ಹಾಸನ, ಮಾ.25-ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸಂಸದ ಮುದ್ದಹನುಮೇಗೌಡ ಸ್ಪರ್ಧಿಸುವ ಬಗ್ಗೆ ಪ್ರತಿಕ್ರಿಯಿಸಲು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ನಿರಾಕರಿಸಿದರು.
ಮಾವಿನ ಕೆರೆ ಬೆಟ್ಟದಲ್ಲಿ ರಂಗನಾಥಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ತಮ್ಮ ಮನೆಗೆ ಬಂದು ತುಮಕೂರಿನಿಂದ ಸ್ಪರ್ಧಿಸುವಂತೆ ಮನವಿ ಮಾಡಿದ್ದರು ಎಂದರು.
ಮುಖ್ಯಮಂತ್ರಿ ಕುಮಾರಸ್ವಾಮಿ, ಪಕ್ಷದ ಮುಖಂಡರು, ಕಾರ್ಯಕರ್ತರ ಒತ್ತಡಕ್ಕೆ ಕಟ್ಟುಬಿದ್ದು, ತುಮಕೂರಿನಿಂದ ಸ್ಪರ್ಧಿಸುತ್ತಿರುವುದಾಗಿ ತಿಳಿಸಿದರು.
ತುಮಕೂರಿನಿಂದ ಸ್ಪರ್ಧೆ ಮಾಡಲು ನಿರ್ಧರಿಸಿರಲಿಲ್ಲ. ಆದರೆ ಎಲ್ಲರ ಒತ್ತಡಕ್ಕೆ ಮಣಿದು ಕಣಕ್ಕಿಳಿಯುವ ತೀರ್ಮಾನ ಕೈಗೊಳ್ಳಬೇಕಾಯಿತು. ತುಮಕೂರು ಮತ್ತು ಬೆಂಗಳೂರು ಉತ್ತರ ಎರಡೂ ಕ್ಷೇತ್ರಗಳಲ್ಲೂ ಸ್ಪರ್ಧಿಸುವಂತೆ ಒತ್ತಡವಿತ್ತು. ಆದರೆ ತಾವು ತುಮಕೂರಿನಲ್ಲಿ ಮಾತ್ರ ಸ್ಪರ್ಧೆ ಮಾಡುತ್ತಿದ್ದು, ಎರಡೂ ಕಡೆ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣಭೆರೇಗೌಡ ಅವರು ಬೆಂಗಳೂರು ಉತ್ತರ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುವಂತೆ ಮನವಿ ಮಾಡಿದ್ದರು. ಆದರೆ ಈ ಕ್ಷೇತ್ರವನ್ನು ಬಿಟ್ಟು ಕೊಟ್ಟಿದ್ದು, ರಂಗನಾಥ ಸ್ವಾಮಿಯ ದಯೆಯಿಂದ ತುಮಕೂರಿನಲ್ಲಿ ಸ್ಪರ್ಧಿಸುತ್ತಿರುವುದಾಗಿ ಹೇಳಿದರು.