ಬೆಂಗಳೂರು, ಮಾ.29-ರಾಜ್ಯದ ಮೊದಲ ಹಂತದ ಲೋಕಸಭೆ ಚುನಾವಣೆಗೆ ಸಲ್ಲಿಸಿದ್ದ ನಾಮಪತ್ರಗಳ ವಾಪಸ್ ಪಡೆಯುವ ಅವಧಿ ಮುಕ್ತಾಯವಾಗಿದ್ದು, ಸಂಜೆ ವೇಳೆಗೆ ಕಣದಲ್ಲಿ ಉಳಿಯುವ ಅಧಿಕೃತ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುತ್ತದೆ.
ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಸಲ್ಲಿಕೆಯಾಗಿದ್ದ 330 ಅಭ್ಯರ್ಥಿಗಳ ನಾಮಪತ್ರಗಳ ಪೈಕಿ 52 ತಿರಸ್ಕøತಗೊಂಡಿದ್ದು, 278 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿದ್ದವು. 165 ಸ್ವತಂತ್ರ ಅಭ್ಯರ್ಥಿಗಳು, ಬಿಜೆಪಿಯ 13, ಕಾಂಗ್ರೆಸ್ನ 10 ಹಾಗೂ ಜೆಡಿಎಸ್ನ ನಾಲ್ವರು ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.
ಬೆಂಗಳೂರು, ತುಮಕೂರು, ಹಾಸನ, ಮೈಸೂರು, ಮಂಡ್ಯ, ಚಿಕ್ಕಮಗಳೂರು ಸೇರಿದಂತೆ ವಿವಿಧ ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ಜೋರಾಗಿ ನಡೆಯುತ್ತಿದೆ.ಆಯಾ ಪಕ್ಷದ ಹಾಗೂ ಪಕ್ಷೇತರ ಅಭ್ಯರ್ಥಿಗಳು ಕೂಡ ಬಿರುಸಿನ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದು, ರೋಡ್ಶೋ, ಬಹಿರಂಗ ಪ್ರಚಾರ ಮಾಡುವ ಮೂಲಕ ಮತದಾರರ ಮನ ಗೆಲ್ಲುವ ಪ್ರಯತ್ನ ಮಾಡುತ್ತಿದ್ದಾರೆ.ಅಭ್ಯರ್ಥಿಗಳಿಗೆ ಆಯಾ ಪಕ್ಷದ ಮುಖಂಡರು, ನಾಯಕರು ಸಾಥ್ ನೀಡಿರುವುದರಿಂದ ಪ್ರಚಾರ ಕಳೆಗಟ್ಟಿದಂತಾಗಿದೆ.
ಲೋಕಸಭೆ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಹಲವು ಕ್ಷೇತ್ರಗಳಲ್ಲಿ ರಾಜಕೀಯ ಪಕ್ಷಗಳ ನಡುವೆ ಆರೋಪ, ಪ್ರತ್ಯಾರೋಪಗಳು ನಿರಂತರವಾಗಿ ನಡೆಯುತ್ತಿವೆ.
ರಾಜ್ಯದ 2ನೇ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ನಿನ್ನೆಯಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಈ ಭಾಗದಲ್ಲೂ ನಾಮಪತ್ರ ಸಲ್ಲಿಕೆ ಜೊತೆಗೆ ಚುನಾವಣಾ ಪ್ರಚಾರವೂ ನಡೆಯುತ್ತಿದೆ.ಬಿಜೆಪಿ ಅಭ್ಯರ್ಥಿಗಳಾದ ಬಿ.ವೈ.ರಾಘವೇಂದ್ರ ಶಿವಮೊಗ್ಗದಲ್ಲಿ, ಸುರೇಶ್ ಅಂಗಡಿಬೆಳಗಾವಿಯಲ್ಲಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ವೀಣಾ ಕಾಶಪ್ಪನವರ್ ಬಾಗಲಕೋಟೆ ಕ್ಷೇತ್ರದಲ್ಲಿ ನಿನ್ನೆ ನಾಮಪತ್ರ ಸಲ್ಲಿಸಿದ್ದಾರೆ.
ಎರಡನೇ ಹಂತದಲ್ಲೂ ನಿನ್ನೆ ಒಟ್ಟು 15 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಏ.4ರವರೆಗೂ ನಾಮಪತ್ರ ಸಲ್ಲಿಕೆಗೆ ಅವಕಾಶವಿರುವುದರಿಂದ ಏಪ್ರಿಲ್ 1ರಂದು ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ಚುನಾವಣಾ ಕಣದಲ್ಲಿ ಅತಿರಥರು ಇರುವುದರಿಂದ ರಾಜ್ಯದ ಲೋಕಸಭೆ ಚುನಾವಣೆ ಅಖಾಡ ತಾರಕಕ್ಕೇರಿದೆ.