ಬೆಂಗಳೂರು, ಮಾ.25-ರಾಜ್ಯದಲ್ಲಿ ಮೊದಲ ಹಂತದಲ್ಲಿ ನಡೆಯುವ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆ ಕಡೆಯ ದಿನವಾಗಿದೆ.
ಮೊದಲ ಹಂತದಲ್ಲಿ ರಾಜ್ಯದ 14 ವಿಧಾನಸಭಾ ಕ್ಷೇತ್ರಗಳಿಗೆ ಮಾ.19 ರಂದು ಅಧಿಸೂಚನೆ ಹೊರಡಿಸಲಾಗಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿತ್ತು. ನಾಳೆ ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದ್ದು, ಮಾ.27 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಮಾ.29ರವರೆಗೆ ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆಯಲು ಅವಕಾಶವಿದೆ.
ಮಾ.22ರವರೆಗೆ 14 ಲೋಕಸಭಾ ಕ್ಷೇತ್ರಗಳಲ್ಲಿ 72 ಅಭ್ಯರ್ಥಿಗಳು 83 ನಾಮಪತ್ರವನ್ನು ಸಲ್ಲಿಸಿದ್ದರು. ಇಂದು ಬಹುತೇಕ ಕ್ಷೇತ್ರಗಳಲ್ಲಿ ರಾಜಕೀಯ ಪಕ್ಷಗಳ ಅಭ್ಯರ್ಥಿಗಳೂ ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ನಾಮಪತ್ರವನ್ನು ಸಲ್ಲಿಸಲಾಗಿದೆ.
ಬೆಂಗಳೂರು ಕೇಂದ್ರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮೈಸೂರು-ಕೊಡಗು, ಮಂಡ್ಯ, ತುಮಕೂರು, ಚಿತ್ರದುರ್ಗ, ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಗಳಿಗೆ ಏ.18 ರಂದು ಮೊದಲ ಹಂತದಲ್ಲಿ ಮತದಾನ ನಡೆಯಲಿದ್ದು, ಮತ ಎಣಿಕೆ ಮೇ 23 ರಂದು ನಡೆದು ಅಂದೇ ಫಲಿತಾಂಶ ಹೊರಬೀಳಲಿದೆ.