ಬೆಂಗಳೂರು,ಮಾ.22- ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಆಯ್ಕೆ ಗೊಂದಲ ಮುಂದುವರೆದಿದೆ. ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಚುನಾವಣಾ ಪೂರ್ವ ಹೊಂದಾಣಿಕೆ ಮಾಡಿಕೊಂಡಿದ್ದು, ಬೆಂಗಳೂರು ಉತ್ತರ ಕ್ಷೇತ್ರವನ್ನು ಜೆಡಿಎಸ್ಗೆ ನೀಡಲಾಗಿದೆ.
ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿ ನಾಲ್ಕು ದಿನ ಕಳೆದರೂ ಈ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಯಾರು ಎಂಬುದು ಇನ್ನು ಅಂತಿಮವಾಗಿಲ್ಲ. ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ, ವಿಧಾನಪರಿಷತ್ ಸದಸ್ಯ ಬಿ.ಎಂ.ಫಾರೂಖ್, ವಿಧಾನಪರಿಷತ್ ಮಾಜಿ ಸಭಾಪತಿ ಬಿ.ಎಲ್.ಶಂಕರ್ ಅವರ ಹೆಸರುಗಳು ಪ್ರಸ್ತಾಪವಾಗುತ್ತಿದೆಯಾದರೂ ಇನ್ನು ಅಂತಿಮವಾಗಿಲ್ಲ.
ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ ಅವರನ್ನು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಭೇಟಿ ಮಾಡಿ ಮಾತುಕತೆಯನ್ನು ನಡೆಸಿದ್ದಾರೆ. ಆದರೆ ಸ್ಪರ್ಧಿಸುವ ಬಗ್ಗೆ ಕೃಷ್ಣಭೈರೇಗೌಡರು ಆಸಕ್ತಿ ತೋರಿಲ್ಲ.
ಈ ಕ್ಷೇತ್ರದಿಂದ ನ್ಯಾಯಮೂರ್ತಿ ಒಬ್ಬರನ್ನು ಕಣಕ್ಕಿಳಿಸಲು ಜೆಡಿಎಸ್ ಗಂಭೀರ ಚಿಂತನೆ ನಡೆಸಿದೆ ಎನ್ನಲಾಗಿದೆ. ಆದರೂ ಕೂಡ ಬೆಂಗಳೂರು ಉತ್ತರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಯಾರು ಕಣಕ್ಕಿಳಿಯಲಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ.
ಬೆಂಗಳೂರು ಉತ್ತರ ಕ್ಷೇತ್ರದಿಂದಲೇ ಸ್ಫರ್ಧಿಸುವಂತೆ ಪಕ್ಷದ ಶಾಸಕರು, ಮುಖಂಡರು, ಕಾರ್ಯಕರ್ತರು ಗೌಡರನ್ನು ಒತ್ತಾಯ ಮಾಡುತ್ತಲೇ ಇದ್ದಾರೆ. ಸ್ಪರ್ಧೆ ಬಗ್ಗೆ ಗೌಡರು ಇದುವರೆಗೂ ಗುಟ್ಟು ಬಿಟ್ಟುಕೊಟ್ಟಿಲ್ಲ.
ತುಮಕೂರು ಲೋಕಸಭಾ ಕ್ಷೇತ್ರದಲ್ಲೂ ಸ್ಪರ್ಧಿಸುವಂತೆ ಸ್ಥಳೀಯ ಶಾಸಕರು ಹಾಗೂ ಜೆಡಿಎಸ್ ಮುಖಂಡರ ಒತ್ತಾಯವಿದೆ. ಎರಡೂ ಕ್ಷೇತ್ರಗಳಲ್ಲಿ ಒತ್ತಾಯ ಇರುವುದರಿಂದ ಯಾವ ಕ್ಷೇತ್ರ ಆಯ್ಕೆ ಮಾಡಿಕೊಳ್ಳಬೇಕೆಂಬ ಲೆಕ್ಕಾಚಾರದಲ್ಲಿ ಗೌಡರು ತೊಡಗಿದ್ದಾರೆ. ಜೆಡಿಎಸ್ ಮೂಲಗಳ ಪ್ರಕಾರ ತುಮಕೂರು ಕ್ಷೇತ್ರವನ್ನು ಗೌಡರು ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಇದೆ.
ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಬಗ್ಗೆ ಇಂದು ಸಂಜೆ ಪಕ್ಷದ ವರಿಷ್ಠರು ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿವೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.