ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ

ಮೈಸೂರು, ಮಾ.25- ರಾಜ್ಯದ ಪ್ರತಿಷ್ಠಿತ ಕ್ಷೇತ್ರವೆಂದೇ ಖ್ಯಾತಿ ಪಡೆದಿರುವ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.

ಇದಕ್ಕೂ ಮುನ್ನ ನಿಖಿಲ್ ಅವರು ತಮ್ಮ ಕುಟುಂಬದ ಸದಸ್ಯರೊಂದಿಗೆ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ನಾಡ ಅಧಿದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.ಇದೇ ವೇಳೆ ತಮ್ಮ ನಾಮಪತ್ರವನ್ನು ದೇವಿ ಬಳಿ ಇಟ್ಟು ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.

ನಂತರ ಮಂಡ್ಯ ಜಿಲ್ಲಾ ಚುನಾವಣಾಧಿಕಾರಿ ಕಚೇರಿಗೆ ತೆರಳಿ ನಿಖಿಲ್ ಅವರು ನಾಮಪತ್ರ ಸಲ್ಲಿಸಿದರು.

ನಿಖಿಲ್ ಅವರಿಗೆ ತಾತ ಎಚ್.ಡಿ.ದೇವೇಗೌಡರು, ತಂದೆ ಕುಮಾರಸ್ವಾಮಿ, ತಾಯಿ ಅನಿತಾಕುಮಾರಸ್ವಾಮಿ ಅವರು ಸಾಥ್ ನೀಡಿದರು.ಪೂಜೆ ಸಲ್ಲಿಸಿದ ನಂತರ ಮೈಸೂರಿನಿಂದಲೇ ಜೆಡಿಎಸ್ ಪ್ರಚಾರ ವಾಹನಕ್ಕೆ ಚಾಲನೆ ನೀಡಲಾಯಿತು.

ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲೂ ಕುಮಾರಪರ್ವ ಪ್ರಚಾರ ವಾಹನಕ್ಕೆ ಇಲ್ಲೇಯೇ ಚಾಲನೆ ನೀಡಿದ ಹಿನ್ನೆಲೆಯಲ್ಲಿ ಇಂದು ಜೆಡಿಎಸ್ ಪ್ರಚಾರ ವಾಹನಕ್ಕೆ ಚಾಲನೆ ನೀಡಲಾಯಿತು.ಈ ವೇಳೆ ಸಾವಿರಾರು ಮಂದಿ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ