ತುಮಕೂರು, ಮಾ.23-ಸಂಸದ ಎಸ್.ಪಿ.ಮುದ್ದಹನುಮೇಗೌಡರು ತುಮಕೂರು ಲೋಕಸಭಾ ಕ್ಷೇತ್ರದಿಂದ ಬಂಡಾಯವಾಗಿ ಸ್ಪರ್ಧಿಸುವ ಬಗ್ಗೆ ಚಿಂತನೆ ನಡೆಸಿದ್ದು, ಸದ್ಯಕ್ಕೆ ಅವರ ನಡೆ ನಿಗೂಢವಾಗಿದೆ. ಇನ್ನೆರಡು ದಿನ ತಮ್ಮ ರಾಜಕೀಯ ನಡೆಯ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಕಾಂಗ್ರೆಸ್-ಜೆಡಿಎಸ್ ಚುನಾವಣಾ ಪೂರ್ವ ಮೈತ್ರಿಯಿಂದಾಗಿ ತುಮಕೂರು ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟುಕೊಡಲಾಗಿದೆ. ಕಾಂಗ್ರೆಸ್‍ನ ಹಾಲಿ ಸಂಸದರಿದ್ದರೂ ಜೆಡಿಎಸ್‍ಗೆ ಬಿಟ್ಟು ಕೊಟ್ಟಿರುವ ಬಗ್ಗೆ ಮುದ್ದಹನುಮೇಗೌಡ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದರು.
ಕಾಂಗ್ರೆಸ್‍ಗೇ ಬಿಟ್ಟುಕೊಡುವಂತೆ ಮುದ್ದಹನುಮೇಗೌಡ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ಕಾಂಗ್ರೆಸ್‍ನ ನಾಯಕರು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದ್ದರು. ಕೊನೆ ಘಳಿಗೆ ವರೆಗೂ ಮೈತ್ರಿಯ ನಿರ್ಧಾರದಲ್ಲಿ ಬದಲಾವಣೆ ಕಂಡು ಬರದ ಹಿನ್ನೆಲೆಯಲ್ಲಿ ಮುದ್ದಹನುಮೇಗೌಡರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಒತ್ತಡವೂ ಹೆಚ್ಚಾಗಿದ್ದು, ಈ ಬಗ್ಗೆ ಗಂಭೀರ ಚಿಂತನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಎಸ್.ಪಿ. ಮುದ್ದಹನುಮೇಗೌಡ ಇಂದು ಹೆಬ್ಬೂರು ಸಮೀಪ ಇರುವ ಅವರ ತೋಟದಲ್ಲಿ ಸಭೆ ಸೇರಿ ತಮ್ಮ ಮುಂದಿನ ರಾಜಕೀಯ ನಡೆ ಕುರಿತು ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಹಿತೈಷಿಗಳ ಸಭೆ ನಡೆಸಿ ಅಭಿಪ್ರಾಯ ಪಡೆದಿದ್ದಾರೆ.
ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಕಳೆದ 5 ವರ್ಷಗಳಲ್ಲಿ ಸಕ್ರಿಯರಾಗಿ ಓಡಾಡುತ್ತಾ ಜನಪರ ಕಾಳಜಿಯೊಂದಿಗೆ ಅಭಿವೃದ್ಧಿ ಕಾರ್ಯಗಳನ್ನು ಮಾಡಿರುವ ಸಂಸದ ಎಸï.ಪಿ. ಮುದ್ದಹನುಮೇಗೌಡರಿಗೆ ಟಿಕೆಟ ನೀಡದೆ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟು ಕೊಟ್ಟಿರುವ ಪಕ್ಷದ ನಾಯಕರ ಧೋರಣೆಯ ಸಭೆಯಲ್ಲಿ ಪಾಲ್ಗೊಂಡಿದ್ದ ಸ್ಥಳೀಯ ಕಾಂಗ್ರೆಸ್ ಮುಖಂಡರು ಖಂಡಿಸಿದರು.
ಕಾಂಗ್ರೆಸ್ ಕ್ಷೇತ್ರವನ್ನು ಉಳಿಸಿಕೊಳ್ಳದೆ ಜೆಡಿಎಸ್‍ಗೆ ಬಿಟ್ಟು ಕೊಟ್ಟಿರುವುದರಿಂದ ಜಿಲ್ಲೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಲಿದ್ದು, ಪಕ್ಷದ ಟಿಕೆಟ್ ಸಿಗದಿದ್ದರೂ ಪಕ್ಷೇತರವಾಗಿ ಸಂಸದರು ಚುನಾವಣೆಗೆ ಸ್ಪರ್ಧಿಸಲೇಬೇಕು ಎಂಬ ಒತ್ತಾಯಗಳು ಸಭೆಯಲ್ಲಿ ಕೇಳಿ ಬಂದಿವೆ ಎನ್ನಲಾಗಿದೆ.
ಯಾವುದೇ ಕಾರಣಕ್ಕೂ ಈ ಬಾರಿಯ ಚುನಾವಣೆಯಿಂದ ಹಿಂದೆ ಸರಿಯಬಾರದು. ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿಯಬೇಕು. ನೀವು ಚುನಾವಣೆಯಲ್ಲಿ ಸ್ಪರ್ಧಿಸಿದರೆ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರು, ಮಾಜಿ ಶಾಸಕರು ಸೇರಿದಂತೆ ಕಾರ್ಯಕರ್ತರು ನಿಮ್ಮ ಪರವಾಗಿ ನಿಲ್ಲಲಿದ್ದಾರೆ ಎಂಬ ಭರವಸೆಯ ಮಾತುಗಳು ವ್ಯಕ್ತವಾದವು.
ಒಂದು ವೇಳೆ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್‍ನಿಂದ ಅಭ್ಯರ್ಥಿ ಹಾಕಿದರೆ ಮುಂದಿನ ದಿನಗಳಲ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ತನ್ನ ಅಸ್ತಿತ್ವ ಕಳೆದುಕೊಳ್ಳಬೇಕಾಗುತ್ತದೆ. ಅಲ್ಲದೆ ಸಮ್ಮಿಶ್ರ ಸರ್ಕಾರದಲ್ಲಿ ಉಪಮುಖ್ಯಮಂತ್ರಿಗಳೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೂ ತೀವ್ರ ಮುಖಭಂಗವಾಗಲಿದೆ. ಕ್ಷೇತ್ರ ಉಳಿಸಿಕೊಳ್ಳುವಂತೆ ಕಾಂಗ್ರೆಸ್ ಹೈಕಮಾಂಡ್‍ಗೆ ಮತ್ತು ಕ್ಷೇತ್ರ ಬಿಟ್ಟು ಕೊಡುವಂತೆ ಜೆಡಿಎಸ್ ವರಿಷ್ಠರಿಗೆ ಪರಿಪರಿಯಾಗಿ ಮನವಿ ಮಾಡಿದರೂ ಕವಡೆ ಕಾಸಿನ ಕಿಮ್ಮತ್ತು ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಚುನಾವಣೆ ಘೋಷಣೆಯಾಗುವುದಕ್ಕಿಂತ ಮೊದಲಿನಿಂದಲೂ ಹಾಲಿ ಸಂಸದ ಮುದ್ದಹನುಮೇಗೌಡ ಅವರ ಪರ ಬ್ಯಾಂಟಿಂಗ್ ಮಾಡುತ್ತಿರುವ ಮಧುಗಿರಿಯ ಮಾಜಿ ಶಾಸಕ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್. ರಾಜಣ್ಣ ಅವರು, ತುಮಕೂರು ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟು ಕೊಟ್ಟಿದ್ದೇ ಆದರೆ ಜಿಲ್ಲೆಯಲ್ಲಿ ಕಾಂಗ್ರೆಸ್ ನಿರ್ನಾಮವಾಗಲಿದೆ. 8 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ತುಮಕೂರು ಲೋಕಸಭಾ ಕ್ಷೇತ್ರ ಸಂಪೂರ್ಣ ಜೆಡಿಎಸ್‍ಮಯವಾಗಲಿದೆ. ಈ ಬಗ್ಗೆ ತಾವು ಪಕ್ಷದ ನಾಯಕರನ್ನು ಭೇಟಿ ಮಾಡಿ ಮನವರಿಕೆ ಮಾಡಿಕೊಟ್ಟಿದ್ದೇನೆ ಎಂದು ಹೇಳಿದ್ದರು.
ಸಭೆಯಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಹಿತೈಷಿಗಳಿಂದ ವ್ಯಕ್ತವಾದ ಅಭಿಪ್ರಾಯಗಳನ್ನು ಆಲಿಸಿದ ಸಂಸದ ಮುದ್ದಹನುಮೇಗೌಡ ಅವರು ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲು ಎರಡು ದಿನ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು ಎಂದು ಗೊತ್ತಾಗಿದೆ.
ಸಂಸದ ಎಸ್.ಪಿ. ಮುದ್ದಹನುಮೇಗೌಡ ಅವರು ಈಗ ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.
ಸಭೆಯಲ್ಲಿ ತುಮಕೂರು ನಗರ, ತುಮಕೂರು ಗ್ರಾಮಾಂತರ, ತುರುವೇಕೆರೆ, ಚಿಕ್ಕನಾಯಕನಹಳ್ಳಿ, ತಿಪಟೂರು, ಗುಬ್ಬಿ, ಕೊರಟಗೆರೆ, ಮಧುಗಿರಿ ಹಾಗೂ ಕುಣಿಗಲï ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸï ಕಾರ್ಯಕರ್ತರು, ಮುಖಂಡರು ಭಾಗವಹಿಸಿದ್ದರು.
ಜಿಲ್ಲಾ ಕಾಂಗ್ರೆಸ್‍ನಲ್ಲಿ ಭುಗಿಲೆದ್ದ ಆಕ್ರೋಶ
ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದರು ಇದ್ದರೂ ಸಹ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟು ಕೊಟ್ಟಿರುವ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ವಿರುದ್ಧ ಜಿಲ್ಲಾ ಕಾಂಗ್ರೆಸ್‍ನಲ್ಲಿ ಅಸಮಾಧಾನ ಭುಗಿಲೆದ್ದಿದೆ.
ಹಾಲಿ ಸಂಸದ ಎಸï.ಪಿ. ಮುದ್ದಹನುಮೇಗೌಡರವರಿಗೆ ಟಿಕೆಟ್‍ನೀಡಬೇಕು ಎಂದು ಕಾರ್ಯಕರ್ತರು ಉಪಮುಖ್ಯಮಂತ್ರಿ ಡಾ. ಜಿ. ಜಿ. ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ರವರ ಮೇಲೆ ತೀವ್ರ ಒತ್ತಡ ಹೇರುತ್ತಲೇ ಇದ್ದಾರೆ. ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿಯವರ ಮೇಲೂ ತೀವ್ರ ಒತ್ತಡ ಹೇರಿ ಯಾವುದೇ ಕಾರಣಕ್ಕೂ ಜೆಡಿಎಸ್‍ಗೆ ಕ್ಷೇತ್ರವನ್ನು ಬಿಟ್ಟು ಕೊಡಬಾರದು ಎಂದು ಮನವಿ ಮಾಡಿದ್ದರೂ ಸಹ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟು ಕೊಟ್ಟಿರುವ ಹಿನ್ನೆಲೆಯಲ್ಲಿ ಕೈ ಕಾರ್ಯಕರ್ತರ ಆಕ್ರೋಶದ ಕಟ್ಟೆ ಹೊಡೆದಿದೆ.