ಬೆಂಗಳೂರು,ಮಾ.27- ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಜೆಡಿಎಸ್ ಶಾಸಕರು ಹಾಗೂ ಮುಖಂಡರ ಸಭೆ ಇಂದು ಸಂಜೆ ಜೆಪಿಭವನದಲ್ಲಿ ನಡೆಯಲಿದೆ.
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡರು ಸಹ ಪಾಲ್ಗೊಳ್ಳಲಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ಮೈತ್ರಿ ಅಭ್ಯರ್ಥಿ ಕೃಷ್ಣಭೆರೇಗೌಡರ ಗೆಲುವಿಗೆ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಶ್ರಮಿಸುವಂತೆ ಗೌಡರು ಸಲಹೆ ಮಾಡಲಿದ್ದು, ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯ ಗೆಲುವಿಗೆ ರೂಪಿಸಬೇಕಾದ ಚುನಾವಣಾ ಕಾರ್ಯತಂತ್ರಗಳ ಬಗ್ಗೆಯೂ ಗಂಭೀರ ಚರ್ಚೆ ನಡೆಸಲಿದ್ದಾರೆ.
ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರವನ್ನು ಕಾಂಗ್ರೆಸ್, ಜೆಡಿಎಸ್ಗೆ ಬಿಟ್ಟುಕೊಟ್ಟಿತ್ತು.ಆದರೆ ಕೊನೆ ಗಳಿಗೆಯಲ್ಲಿ ಜೆಡಿಎಸ್ ಈ ಕ್ಷೇತ್ರವನ್ನು ಕಾಂಗ್ರೆಸ್ಗೆ ಬಿಟ್ಟುಕೊಟ್ಟಿರುವುದರಿಂದ ಕೃಷ್ಣಭೆರೇಗೌಡ ಅವರು ಮೈತ್ರಿ ಅಭ್ಯರ್ಥಿಯಾಗಿ ಚುನಾವಣಾ ಕಣದಲ್ಲಿದ್ದಾರೆ.
ಪ್ರಸಕ್ತ ಚುನಾವಣೆಯಲ್ಲಿ ಉಭಯ ಪಕ್ಷಗಳು ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುತ್ತಿರುವುದರಿಂದ ಜೆಡಿಎಸ್ ಸ್ಪರ್ಧಿಸಿರುವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ನಾಯಕರು, ಮುಖಂಡರು, ಕಾರ್ಯಕರ್ತರು ಸಹಕಾರ ನೀಡುವಂತೆ, ಜೆಡಿಎಸ್ನ ನಾಯಕರು, ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಅಭ್ಯರ್ಥಿ ಸ್ಪರ್ಧಿಸುವ ಕ್ಷೇತ್ರದಲ್ಲಿ ಬೆಂಬಲ ನೀಡಿ ಗೆಲುವಿಗೆ ಶ್ರಮಿಸಬೇಕಾಗಿದೆ.
ಈ ಹಿನ್ನೆಲೆಯಲ್ಲಿ ಸ್ಥಳೀಯವಾಗಿ ಉಭಯ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರ ಭಿನ್ನಾಭಿಪ್ರಾಯಗಳನ್ನು ಮರೆತು ಮೈತ್ರಿ ಅಭ್ಯರ್ಥಿ ಗೆಲುವಿಗೆ ಶ್ರಮಿಸುವಂತೆ ಗೌಡರು ನಿರ್ದೇಶನ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.