ಬೆಂಗಳೂರು, ಮಾ.27-ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ ನಂತರ ಸಾಕಷ್ಟು ಗೊಂದಲಗಳು ಉಂಟಾಗಿದ್ದು, ಪಕ್ಷದ ಹೈಕಮಾಂಡ್ ಸ್ಥಳೀಯ ನಾಯಕರ ಅಭಿಪ್ರಾಯಗಳಿಗೆ ಮನ್ನಣೆ ನೀಡದೆ ಸರ್ವಾಧಿಕಾರಿ ನಿರ್ಧಾರ ತೆಗೆದುಕೊಂಡಿದೆಯೇ ಎಂಬ ಪ್ರಶ್ನೆ ಕಾಡಲಾರಂಭಿಸಿದೆ.
ದಕ್ಷಿಣ ಕನ್ನಡ, ದಾವಣಗೆರೆ, ಹಾವೇರಿ, ತುಮಕೂರು, ಕೊಪ್ಪಳ, ಬೆಳಗಾವಿ, ಮಂಡ್ಯ ಕ್ಷೇತ್ರಗಳ ಟಿಕೆಟ್ ಆಯ್ಕೆಯಲ್ಲಿ ಗೊಂದಲಗಳು ಉಂಟಾಗಿದೆ. ದಕ್ಷಿಣ ಕನ್ನಡದಲ್ಲಿ ಯುವ ಮುಖಂಡ ಮಿಥುನ್ರೈಗೆ ಟಿಕೆಟ್ ನೀಡಲಾಗಿದೆ. ಇದಕ್ಕೂ ಮುನ್ನ ಸ್ಥಳೀಯ ನಾಯಕರ ಅಭಿಪ್ರಾಯಗಳನ್ನು ಪರಿಗಣಿಸಿಲ್ಲ ಎಂದು ಹೇಳಲಾಗುತ್ತಿದೆ.
ಕಾಂಗ್ರೆಸ್ನ ಹಿರಿಯ ನಾಯಕ ಜನಾರ್ಧನ ಪೂಜಾರಿ ಅವರು, ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಬಹಿರಂಗವಾಗಿಯೇ ಹೇಳಿಕೆಗಳನ್ನು ನೀಡಿ ಕೆಂಡಕಾರಲಾಂಭಿಸಿದ್ದಾರೆ.
ದಾವಣಗೆರೆಯಲ್ಲಿ ಟಿಕೆಟ್ ಘೋಷಣೆಯಾದ ನಂತರ ಶಾಮನೂರು ಶಿವಶಂಕರಪ್ಪ ತಾವು ಸ್ಪರ್ಧಿಸಲು ಸಿದ್ಧರಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಹಾವೇರಿಯಲ್ಲಿ ಹೈಕಮಾಂಡ್ ಡಿ.ಆರ್.ಪಾಟೀಲ್ ಅವರಿಗೆ ಟಿಕೆಟ್ ಘೋಷಣೆ ಮಾಡಿದೆ. ಆದರೆ ಈ ಕ್ಷೇತ್ರದಲ್ಲಿ ಬಸವರಾಜ್ ಶಿವಣ್ಣನವರ್ ಪ್ರಬಲವಾದ ಆಕಾಂಕ್ಷಿಯಾಗಿದ್ದರು.
ಎರಡು ಬಾರಿ ಸ್ಪರ್ಧಿಸಿ ಸೋಲು ಕಂಡ ಸಲೀಂ ಅಹಮ್ಮದ್ ಅವರನ್ನು ಕಡೆಗಣಿಸಲಾಗಿದೆ.
ಇನ್ನು ಕೊಪ್ಪಳ ಕ್ಷೇತ್ರದಲ್ಲಿ ರಾಜಶೇಖರ್ ಹಿಟ್ನಾಳ್ ಅವರಿಗೆ ಟಿಕೆಟ್ ನೀಡಿರುವುದು ಜಿಲ್ಲಾ ಕಾಂಗ್ರೆಸ್ ನಾಯಕರುಗಳಲ್ಲಿ ಆಶ್ಚರ್ಯ ಮೂಡಿಸಿದೆ. ಇಂದು ಬೆಂಗಳೂರಿನ ಸಿದ್ದರಾಮಯ್ಯ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ನಾಯಕರು ಹೈಕಮಾಂಡ್ ನಿರ್ಧಾರವನ್ನು ತೀವ್ರವಾಗಿ ವಿರೋಧಿಸಿದ್ದಾರೆ.
ರಾಜಶೇಖರ್ ಹಿಟ್ನಾಳ್ ಅವರನ್ನು ಬದಲಾವಣೆ ಮಾಡುವಂತೆ ಒತ್ತಡ ಹೇರಿದ್ದಾರೆ.ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ಸಭೆಯಲ್ಲಿ ಭಾಗವಹಿಸದೆ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.ಜಿಲ್ಲೆಯ ಇನ್ನೊಬ್ಬ ನಾಯಕ ಶಿವರಾಜ್ ತಂಗಡಗಿ ಅವರು ಕೂಡ ಅಧಿಕೃತ ಅಭ್ಯರ್ಥಿ ವಿರುದ್ಧ ಅಸಮಾಧಾನ ಹೊಂದಿದ್ದಾರೆ ಎನ್ನಲಾಗಿದೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರಾಗಿರುವ ವಿರೂಪಾಕ್ಷಪ್ಪ ಅವರ ಹೆಸರನ್ನು ಹೈಕಮಾಂಡ್ ಪರಿಗಣಿಸಿಲ್ಲ.
ತುಮಕೂರು ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಡುವ ಮೂಲಕ ದೊಡ್ಡ ಎಡವಟ್ಟು ಮಾಡಿರುವ ಹೈಕಮಾಂಡ್ ಜೆಡಿಎಸ್ ಅಭ್ಯರ್ಥಿ ಮಾಜಿ ಪ್ರಧಾನಿ ದೇವೇಗೌಡರ ವಿರುದ್ಧ ಕಾಂಗ್ರೆಸ್ ನಾಯಕರೇ ಬಂಡಾಯ ಸಾರಿರುವುದನ್ನು ಸರಿಪಡಿಸಲು ಹೆಣಗಾಡುತ್ತಿದೆ. ಸಂಸದ ಎಸ್.ಪಿ.ಮುದ್ದಹನುಮೇಗೌಡ, ಮಾಜಿ ಶಾಸಕ ಕೆ.ಎನ್.ರಾಜಣ್ಣ ಅವರ ನಾಮಪತ್ರ ವಾಪಸ್ ತೆಗೆಸಲು ಹಗಲು-ರಾತ್ರಿ ಬೆವರಿಳಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಬೆಳಗಾವಿ ಕ್ಷೇತ್ರದಿಂದ ವಿರೂಪಾಕ್ಷಿ ಸಾಧುನವರ ಅವರನ್ನು ಅಭ್ಯರ್ಥಿಯನ್ನಾಗಿ ಹೈಕಮಾಂಡ್ ಘೋಷಿಸಿದೆ. ಆದರೆ ಈ ಕ್ಷೇತ್ರದಲ್ಲಿ ಪ್ರಬಲ ಆಕಾಂಕ್ಷಿಯಾಗಿದ್ದ ಇತರ ನಾಯಕರು ಬಂಡೆದ್ದಿದ್ದಾರೆ. ಮಂಡ್ಯ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಡುವ ನಿರ್ಧಾರ ತೆಗೆದುಕೊಂಡ ಕಾಂಗ್ರೆಸ್ ಹೈಕಮಾಂಡ್ ಅದಕ್ಕೆ ಪೂರಕವಾಗಿ ಸ್ಥಳೀಯ ಕಾಂಗ್ರೆಸ್ ನಾಯಕರನ್ನು ಮನವೊಲಿಸುವ ಪ್ರಯತ್ನ ನಡೆಸಲಿಲ್ಲ. ಹೀಗಾಗಿ ಇಡೀ ಜಿಲ್ಲೆಯೇ ಹೈಕಮಾಂಡ್ ನಿರ್ಧಾರಕ್ಕೆ ಸೆಡ್ಡುಹೊಡೆದು ನಿಂತಿದೆ.
ಟಿಕೆಟ್ ಹಂಚಿಕೆಯಲ್ಲಾಗಿರುವ ಗೊಂದಲಗಳಿಂದ ಬಹಳಷ್ಟು ಕ್ಷೇತ್ರಗಳಲ್ಲಿ ಕಾಂಗ್ರೆಸ್ಗೆ ಹಿನ್ನಡೆಯಾಗುತ್ತಿದೆ. ಸ್ಥಳೀಯ ನಾಯಕರ ಶಿಫಾರಸು ಉಲ್ಲಂಘಿಸಿ ದೆಹಲಿಯಲ್ಲಿರುವ ಕೆಲ ನಾಯಕರುಗಳು ತಮ್ಮ ಮನಸೋ ಇಚ್ಛೆ ನಿರ್ಧಾರ ತೆಗೆದುಕೊಂಡಿದ್ದರಿಂದ ಈ ರೀತಿಯ ಅಸಮಾಧಾನಗಳು ವ್ಯಕ್ತವಾಗುತ್ತಿವೆ ಎಂದು ಹೇಳಲಾಗುತ್ತಿದೆ.
ಚುನಾವಣೆಯಲ್ಲಿ ಸ್ಪರ್ಧಿಸಲು ಶಾಮನೂರು ಶಿವಶಂಕರಪ್ಪ ಹಿಂದೇಟು
ಬೆಂಗಳೂರು, ಮಾ.27-ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ನಿರಾಕರಿಸಿರುವ ಹಿರಿಯ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ತಮ್ಮ ಪುತ್ರ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಬಿ ಫಾರಂ ನೀಡುವಂತೆ ಒತ್ತಡ ಹಾಕಿದ್ದಾರೆ.
ಈಗಾಗಲೇ ಶಾಸಕರಾಗಿರುವ ಶಾಮನೂರು ಶಿವಶಂಕರಪ್ಪ ಅವರು, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಹಿಂದೇಟು ಹಾಕಿದ್ದು, ಕಾಂಗ್ರೆಸ್ ನಾಯಕರು ತಮ್ಮೊಂದಿಗೆ ಸಮಾಲೋಚನೆ ನಡೆಸದೆ ಟಿಕೆಟ್ ಘೋಷಣೆ ಮಾಡಿದ್ದಾರೆ ಎಂಬ ಅಸಮಾಧಾನ ಹೊರಹಾಕಿದ್ದಾರೆ.
ಈ ಮೊದಲು ತಮಗೆ ವಯಸ್ಸಾಗಿದೆ ಎಂಬ ಕಾರಣಕ್ಕಾಗಿ ವಿಧಾನಸಭೆ ಟಿಕೆಟ್ ನೀಡಲು ಮೀನಾಮೇಷ ಎಣಿಸಿದ ಕಾಂಗ್ರೆಸ್, ಈಗ ಲೋಕಸಭೆ ಚುನಾವಣೆ ಟಿಕೆಟ್ ನೀಡಿರುವುದು ಆಶ್ಚರ್ಯ ತಂದಿದೆ. ತಮಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ತಮ್ಮ ಪುತ್ರ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಬಿ ಫಾರಂ ಕೊಟ್ಟರೆ ಗೆಲ್ಲಿಸಿಕೊಂಡು ಬರುವುದಾಗಿ ಹೈಕಮಾಂಡ್ಗೆ ಭರವಸೆ ನೀಡಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ನಾಯಕರು ಶಾಮನೂರು ಕುಟುಂಬದ ಜೊತೆ ಚರ್ಚೆ ನಡೆಸಿಯೇ ಟಿಕೆಟ್ ನೀಡಿರುವುದಾಗಿ ಹೇಳುತ್ತಿದ್ದಾರೆ. ಆದರೆ ಅಧಿಕೃತವಾಗಿ ಹೆಸರು ಘೋಷಣೆಯಾದ ನಂತರ ಶಾಮನೂರು ಅವರು ಉಲ್ಟಾ ಹೊಡೆದಿದ್ದು, ರಾಷ್ಟ್ರ ರಾಜಕಾರಣದ ಬಗ್ಗೆ ನಿರಾಸಕ್ತಿ ತೋರಿಸುತ್ತಿದ್ದಾರೆ.
ಮಲ್ಲಿಕಾರ್ಜುನ್ ಅವರು ರಾಜ್ಯ ರಾಜಕಾರಣದಲ್ಲಿ ಆಸಕ್ತಿ ಹೊಂದಿದ್ದು, ಸಚಿವರಾಗಬೇಕು ಎಂಬ ಆಸೆ ಇಟ್ಟುಕೊಂಡಿದ್ದಾರೆ. ತಮ್ಮ ತಂದೆ ಶಾಮನೂರು ಶಿವಶಂಕರಪ್ಪ ಅವರನ್ನು ಲೋಕಸಭೆಗೆ ಆಯ್ಕೆ ಮಾಡಿ ಕಳುಹಿಸಿದರೆ ತೆರವಾಗುವ ವಿಧಾನಸಭಾ ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದು ಬಂದು ಸಚಿವರಾಗುವ ಇಂಗಿತ ಹೊಂದಿದ್ದು, ಅದಕ್ಕಾಗಿ ತಮ್ಮ ತಂದೆಯವರಿಗೆ ಲೋಕಸಭೆ ಟಿಕೆಟ್ ನೀಡುವಂತೆ ಹೈಕಮಾಂಡ್ ನಾಯಕರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಎರಡನೇ ಹಂತದಲ್ಲಿ ಚುನಾವಣೆ ನಡೆಯುತ್ತಿದ್ದು, ನಾಮಪತ್ರ ಸಲ್ಲಿಕೆಗೆ ಅಧಿಸೂಚನೆ ಜಾರಿಗೊಂಡಿದೆ. ಈ ಹಂತದಲ್ಲಿ ಶಾಮನೂರು ಅವರ ಹೇಳಿಕೆ ಪಕ್ಷದಲ್ಲಿ ಗೊಂದಲಗಳನ್ನು ಹುಟ್ಟುಹಾಕಿದೆ.