
ಕೊಪ್ಪಳ,ಮಾ.24- ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಣಕ್ಕಿಳಿಯುವ ಸಾಧ್ಯತೆಯಿದೆ ಎಂಬ ಹಿನ್ನೆಲೆಯಲ್ಲಿ ಸಂಗಣ್ಣ ಅವರ ಟಿಕೆಟನ್ನು ತಡೆಹಿಡಿಯಲಾಗಿತ್ತು. ಈಗ ಈ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ರಾಜಶೇಖರ ಹಿಟ್ನಾಳ ಅವರಿಗೆ ಟಿಕೆಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಕರಡಿ ಸಂಗಣ್ಣ ಅವರನ್ನೇ ಕಣಕ್ಕಿಳಿಸಲು ಬಿಜೆಪಿ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.
ಬಿಜೆಪಿ ಪಕ್ಷದಿಂದ 2 ಹಂತದಲ್ಲಿ ಟಿಕೆಟ್ ಘೋಷಣೆಯಾದರೂ ಪಟ್ಟಿಯಲ್ಲಿ ಕರಡಿ ಸಂಗಣ್ಣ ಅವರ ಹೆಸರಿರಲಿಲ್ಲ. ಕರಡಿ ಸಂಗಣ್ಣ ಅವರಿಗೆ ಟಿಕೆಟ್ ಸಿಗುವುದಿಲ್ಲವೆಂಬ ಸಂಶಯ ವ್ಯಕ್ತವಾಗಿತ್ತು. ಆದರೆ ಕಾಂಗ್ರೆಸ್ ಈ ಕ್ಷೇತ್ರದಿಂದ ಯಾರನ್ನು ಕಣಕ್ಕಿಳಿಸುತ್ತದೆ ಎಂದು ಬಿಜೆಪಿ ನಿರೀಕ್ಷಿಸುತ್ತಿತ್ತು.
ಈಗ ಜಿಲ್ಲಾ ಪಂಚಾಯತ್‍ನ ಮಾಜಿ ಅಧ್ಯಕ್ಷ ರಾಜಶೇಖರ ಹಿಟ್ನಾಳ್ ಅವರಿಗೆ ಟಿಕೆಟ್ ನೀಡಿರುವುದರಿಂದ ಕರಡಿ ಸಂಗಣ್ಣ ಅವರನ್ನೇ ಕಣಕ್ಕಿಳಿಸಲು ನಿರ್ಧರಿಸಲಾಗಿದೆ ಎನ್ನಲಾಗಿದೆ.
ಸಿ.ವಿ.ಚಂದ್ರಶೇಖರ್, ಕೆ.ವಿರೂಪಾಕ್ಷಪ್ಪ ಸಿಡ್ನಾಳ್, ಡಾ.ಮಲ್ಲಿಕಾರ್ಜುನ್ ಮುಂತಾದವರು ಕ್ಷೇತ್ರದಲ್ಲಿ ಆಕಾಂಕ್ಷಿಗಳಾಗಿದ್ದಾರೆ. ಅಲ್ಲದೇ ಪ್ರಧಾನಿ ನರೇಂದ್ರ ಮೊದಿಯವರು ಈ ಕ್ಷೇತ್ರದಿಂದ ಸ್ಪರ್ಧಿಸಲಿ ಎಂದು ಹಲವರು ಒತ್ತಾಯ ಹೇರಿದ್ದಾರೆ. ಇಲ್ಲಿ ಮೋದಿಯವರು ಸ್ಪರ್ಧಿಸಿದರೆ ದಕ್ಷಿಣ ರಾಜ್ಯಗಳ ಮೇಲೆ ಪ್ರಭಾವ ಬೀರಲಿದೆ ಎಂಬುದು ಹಲವರ ಅಭಿಪ್ರಾಯವಾಗಿದೆ.
ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ 2ನೇ ಹಂತದಲ್ಲಿ ಚುನಾವಣೆ ನಡೆಯುವುದರಿಂದ ನಾಮಪತ್ರ ಸಲ್ಲಿಸಲು ಇನ್ನೂ ಕಾಲಾವಕಾಶವಿದೆ. ಕೊನೆಯ ಕ್ಷಣದಲ್ಲಿ ಪಕ್ಷ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕು.