ರಾಜ್ಯದ ಮೊದಲ ಹಂತದ ಚುನಾವಣೆ-ನಾಮಪತ್ರ ವಾಪಸ್ ಪಡೆಯಲು ನಾಳೆ ಕೊನೆ ದಿನ

ಬೆಂಗಳೂರು, ಮಾ.28-ರಾಜ್ಯದ ಮೊದಲ ಹಂತದಲ್ಲಿ ಚುನಾವಣೆ ನಡೆಯುವ ಹದಿನಾಲ್ಕು ಲೋಕಸಭಾ ಕ್ಷೇತ್ರಗಳಲ್ಲಿ 237ಅಭ್ಯರ್ಥಿಗಳು ಸ್ಪರ್ಧಿಸಿದ್ದು, ನಾಮಪತ್ರ ವಾಪಸ್ ಪಡೆಯಲು ನಾಳೆ ಕಡೇ ದಿನವಾಗಿದೆ.

ಒಂದೆಡೆ ಬಂಡಾಯ ಅಭ್ಯರ್ಥಿಗಳ ಮನವೊಲಿಕೆ ಪ್ರಯತ್ನ ಮುಂದುವರೆದಿದ್ದರೆ, ಚುನಾವಣಾ ಕಣದಲ್ಲಿರುವ ವಿವಿಧ ರಾಜಕೀಯ ಪಕ್ಷಗಳ ಹಾಗೂ ಪಕ್ಷೇತರ ಅಭ್ಯರ್ಥಿಗಳು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ರೋಡ್‍ಶೋ, ಬಹಿರಂಗ ಸಮಾವೇಶ, ಸಭೆ, ಸಮಾರಂಭಗಳ ಮೂಲಕ ಮತದಾರರನ್ನು ಓಲೈಸುವ ಪ್ರಯತ್ನವನ್ನು ಅಭ್ಯರ್ಥಿಗಳು ಹಾಗೂ ಆಯಾ ಪಕ್ಷದ ನಾಯಕರು ನಿರಂತರವಾಗಿ ಮಾಡತೊಡಗಿದ್ದಾರೆ.

ಏ.18 ರಂದು ಮತದಾನ ನಡೆಯುವ ರಾಜ್ಯದ 14 ಕ್ಷೇತ್ರಗಳಾದ ಬೆಂಗಳೂರು ಕೇಂದ್ರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೊಡಗು-ಮೈಸೂರು, ಮಂಡ್ಯ, ತುಮಕೂರು, ಚಿತ್ರದುರ್ಗ, ಉಡುಪಿ-ಚಿಕ್ಕಮಗಳೂರು, ಹಾಸನ ಹಾಗೂ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಗಳಲ್ಲಿ ಸಲ್ಲಿಸಿದ್ದ ನಾಮಪತ್ರಗಳ ಪರಿಶೀಲನೆ ನಿನ್ನೆ ನಡೆದಿದ್ದು, 49 ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕøತವಾಗಿವೆ.

ಕೋಲಾರದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ ತಟ್ಟುತ್ತಿದೆ. ತುಮಕೂರಿನಲ್ಲೂ ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಸಂಸದ ಮುದ್ದಹನುಮೇಗೌಡ ಹಾಗೂ ಮಾಜಿ ಶಾಸಕ ಕೆ.ಎನ್.ರಾಜಣ್ಣ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಿರುವುದು ಬಿಕ್ಕಟ್ಟನ್ನು ಸೃಷ್ಟಿ ಮಾಡಿದೆ. ಮೂರು ಪ್ರಮುಖ ರಾಜಕೀಯ ಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಬಂಡಾಯ ಅಭ್ಯರ್ಥಿಗಳ ಮನವೊಲಿಸುವ ಪ್ರಯತ್ನ ಮುಂದುವರೆಸಿದ್ದಾರೆ. ನಾಮಪತ್ರ ವಾಪಸ್ ಪಡೆಯದ ಬಂಡಾಯ ಅಭ್ಯರ್ಥಿಗಳ ವಿರುದ್ಧ ಕಾಂಗ್ರೆಸ್ ಮತ್ತು ಬಿಜೆಪಿ ಶಿಸ್ತು ಕ್ರಮಕೈಗೊಳ್ಳುವ ಸಾಧ್ಯತೆ ಇದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ