ಬೆಳಗಾವಿ, ಮಾ.27- ಇಲ್ಲಿನ ಪಿಎಲ್ಡಿ ಬ್ಯಾಂಕ್ ಚುನಾವಣೆಯ ಬಳಿಕ ಹಾವು-ಮುಂಗುಸಿಯಂತಿದ್ದ ಸಚಿವ ಸತೀಶ್ ಜಾರಕಿಹೊಳಿ- ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಒಂದೇ ವೇದಿಕೆಯಲ್ಲಿ ಅಕ್ಕಪಕ್ಕವೇ ಕುಳಿತುಕೊಂಡು ಅಚ್ಚರಿ ಮೂಡಿಸಿದರು.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸತೀಶ್ ಜಾರಕಿಹೊಳಿ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಅಕ್ಕಪಕ್ಕವೇ ಕುಳಿತುಕೊಂಡರು.
ಹ್ಯಾಟ್ರಿಕ್ ಗೆಲುವ ದಾಖಲಿಸಿ, ಇದೀಗ ಬೌಂಡರಿ ಹೊಡೆಯಲು ಸಜ್ಜಾಗಿರುವ ಬಿಜೆಪಿಯ ಸುರೇಶ್ ಅಂಗಡಿ ಮಣಿಸಲು ಕೈ ನಾಯಕರು ಒಂದಾಗಿದ್ದಾರೆ. ಸತೀಶ್ ಜಾರಕಿಹೊಳಿ- ಲಕ್ಷ್ಮಿ ಹೆಬ್ಬಾಳ್ಕರ್ ಮುನಿಸು ಮರೆತು ಒಂದಾಗಿದ್ದಾರೆ.
ಈ ವೇಳೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಬಡತನ ನಿರ್ಮೂಲನೆ ಮಾಡಲಾಗುವುದು.ಇದಕ್ಕಾಗಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಕ್ಕೆ ಮಾಸಿಕ 6 ಸಾವಿರ ರೂ.ನೀಡಲಾಗುವುದು ಎಂದು ಹೇಳಿದರು.
ರಮೇಶ್ ಜಾರಕೊಹೊಳಿ ಕಾಂಗ್ರೆಸ್ ಪಕ್ಷದಲ್ಲಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಅವರು ಕಾಂಗ್ರೆಸ್ ಪರವಾಗಿ ಕೆಲಸ ಮಾಡುತ್ತಾರೆ ಎಂದು ಸತೀಶ್ ಹೇಳಿದರು.
ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಶಿವಕಾಂತ ಸಿಧ್ನಾಳ ಮಾತನಾಡಿ, ಟಿಕೆಟ್ ಸಿಕ್ಕಿಲ್ಲ ಎಂದು ಅಸಮಾಧಾನ ಇಲ್ಲ. ಕಾಂಗ್ರೆಸ್ ಪಕ್ಷದ ಪರವಾಗಿ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.