ಆದಾಯ ತೆರಿಗೆ ಕ್ರಮ ನಾಚಿಕೆಗೇಡಿನದು-ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಂಗಳೂರು, ಮಾ.30-ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮತ್ತೆ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಮಂಡ್ಯದ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಅಕ್ಕಿ ಗಿರಣಿ ಹಾಗೂ ಕಬ್ಬು ಕಾರ್ಖಾನೆಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟರ್‍ನಲ್ಲಿ ಪ್ರತಿಕ್ರಿಯಿಸಿರುವ ಅವರು, ಆದಾಯ ತೆರಿಗೆ ಇಲಾಖೆ ಕ್ರಮ ನಾಚಿಕೆಗೇಡಿನದು. ಕೇಂದ್ರ ಚುನಾವಣಾ ಆಯೋಗ ಕೂಡಲೇ ಮಧ್ಯಪ್ರವೇಶಿಸಬೇಕು, ನಮ್ಮ ಪಕ್ಷದ ಕಾರ್ಯಕರ್ತರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.

ಮಂಡ್ಯದ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಅಕ್ಕಿ ಗಿರಣಿಗಳು ಹಾಗೂ ಕಬ್ಬು ಕಾರ್ಖಾನೆಗಳ ಮೇಲೆ ಇಂದು ಬೆಳಗಿನ ಜಾವ 4 ಗಂಟೆಯವರೆಗೂ ದಾಳಿ ಮಾಡಿ ಕಾರ್ಖಾನೆ ಆವರಣಗಳಲ್ಲಿ ಸ್ಪೈ ಕ್ಯಾಮೆರಾ ಅಳವಡಿಸಿದ್ದಾರೆ. ರೈಲ್ವೆ ಅಧಿಕಾರಿಗಳ ಸೋಗಿನಲ್ಲಿ ಕಾರು ಬಾಡಿಗೆಗೆ ಪಡೆದು ಬಂದು ಎಲ್ಲೆಡೆ ದಾಳಿ ನಡೆಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರಿನ ಸಿಎಫ್‍ಟಿಆರ್‍ಐನಲ್ಲಿ ತಂಗಿರುವ ಆದಾಯ ತೆರಿಗೆ ಅಧಿಕಾರಿಗಳು ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರನ್ನು ಬೆದರಿಸಲು ಈ ತಂತ್ರಗಾರಿಕೆ ಅನುಸರಿಸುತ್ತಿದ್ದಾರೆ. ಕೇಂದ್ರ ಸರ್ಕಾರದ ನೇರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಈ ತಂತ್ರಗಾರಿಕೆಯನ್ನು ಮತ್ತು ದಾಳಿಯನ್ನು ನಾನು ಬಲವಾಗಿ ಖಂಡಿಸುತ್ತೇನೆ ಎಂದು ಕುಮಾರಸ್ವಾಮಿ ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ