡರು ಸ್ಪರ್ಧಿಸಲಿದ್ದಾರೆ ಎಂಬ ಬಗ್ಗೆ ರಾಜಕೀಯವಾಗಿ ಚರ್ಚೆ ನಡೆದಿತ್ತು.

ಕಾಂಗ್ರೆಸ್‍ನೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ 8 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದು, ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಮುಂದುವರೆಸಿದೆ.

ಈಗಾಗಲೇ ಹಾಸನ, ಮಂಡ್ಯ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ನಿನ್ನೆಯಷ್ಟೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರನ್ನು ಜೆಡಿಎಸ್ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿತ್ತು. ಮಿತ್ರ ಪಕ್ಷಗಳ ಅಭ್ಯರ್ಥಿಯಾಗಿ ಈ ಕ್ಷೇತ್ರದಲ್ಲಿ ಕಣಕ್ಕಿಳಿಸಲಾಗುತ್ತದೆ.

ಹಾಸನದಲ್ಲಿ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ, ಮಂಡ್ಯದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪುತ್ರ, ನಟ ನಿಖಿಲ್‍ಕುಮಾರಸ್ವಾಮಿ, ಶಿವಮೊಗ್ಗದಲ್ಲಿ ಮಾಜಿ ಶಾಸಕ ಮಧುಬಂಗಾರಪ್ಪ ಜೆಡಿಎಸ್ ಅಭ್ಯರ್ಥಿಗಳಾಗಿದ್ದಾರೆ.

ಉಳಿದ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಗೊಂದಲ ಮುಂದುವರೆದಿದೆ. ಅದರಲ್ಲೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕೆಂಬ ಬಗ್ಗೆ ಇನ್ನು ಅಂತಿಮ ನಿರ್ಧಾರವಾಗಿಲ್ಲ.

ಬೆಂಗಳೂರು ಉತ್ತರ, ತುಮಕೂರು ಹಾಗೂ ಹಾಸನ ಲೋಕಸಭಾ ಕ್ಷೇತ್ರಗಳಲ್ಲಿ ಗೌಡರು ಸ್ಪರ್ಧಿಸುವ ಬಗ್ಗೆ ಪ್ರಸ್ತಾಪಿಸಲಾಗುತ್ತಿದೆಯಾದರೂ ಸ್ಪಷ್ಟ ನಿರ್ಧಾರ ಕೈಗೊಂಡಿಲ್ಲ.

ಗೌಡರ ತವರು ಕ್ಷೇತ್ರ ಹಾಸನ ಲೋಕಸಭಾ ಕ್ಷೇತ್ರದಿಂದಲೇ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಪ್ರಮುಖವಾಗಿ ಕೇಳಿ ಬಂದಿದ್ದವು. ಅಲ್ಲದೆ, ಹಾಸನದ ಜೆಡಿಎಸ್ ಮುಖಂಡರು ಕಾರ್ಯಕರ್ತರು ಹಾಗೂ ಜನರು ಗೌಡರು ತವರು ಕ್ಷೇತ್ರದಿಂದಲೇ ಸ್ಪರ್ಧಿಸಬೇಕೆಂಬ ಒತ್ತಾಯ ಮಾಡುತ್ತಿದ್ದಾರೆ. ಜೆಡಿಎಸ್ ಅಭ್ಯರ್ಥಿಯಾಗಿರುವ ಪ್ರಜ್ವಲ್ ರೇವಣ್ಣ ಗೌಡರು ಸ್ಪರ್ಧಿಸುವುದಾದರೆ ಕ್ಷೇತ್ರ ಬಿಟ್ಟುಕೊಡಲು ಘೋಷಿಸಿದ್ದಾರೆ.

ಜೆಡಿಎಸ್‍ಗೆ ನೀಡಲಾಗಿರುವ ತುಮಕೂರು ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್‍ಗೆ ಬಿಟ್ಟುಕೊಡುವಂತೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸಂಸದ ಮುದ್ದಹನುಮೇಗೌಡ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಜೆಡಿಎಸ್ ವರಿಷ್ಠರಲ್ಲಿ ಮನವಿ ಮಾಡಿದ್ದಾರೆ.

ಜೊತೆಗೆ ದೇವೇಗೌಡರು ತುಮಕೂರು ಕ್ಷೇತ್ರದಿಂದ ಸ್ಪರ್ಧಿಸುವುದಾದರೆ ಬೆಂಬಲವನ್ನು ವ್ಯಕ್ತಪಡಿಸುವುದಾಗಿ ಹೇಳಿದ್ದಾರೆ. ತುಮಕೂರು ಕ್ಷೇತ್ರದಿಂದಲೇ ಗೌಡರು ಸ್ಪರ್ಧಿಸುವ ಬಗ್ಗೆ ಗಂಭೀರ ಚಿಂತನೆ ನಡೆಸಲಾಗುತ್ತಿದೆ.

ದೇವೇಗೌಡರು ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾದರೆ ಬೆಂಗಳೂರು ಉತ್ತರ, ಹಾಸನ ಹಾಗೂ ತುಮಕೂರು ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ.

ಉತ್ತರ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಮಾಜಿ ಸಚಿವ ಆನಂದ್‍ಅಸ್ನೋಟಿಕರ್ ಜೆಡಿಎಸ್ ಅಭ್ಯರ್ಥಿಯಾಗುವ ಸಾಧ್ಯತೆಗಳು ಹೆಚ್ಚಾಗಿವೆ.

ವಿಜಯಪುರ ಲೋಕಸಭಾ ಕ್ಷೇತ್ರದಲ್ಲಿ ರವಿ ಚೌಹಾಣ್ ಹಾಗೂ ಸುನೀಲ್‍ರಥೋಡ್ ಅವರ ಹೆಸರುಗಳು ಪ್ರಮುಖವಾಗಿ ಕೇಳಿ ಬರುತ್ತಿದ್ದು, ಇವರಿಬ್ಬರಲ್ಲಿ ಒಬ್ಬರನ್ನು ಆಯ್ಕೆ ಮಾಡುವ ಸಾಧ್ಯತೆಗಳಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ