ಕೇಂದ್ರದಿಂದ ಆದಾಯ ತೆರಿಗೆ ಇಲಾಖೆಯ ದುರುಪಯೋಗ-ಗೃಹ ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು, ಮಾ.28-ಕೇಂದ್ರ ಸರ್ಕಾರ ಆದಾಯ ತೆರಿಗೆ ಇಲಾಖೆಯನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಾಳಿ ಮಾಡಲು ಆದಾಯ ತೆರಿಗೆ ಇಲಾಖೆಗೆ ಸ್ವಾತಂತ್ರ್ಯವಿದೆ. ಆದರೆ ನಿಷ್ಪಕ್ಷಪಾತವಾಗಿ ಎಲ್ಲರ ಮೇಲೂ ದಾಳಿ ಮಾಡಬೇಕಿತ್ತು ಎಂದರು.

ಲೋಕಸಭೆ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಸಮ್ಮಿಶ್ರ ಸರ್ಕಾರದ ಸಚಿವರ, ಶಾಸಕರ ಹಾಗೂ ಅವರ ಕುಟುಂಬದ ಮನೆಗಳ ಮೇಲೆ ದಾಳಿ ಮಾಡುತ್ತಿರುವುದು ರಾಜಕೀಯ ಪ್ರೇರಿತವಾಗಿದೆ ಹಾಗೂ ದುರುದ್ದೇಶದಿಂದ ಕೂಡಿದೆ ಎಂದು ಆರೋಪಿಸಿದರು.

ಆದಾಯ ತೆರಿಗೆ ಇಲಾಖೆ ಹಾಗೂ ಸಿಬಿಐಯನ್ನು ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದರು.

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸುವ ಬಗ್ಗೆ ಮುಖ್ಯಮಂತ್ರಿಗಳಿಗೆ ಯಾವುದೇ ಮೂಲಗಳಿಂದ ಮಾಹಿತಿ ಸಿಕ್ಕಿರಬಹುದು. ಗುಪ್ತಚರ ಇಲಾಖೆ ಅಥವಾ ಬಿಜೆಪಿಯವರೇ ಕೊಟ್ಟಿರಬಹುದು. ಐಟಿ ದಾಳಿಗೆ ಸಂಬಂಧಿಸಿದಂತೆ ಪಕ್ಷ ಕೈಗೊಳ್ಳುವ ತೀರ್ಮಾನಕ್ಕೆ ತಾವೆಲ್ಲ ಬದ್ಧ ಎಂದು ಹೇಳಿದರು.

ಪ್ರಕಾಶ್ ರಾಥೋಡ್ ಖಂಡನೆ:
ಕಾಂಗ್ರೆಸ್-ಜೆಡಿಎಸ್ ನಾಯಕರನ್ನು ಗುರಿಯಾಗಿಸಿಕೊಂಡು ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸುತ್ತಿದ್ದು, ಯಾವ ಬಿಜೆಪಿ ನಾಯಕರ ಮನೆ ಮೇಲೆ ದಾಳಿ ಮಾಡುತ್ತಿಲ್ಲವೇಕೆ ಎಂದು ವಿಧಾನಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಖಂಡಿಸಿದರು.

ಕೇಂದ್ರ ಸರ್ಕಾರ ಆದಾಯ ತೆರಿಗೆ ಇಲಾಖೆಯನ್ನು ಬಳಸಿಕೊಳ್ಳೂತ್ತಿದೆ ಎಂದು ಅವರು, ಆದಾಯ ತೆರಿಗೆ ಇಲಾಖೆಯವರಿಗೆ ಕಾಂಗ್ರೆಸ್-ಜೆಡಿಎಸ್ ನಾಯಕರೇ ಕಾಣುತ್ತಾರಾ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ