ಕೇರಳದ ವಯನಾಡ್ ನಿಂದ ರಾಹುಲ್ ಗಾಂಧಿ ಸ್ಪರ್ಧೆ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಕೇರಳದ ವಯನಾಡ್‌ ಕ್ಷೇತ್ರದಿಂದಲೂ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಅಖಿಲ ಭಾರತ ಕಾಂಗ್ರೆಸ್​ ಸಮಿತಿಯ ಪ್ರಧಾನ ಕಾರ್ಯದರ್ಶಿ, ಕೇರಳ ಮಾಜಿ ಮುಖ್ಯಮಂತ್ರಿ ಉಮ್ಮನ್​ ಚಾಂಡಿ, “ಕೇರಳದ ಯಾವುದಾದರೂ ಒಂದು ಕ್ಷೇತ್ರದಿಂದ ಸ್ಪರ್ಧೆ ಮಾಡುವಂತೆ ನಾವು ರಾಹುಲ್​ ಗಾಂಧಿ ಅವರನ್ನು ಕೋರಿದ್ದೇವೆ. ವಯನಾಡು ಕ್ಷೇತ್ರವನ್ನು ಅವರಿಗೆ ಅಂಗೀಕಾರಕ್ಕಾಗಿ ನೀಡಲಾಗಿದೆ. ಈ ಕೋರಿಕೆಯ ಸಂಬಂಧ ಅವರು ಬಹುತೇಕ ಇಂದು ತಮ್ಮ ಅಂತಿಮ ನಿರ್ಧಾರ ಪ್ರಕಟ ಮಾಡಲಿದ್ದಾರೆ,” ಎಂದು ಹೇಳಿದ್ದಾರೆ.

ರಾಹುಲ್‌ ಅವರು ಈ ಪ್ರಸ್ತಾವವನ್ನು ಪರಿಶೀಲಿಸುತ್ತಿದ್ದು ಈ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

ಸದ್ಯ 20 ಕ್ಷೇತ್ರಗಳಿರುವ ಕೇರಳದಲ್ಲಿ ಕಾಂಗ್ರೆಸ್​ 16 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದ್ದು, 14 ಕ್ಷೇತ್ರಗಳಿಗೆ ಈಗಾಗಲೇ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಆದರೆ, ವಯನಾಡು ಮತ್ತು ವಡಕಾರ ಕ್ಷೇತ್ರಗಳಿಗೆ ಇನ್ನೂ ಅಭ್ಯರ್ಥಿಗಳನ್ನು ಘೋಷಿಸಿಲ್ಲ. ಅಲ್ಲದೇ ಕೇರಳದ ವಯನಾಡ್‌ ಲೋಕಸಭಾ ಕ್ಷೇತ್ರ ಕಾಂಗ್ರೆಸ್‌ನ ಭದ್ರಕೋಟೆಯಾಗಿದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಮತ್ತು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ದಕ್ಷಿಣದ ರಾಜ್ಯಗಳಿಂದ ಸ್ಪರ್ಧಿಸಿದ್ದಾರಾದರೂ ಕೇರಳದಿಂದ ಈ ತನಕ ಸ್ಪರ್ಧಿಸಿಲ್ಲ.

Lok sabha election,rahul gandhi,contest kerala wayanad

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ