ಮೈತ್ರಿ ಅಭ್ಯರ್ಥಿಗಳ ವಿರುದ್ಧ ಪ್ರಚಾರ-ನಾಯಕರಿಗೆ ಕಠಿಣ ಎಚ್ಚರಿಕೆ ನೀಡಿದ ಎಐಸಿಸಿ ಅಧ್ಯಕ್ಷರು

ಬೆಂಗಳೂರು, ಮಾ.30-ಮೈತ್ರಿ ಅಭ್ಯರ್ಥಿಗಳ ವಿರುದ್ಧವಾಗಿ ಯಾರಾದರೂ ಪ್ರಚಾರ ನಡೆಸಿದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವುದಾಗಿ ಕಾಂಗ್ರೆಸ್‍ನ ಎಲ್ಲಾ ನಾಯಕರಿಗೂ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಕಠಿಣ ಎಚ್ಚರಿಕೆ ನೀಡಿದ್ದಾರೆ.

ನಿನ್ನೆ ತಡರಾತ್ರಿ ಕೆಪಿಸಿಸಿಗೆ ಸೂಚನೆ ರವಾನಿಸಿರುವ ರಾಹುಲ್‍ಗಾಂಧಿಯವರು ಬಿಜೆಪಿಯನ್ನು ಸೋಲಿಸುವುದು ನಮ್ಮ ಮೂಲ ಉದ್ದೇಶ. ಹೀಗಾಗಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಎದುರಿಸಲಾಗುತ್ತಿದೆ. ಕೆಲವು ಕ್ಷೇತ್ರಗಳಲ್ಲಿ ಜೆಡಿಎಸ್ ಜೊತೆಗಿನ ಮೈತ್ರಿಗೆ ವಿರೋಧ ವ್ಯಕ್ತಪಡಿಸಿ ಕಾಂಗ್ರೆಸ್ ನಾಯಕರು ಬಿಜೆಪಿ ಅಥವಾ ಪಕ್ಷೇತರ ಅಭ್ಯರ್ಥಿ ಪರವಾಗಿ ಕೆಲಸ ಮಾಡುತ್ತಿರುವ ಮಾಹಿತಿ ಇದೆ. ಅಂತಹ ವ್ಯಕ್ತಿಗಳಿಗೆ ಸ್ಪಷ್ಟ ಎಚ್ಚರಿಕೆ ನೀಡಿ ಒಂದು ವೇಳೆ ಅವರು ಪಕ್ಷದ ಆದೇಶವನ್ನು ಉಲ್ಲಂಘಿಸಿ ತಮ್ಮ ವಿರೋಧಿ ಚಟುವಟಿಕೆಯನ್ನು ಮುಂದುವರೆಸಿದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಿ ಎಂದು ರಾಹುಲ್ ಸ್ಪಷ್ಟ ಆದೇಶ ನೀಡಿದ್ದಾರೆ.

ಮೊನ್ನೆ ಅರಮನೆ ಮೈದಾನದಲ್ಲಿ ನಡೆದ ಜೆಡಿಎಸ್-ಕಾಂಗ್ರೆಸ್ ಜಂಟಿ ಸಮಾವೇಶದಲ್ಲಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಯಾರಾದರೂ ಮೈತ್ರಿ ಅಭ್ಯರ್ಥಿ ವಿರುದ್ಧ ಪ್ರಚಾರ ಮಾಡುವುದು, ಪತ್ರಿಕಾ ಹೇಳಿಕೆ ನೀಡುವುದನ್ನು ಮಾಡಿದರೆ ಮುಲಾಜಿಲ್ಲದೆ ಪಕ್ಷದಿಂದ ಹೊರಹಾಕುವುದಾಗಿ ಎಚ್ಚರಿಕೆ ನೀಡಿದ್ದರು. ಈಗ ಕಾಂಗ್ರೆಸ್ ಕೂಡ ತನ್ನ ನಾಯಕರಿಗೆ ಅದೇ ರೀತಿಯ ಎಚ್ಚರಿಕೆ ನೀಡಿ ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಇದ್ದಂತಹ ಅಡೆತಡೆಗಳ ನಿವಾರಣೆಗೆ ಮುಂದಾಗಿದೆ.

ತುಮಕೂರು, ಮಂಡ್ಯ, ಮೈಸೂರು, ಉಡುಪಿ-ಚಿಕ್ಕಮಗಳೂರು, ಹಾಸನ, ಚಾಮರಾಜನಗರ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳಿಗೆ ಸ್ವಪಕ್ಷೀಯರೆ ಶತ್ರುಗಳಾಗಿದ್ದಾರೆ.

ತುಮಕೂರಿನಲ್ಲಿ ಪಕ್ಷೇತರ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದ ಕೆ.ಎನ್.ರಾಜಣ್ಣ ಹಾಗೂ ಸಂಸದ ಎಸ್.ಪಿ.ಮುದ್ದಹನುಮೇಗೌಡರ ಅವರ ನಾಮಪತ್ರಗಳನ್ನು ವಾಪಸ್ ತೆಗೆಸಲಾಗಿದೆ. ಆದರೆ ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಇನ್ನು ಹೊಂದಾಣಿಕೆ ಸಮರ್ಪಕವಾಗಿಲ್ಲ. ಹೀಗಾಗಿ ಕಾಂಗ್ರೆಸ್‍ನ ಕೆಲವು ನಾಯಕರು ಬಿಜೆಪಿ ಅಭ್ಯರ್ಥಿ ಜಿ.ಎಸ್.ಬಸವರಾಜು ಅವರ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ತುಮಕೂರು ಕ್ಷೇತ್ರದಲ್ಲಿ ಜೆಡಿಎಸ್ ವರಿಷ್ಠ ಹಾಗೂ ಮೈತ್ರಿ ಅಭ್ಯರ್ಥಿ ದೇವೇಗೌಡರನ್ನು ಗೆಲ್ಲಿಸಿಕೊಳ್ಳುವುದು ಮೈತ್ರಿ ಸರ್ಕಾರಕ್ಕೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ.

ರಾಷ್ಟ್ರರಾಜಕಾರಣದ ದೃಷ್ಟಿಯಲ್ಲೂ ದೇವೇಗೌಡರ ಗೆಲುವು ಹೆಚ್ಚು ಮಹತ್ವ ಪಡೆದಿದೆ. ಖುದ್ದಾಗಿ ಉಪಮುಖ್ಯಮಂತ್ರಿ ಪರಮೇಶ್ವರ್ ಅವರೇ ದೇವೇಗೌಡರ ಗೆಲುವಿಗೆ ಟೊಂಕ ಕಟ್ಟಿ ನಿಂತಿದ್ದಾರೆ.

ಇನ್ನು ಮೈಸೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿಜಯ್‍ಶಂಕರ್ ಅವರ ಗೆಲುವಿಗೆ ಸಿದ್ದರಾಮಯ್ಯ ಅವರು ಪಣತೊಟ್ಟಿದ್ದಾರೆ. ಆದರೆ ಮೈಸೂರಿನಲ್ಲಿ ಜೆಡಿಎಸ್ ನಾಯಕರು ವಿಜಯ್‍ಶಂಕರ್ ಗೆಲುವಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತಿಲ್ಲ ಎಂಬ ಆಕ್ಷೇಪಗಳು ವ್ಯಕ್ತವಾಗಿವೆ.

ಮಂಡ್ಯದ ರಾಜಕಾರಣವಂತೂ ದೇಶದ ಗಮನ ಸೆಳೆದಿದೆ. ಜೆಡಿಎಸ್ ಅಭ್ಯರ್ಥಿ ನಿಖಿಲ್ ಪರವಾಗಿ ಕಾಂಗ್ರೆಸ್‍ನಲ್ಲೇ ಪರ-ವಿರೋಧ ಚರ್ಚೆಗಳು ಆರಂಭಗೊಂಡಿವೆ.

ಒಂದು ಗುಂಪು ನಿಖಿಲ್ ಅವರನ್ನು ವಿರೋಧಿಸಿ ರಾಜಕಾರಣ ಮಾಡುತ್ತಿದ್ದರೆ, ಮತ್ತೊಂದು ಗುಂಪು ನಿಖಿಲ್ ಪರವಾಗಿ ಪ್ರಚಾರದಲ್ಲಿ ತೊಡಗಿಕೊಂಡಿದೆ.

ರಾಜ್ಯ ಕಾಂಗ್ರೆಸ್ ಮುಖಂಡರು ಎಷ್ಟೇ ಮನವೊಲಿಸಿದರು ಕೆಲವು ಮುಖಂಡರಂತೂ ಪಟ್ಟು ಸಡಿಲಿಸಿಲ್ಲ. ಇದು ವಿಪರೀತ ತಲೆನೋವಿಗೆ ಕಾರಣವಾಗಿದೆ. ಹೀಗಾಗಿ ಹೈಕಮಾಂಡ್ ಮಧ್ಯಪ್ರವೇಶ ಮಾಡಿದ್ದು, ಮೈತ್ರಿ ಅಭ್ಯರ್ಥಿ ಪರವಾಗಿ ಕೆಲಸ ಮಾಡದಿದ್ದರೆ, ಎಷ್ಟೇ ದೊಡ್ಡ ವ್ಯಕ್ತಿಯಾಗಿದ್ದರೂ, ಎಷ್ಟೇ ಉನ್ನತ ಸ್ಥಾನದಲ್ಲಿದ್ದರೂ ಮುಲಾಜಿಲ್ಲದೆ ಅವರನ್ನು ಪಕ್ಷದಿಂದ ಹೊರಹಾಕಿ ಎಂದು ರಾಹುಲ್ ತಾಕೀತು ಮಾಡಿದ್ದಾರೆ.

ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ-ವಿರೋಧ ಚರ್ಚೆಗಳು ಕಾಂಗ್ರೆಸ್‍ನಲ್ಲಿ ನಡೆಯುತ್ತಿದೆ. ಬಿಜೆಪಿ ಅಭ್ಯರ್ಥಿ ಎ.ಮಂಜು ಅವರು ತಮ್ಮ ಹಳೇ ಸ್ನೇಹವನ್ನು ಬಳಸಿಕೊಂಡು ಕಾಂಗ್ರೆಸ್ ನಾಯಕರನ್ನು ಸೆಳೆಯುತ್ತಿದ್ದಾರೆ. ಕೆಲವು ನಾಯಕರಂತೂ ಬಹಿರಂಗವಾಗಿಯೇ ಮೈತ್ರಿ ಅಭ್ಯರ್ಥಿ ವಿರುದ್ಧವಾಗಿ ಕೆಲಸ ಮಾಡಲಾರಂಭಿಸಿದ್ದಾರೆ. ಸಿದ್ದರಾಮಯ್ಯ ಖುದ್ದಾಗಿ ಮಧ್ಯಪ್ರವೇಶ ಮಾಡಿ ಸಂಧಾನಸಭೆ ನಡೆಸಿದರೂ ಅದು ಸಂಪೂರ್ಣ ಯಶಸ್ವಿಯಾಗಿಲ್ಲ.

ಉಡುಪಿ-ಚಿಕ್ಕಮಗಳೂರಿನಲ್ಲೂ ಜೆಡಿಎಸ್ ಅಭ್ಯರ್ಥಿಯಾಗಿರುವ ಕಾಂಗ್ರೆಸ್ ಮುಖಂಡ ಪ್ರಮೋದ್ ಮಧ್ವರಾಜ್ ವಿರುದ್ಧ ಒಂದಷ್ಟು ಮಂದಿ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.

ಚಾಮರಾಜನಗರದಲ್ಲಿ ಹಾಲಿ ಸಂಸದ ಧ್ರುವನಾರಾಯಣ್ ವಿರುದ್ಧ ಕಾಂಗ್ರೆಸ್‍ನ ಕೆಲವು ನಾಯಕರೇ ಕೆಲಸ ಮಾಡುತ್ತಿದ್ದು, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್‍ಪ್ರಸಾದ್ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ.

ದಕ್ಷಿಣ ಕನ್ನಡದಲ್ಲಿ ಜೆಡಿಎಸ್ ಅಷ್ಟೇನೂ ಪ್ರಬಲವಾಗಿಲ್ಲದೆ ಇದ್ದರೂ, ಕಾಂಗ್ರೆಸ್ ನಾಯಕರು ತಮ್ಮ ಪಕ್ಷದ ಅಭ್ಯರ್ಥಿ ಮಿಥುನ್‍ರೈ ವಿರುದ್ಧ ಅಸಮಾಧಾನದ ಮಾತುಗಳನ್ನಾಡುತ್ತಿದ್ದಾರೆ.

ಹೀಗಾಗಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯುವ ಬಹಳಷ್ಟು ಕ್ಷೇತ್ರಗಳಲ್ಲಿ ಕಾಂಗ್ರೆಸ್ ನಾಯಕರೇ ಕಾಂಗ್ರೆಸ್ ಪಾಲಿಗೆ ಶತ್ರುಗಳಾಗಿದ್ದಾರೆ. ನಿರಂತರ ಪ್ರಯತ್ನದ ನಡುವೆಯೂ ಪರಿಸ್ಥಿತಿಯನ್ನು ತಿಳಿಗೊಳಿಸಲು ರಾಜ್ಯ ನಾಯಕರಿಂದ ಸಾಧ್ಯವಾಗದ ಹಿನ್ನೆಲೆಯಲ್ಲಿ ರಾಹುಲ್‍ಗಾಂಧಿ ಮಧ್ಯಪ್ರವೇಶ ಮಾಡಿ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಇದು ಎಷ್ಟರ ಮಟ್ಟಿಗೆ ಪರಿಣಾಮ ಬೀರಲಿದೆ ಎಂಬುದನ್ನು ಕಾದು ನೋಡಬೇಕು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ