ಧಾರವಾಡ,ಮಾ.27- ಧಾರವಾಡ ಲೋಕಸಭೆ ಚುನಾವಣೆ ಕಾಂಗ್ರೆಸ್ ಟಿಕೆಟ್ ಇನ್ನೂ ಫೈನಲ್ ಆಗಿಲ್ಲ. ಮಾಜಿ ಸಚಿವ ವಿನಯ್ಕುಮಾರ್ ಕುಲಕರ್ಣಿ ಟಿಕೆಟ್ ಪಡೆಯಲು ತಮ್ಮ ಪ್ರಯತ್ನ ಮುಂದುವರೆಸಿದ್ದಾರೆ.
2ನೇ ಹಂತದ ಚುನಾವಣೆ ಅಧಿಸೂಚನೆ ನಾಳೆ ಹೊರಬೀಳಲಿದ್ದು, ಏ.4 ನಾಮಪತ್ರ ಸಲ್ಲಿಸಲು ಅಂತಿಮ ದಿನವಾಗಿದೆ.ಕಾಂಗ್ರೆಸ್ ಪಕ್ಷ ಈಗಾಗಲೇ ತನ್ನ ಪಾಲಿನ ಬಹುತೇಕ ಎಲ್ಲಾ ಕ್ಷೇತ್ರದ ಅಭ್ಯರ್ಥಿಗಳನ್ನು ಘೋಷಿಸಿದೆ.ಆದರೂ ಧಾರವಾಡ ಕ್ಷೇತ್ರದ ಅಭ್ಯರ್ಥಿಯನ್ನು ಇನ್ನೂ ಅಂತಿಮಗೊಳಿಸಿಲ್ಲ.
ಸಂಸದ ಪ್ರಹ್ಲಾದ ಜೋಶಿ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕೆಂದು ಭಾರೀ ರಾಜಕೀಯ ಲೆಕ್ಕಾಚಾರದಲ್ಲಿ ತೊಡಗಿದೆ.ಕಾಂಗ್ರೆಸ್ನ ಪ್ರಭಾವಿ ಮುಖಂಡರಾಗಿದ್ದ ಐ.ಜಿ.ಸನದಿ ಅವರ ಪುತ್ರ ಶಾಕೀರ್ ಸನದಿ ಅವರ ಹೆಸರು ಪ್ರಬಲವಾಗಿ ಕೇಳಿ ಬರುತ್ತಿದ್ದು ಬಹುತೇಕ ಇವರಿಗೇ ಟಿಕೆಟ್ ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ.ಸದಾನಂದ ಡಂಗನವರ್ ಅವರೂ ಕೂಡಾ ಟಿಕೆಟ್ ಪಡೆಯುವ ಪ್ರಯತ್ನ ನಡೆಸಿದ್ದಾರೆ.
ಈ ಕ್ಷೇತ್ರದಲ್ಲಿ ಲಿಂಗಾಯತ ಮತಗಳು ನಿರ್ಣಾಯಕವಾಗಿದ್ದು ಆ ಸಮುದಾಯವರೊಬ್ಬರನ್ನು ಕಣಕ್ಕಿಳಿಸಬೇಕೆಂದು ಸಿದ್ದರಾಮಯ್ಯನವರು ವಿನಯ್ ಕುಲಕರ್ಣಿ ಪರ ಒಲವು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.ಆದರೆ ಹೈಕಮಾಂಡ್ ಅಲ್ಪಸಂಖ್ಯಾತ ಅಭ್ಯರ್ಥಿಯೊಬ್ಬರನ್ನು ಕಣಕ್ಕಿಳಿಸಬೇಕೆಂದು ಚಿಂತನೆ ನಡೆಸಿದ್ದು, ಸನದಿಯವರಿಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ.
ಧಾರವಾಡ ಜಿಲ್ಲಾ ಲೋಕಸಭಾ ಕ್ಷೇತ್ರದ ಟಿಕೆಟ್ ಇನ್ನೂ ಫೈನಲ್ ಆಗಿಲ್ಲ. ಯಾರಿಗೆ ಟಿಕೆಟ್ ಸಿಗುತ್ತದೆ ಎಂಬುದನ್ನು ಕಾದು ನೋಡಬೇಕು.