ಬೆಂಗಳೂರು, ಮಾ.30- ದೋಸ್ತಿ ಪಕ್ಷಗಳು ಅಧಿಕೃತವಾಗಿ ಜಂಟಿ ಚುನಾವಣಾ ಪ್ರಚಾರಕ್ಕೆ ನಾಳೆಯಿಂದ ಚಾಲನೆ ನೀಡಲಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ಗಾಂಧಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರು ಬೃಹತ್ ಸಮಾವೇಶದ ಮೂಲಕ ದೋಸ್ತಿ ಪ್ರಚಾರಕ್ಕೆ ನಾಂದಿಹಾಡಲಿದ್ದಾರೆ.
ನಾಳೆ ತುಮಕೂರು ರಸ್ತೆಯ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನದ ಆವರಣದಲ್ಲಿ ನಡೆಯುವ ಜಂಟಿ ಸಭೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ನ ಎಲ್ಲಾ ನಾಯಕರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಶಕ್ತಿ ಪ್ರದರ್ಶನ ಮಾಡಲಿದ್ದಾರೆ.
ರಾಜ್ಯದಲ್ಲಿ ಮೈತ್ರಿ ಸರ್ಕಾರ ಅಸ್ಥಿತ್ವಕ್ಕೆ ಬಂದ ಸಂದರ್ಭದಲ್ಲಿ ಮೇ 23ರಂದು ಯುಪಿಎ ಅಧ್ಯಕ್ಷೆ ಸೋನಿಯಗಾಂಧಿ, ಎಐಸಿಸಿ ಅಧ್ಯಕ್ಷ ರಾಹುಲ್ಗಾಂಧಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಸೇರಿದಂತೆ ದೇಶಾದ್ಯಂತ 27ಕ್ಕೂ ಹೆಚ್ಚು ಜಾತ್ಯತೀತ ಪಕ್ಷಗಳು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಐಕ್ಯತೆ ಮೆರೆದಿದ್ದರು.
ಇದು ರಾಷ್ಟ್ರ ರಾಜಕಾರಣದಲ್ಲಿ ಸಂಚಲನವನ್ನೇ ಮೂಡಿಸಿತ್ತು. ಅನಂತರ ದೇವೇಗೌಡರು ಮತ್ತು ರಾಹುಲ್ಗಾಂಧಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿರಲಿಲ್ಲ.
ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ದೋಸ್ತಿ ಪಕ್ಷಗಳ ಮಹತ್ವದ ಸಭೆಯಲ್ಲಿ ಜಂಟಿ ಸಮಾವೇಶ ನಡೆಸುವ ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಅದರಂತೆ ನಾಳೆ ಸಂಜೆ 4 ಗಂಟೆಗೆ ತುಮಕೂರು ರಸ್ತೆಯಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು, ಸುಮಾರು 5 ಲಕ್ಷ ಜನ ಭಾಗವಹಿಸುವ ನಿರೀಕ್ಷೆ ಇದೆ.
ಸಮಾವೇಶದ ಯಶಸ್ವಿಗಾಗಿ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರು ಹಗಲಿರುಳು ಶ್ರಮಿಸುತ್ತಿದ್ದಾರೆ. ಹೆಚ್ಚು ಜನರನ್ನು ಸೇರಿಸುವ ಮೂಲಕ ತಮ್ಮ ಬಲಾಬಲ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಈ ಸಮಾವೇಶದ ಮೂಲಕ ಮತ್ತೆ ರಾಷ್ಟ್ರ ರಾಜಕಾರಣಕ್ಕೆ ಹೊಸ ಸಂದೇಶ ರವಾನಿಸುವುದು ಮಿತ್ರ ಪಕ್ಷಗಳ ಉದ್ದೇಶವಾಗಿದೆ.
ನಾಳೆ ಮಧ್ಯಾಹ್ನದ ಮೇಲೆ ತುಮಕೂರು ರಸ್ತೆಯಲ್ಲಿ ಸಂಚಾರ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಆ ಭಾಗದಲ್ಲಿ ಸಂಚರಿಸುವವರು ಪರ್ಯಾಯ ಮಾರ್ಗಗಳನ್ನು ಅನುಸರಿಸುವುದು ಸೂಕ್ತ ಎಂದು ಉಭಯ ಪಕ್ಷಗಳ ಮುಖಂಡರು ನಾಗರಿಕರಲ್ಲಿ ಮನವಿ ಮಾಡಿದ್ದಾರೆ.