ಬೆಂಗಳೂರು, ಮಾ.29-ಚುನಾವಣಾ ಆಯೋಗದ ಅನುಮತಿ ಪಡೆಯದೆ ಆದಾಯ ತೆರಿಗೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಅಧಿಕಾರಿಗಳ ಮೇಲೆ ಪ್ರಾಣ ಬೆದರಿಕೆವೊಡ್ಡಿದ ಕಾಂಗ್ರೆಸ್-ಜೆಡಿಎಸ್ ನಾಯಕರ ವಿರುದ್ಧ ತಕ್ಷಣವೇ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಾನೂನು ಕ್ರಮಕೈಗೊಳ್ಳಬೇಕೆಂದು ಬಿಜೆಪಿ ಒತ್ತಾಯಿಸಿದೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸಚಿವರು ಸೇರಿದಂತೆ ಅನೇಕರು ಚುನಾವಣಾ ಆಯೋಗದ ಅನುಮತಿಯನ್ನೂ ಪಡೆಯದೆ ಐಟಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿರುವುದು ಕಾನೂನು ಉಲ್ಲಂಘನೆಯಾಗಿದೆ. ಜೊತೆಗೆ ಅಧಿಕಾರಿಗಳ ಮೇಲೆ ಪ್ರಾಣ ಬೆದರಿಕೆ ಹಾಕಿರುತ್ತಾರೆ. ಕೂಡಲೇ ಇವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕ್ರಮಕೈಗೊಳ್ಳುವಂತೆ ಬಿಜೆಪಿ ವಕ್ತಾರ ಗೋ.ಮಧುಸೂದನ್ ಹಾಗೂ ಅಲ್ಪಸಂಖ್ಯಾತ ಸಮುದಾಯದ ಮುಖಂಡ ಅನ್ವರ್ ಮಾನಪ್ಪಾಡಿ ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಗೋ.ಮಧುಸೂದನ್, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬೀದಿಗೆ ಬಂದು ಕಾನೂನು ಮೀರಿ ಪ್ರತಿಭಟನೆ ನಡೆಸಿ ಸುವ್ಯವಸ್ಥೆಗೆ ಭಂಗ ತಂದಿರುವ ಕಾರಣ ರಾಜ್ಯಪಾಲರು ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಒಂದು ಸ್ವಾಯತ್ತ ಸಂಸ್ಥೆ ವಿರುದ್ಧ ಪ್ರತಿಭಟನೆ ನಡೆಸುವ ಅಧಿಕಾರ ಇವರಿಗಿದೆಯೇ ಎಂದು ಪ್ರಶ್ನಿಸಿದರು.
ಭ್ರಷ್ಟರನ್ನು ಕಾಪಾಡಲು ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ನಾಯಕರು ಪಣ ತೊಟ್ಟಿದ್ದಾರೆ. ಅವರು ಅಧಿಕಾರದಲ್ಲಿ ಮುಂದುವರೆಯಲು ನೈತಿಕತೆಯನ್ನು ಕಳೆದುಕೊಂಡಿರುವ ಕಾರಣ ಕೂಡಲೇ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಕೊಡಬೇಕು, ರಾಜ್ಯಪಾಲರು ಮಧ್ಯಪ್ರವೇಶಿಸುವಂತೆ ಒತ್ತಾಯಿಸಿದರು.
ಐಟಿ ಅಧಿಕಾರಿಗಳು ಯಾವುದೇ ಜನಪ್ರತಿನಿಧಿಗಳ ಮೇಲೆ ದಾಳಿ ನಡೆಸಿಲ್ಲ. ಬದಲಿಗೆ ಗುತ್ತಿಗೆದಾರರು ಹಾಗೂ ಕೆಲವು ರಾಜಕಾರಣಿಗಳ ಸಂಬಂಧಿಕರ ಮನೆ ಮೇಲೆ ದಾಳಿ ನಡೆಸಿದ್ದಾರೆ.ಇಷ್ಟಕ್ಕೆ ಎರಡೂ ಪಕ್ಷಗಳ ನಾಯಕರು ಹೆದರಬೇಕಾದ ಅಗತ್ಯವಾದರೂ ಏನಿದೆ ಎಂದು ಗೋ.ಮಧುಸೂದನ್ ಪ್ರಶ್ನಿಸಿದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗುತ್ತಿಗೆದಾರರು ಹಾಗೂ ಇಂಜಿನಿಯರ್ಗಳ ಪರ ಬೀದಿಗೆ ಇಳಿದು ಐಟಿ ಅಧಿಕಾರಿಗಳು ದಾಳಿ ನಡೆಸಿದ್ದೇ ಮಹಾ ಅಪರಾಧ ಎಂಬಂತೆ ಮಾತನಾಡುತ್ತಾರೆ.ಅವರ ಬಗ್ಗೆ ಇವರಿಗೆ ಏಕಿಷ್ಟು ಕಾಳಜಿ ಎಂಬುದು ರಾಜ್ಯದ ಜನತೆಗೆ ತಿಳಿಯಬೇಕು.ಕಳೆದ ಮೂರು ತಿಂಗಳಿನಿಂದ ಗುತ್ತಿಗೆದಾರರಿಗೆ ಎಷ್ಟು ಕಾಮಗಾರಿಗಳನ್ನು ಸರ್ಕಾರ ನೀಡಿದೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಸವಾಲು ಹಾಕಿದರು.
ತಮ್ಮ ತಮ್ಮ ಆಸ್ತಿಗಳನ್ನು ರಕ್ಷಿಸಿಕೊಳ್ಳಲು ಹಾಗೂ ಚುನಾವಣೆಯಲ್ಲಿ ಮತದಾರರಿಗೆ ಹಂಚಲು ಸಂಗ್ರಹಿಸಿಟ್ಟಿದ್ದ ಹಣ ಸಿಕ್ಕಿಬೀಳಬಹುದೆಂಬ ಭೀತಿಯಿಂದಾಗಿ ಐಟಿ ಅಧಿಕಾರಿಗಳಿಗೆ ಪ್ರಾಣ ಬೆದರಿಕೆ ಹಾಕುತ್ತಿದ್ದಾರೆ.ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ.
ಇವರ ಹೇಳಿಕೆಗಳನ್ನು ಗಮನಿಸಿದರೆ ಚುನಾವಣೆಗೂ ಮುನ್ನವೇ ಶಸ್ತ್ರತ್ಯಾಗ ಮಾಡಿದ್ದಾರೆ ಎಂದು ಗೋ.ಮಧುಸೂದನ್ ವ್ಯಂಗ್ಯವಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಸಹ ವಕ್ತಾರ ಎ.ಎಚ್.ಆನಂದ್ ಮತ್ತಿತರರು ಉಪಸ್ಥಿತರಿದ್ದರು.