ಬೆಂಗಳೂರು, ಮಾ.31-ಅನ್ಯ ವ್ಯಕ್ತಿಗಳ ಮತದಾನದ ಗುರುತಿನ ಚೀಟಿ ಇಟ್ಟುಕೊಂಡರೇ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಮುಖ್ಯ ಚುನಾವಣಾಧಿಕಾರಿ ಸಂಜೀವ್ಕುಮಾರ್ ಇಂದಿಲ್ಲಿ ಎಚ್ಚರಿಸಿದರು.
ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘ ನಗರದ ಕಬ್ಬನ್ಪಾರ್ಕ್ನಲ್ಲಿ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಓಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 7500 ಮತದಾರರ ಚೀಟಿ ಒಂದೆ ಕಡೆ ಪತ್ತೆಯಾಗಿರುವುದನ್ನು ಉಲ್ಲೇಖಿಸಿದ ಅವರು, ಈ ಬಾರಿ ಯಾರೊಬ್ಬರೂ ತಮ್ಮ ಗುರುತಿನ ಚೀಟಿಗಳನ್ನು ಬೇರೆಯವರಿಗೆ ನೀಡುವುದು ಇಲ್ಲವೇ ಸಂಗ್ರಹಿಸಿಟ್ಟುಕೊಳ್ಳುವುದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಸಂಜೀವ್ಕುಮಾರ್ ಹೇಳಿದರು.
ಮತದಾರರು ಮತದಾನದ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಪ್ರೋತ್ಸಹ ಇಂತಹ ಕಾರ್ಯಕ್ರಮಗಳನ್ನು ಬಿಬಿಎಂಪಿ ಹಮ್ಮಿಕೊಂಡಿರುವುದು ಸ್ವಾಗತಾರ್ಹ ಎಂದು ಅವರು ಅಭಿಪ್ರಾಯಪಟ್ಟರು.
ಜಿಲ್ಲಾ ಚುನಾವಣಾಧಿಕಾರಿ ಮಂಜುನಾಥ್ ಪ್ರಸಾದ್ ಮಾತನಾಡಿ, ಅಕ್ರಮವಾಗಿ 7500 ಗುರುತಿನ ಚೀಟಿ ಸಂಗ್ರಹಿಸಿಟ್ಟುಕೊಂಡಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಈ ಬಾರಿ ಅಂತಹ ಅಚಾತುರ್ಯಕ್ಕೆ ಅವಕಾಶ ಕಲ್ಪಿಸಿಕೊಡುವುದಿಲ್ಲ ಎಂದು ಭರವಸೆ ನೀಡಿದರು.
ಈ ಬಾರಿ ಬೆಂಗಳೂರಿನಲ್ಲಿ ಅತಿ ಹೆಚ್ಚು ಮತದಾನವಾಗುವಂತೆ ನೋಡಿಕೊಳ್ಳಲು ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.ನಗರದ 700 ಕೊಳಚೆ ಪ್ರದೇಶಗಳಲ್ಲಿ ಮತದಾನ ಜಾಗೃತಿ ಕುರಿತಂತೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದರು.
ಪೊಲೀಸ್ ಆಯುಕ್ತ ಟಿ.ಸುನೀಲ್ಕುಮಾರ್ ಮಾತನಾಡಿ, ಚುನಾವಣೆ ಸಂದರ್ಭದಲ್ಲಿ ಸಾಲು ಸಾಲು ರಜೆ ಬರುವುದರಿಂದ ಐಟಿ-ಬಿಟಿ ಮಂದಿ ಮತದಾನ ಮಾಡುವುದನ್ನು ಬಿಟ್ಟು ಪ್ರವಾಸ ತೆರಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮತದಾನ ದ ಮಹತ್ವ ಕುರಿತಂತೆ ವಿದ್ಯಾವಂತರಿಗೆ ತಿಳುವಳಿಕೆ ಮೂಡಿಸುವ ಅಗತ್ಯವಿದೆ ಎಂದರು.
ಇದೇ ಸಂದರ್ಭದಲ್ಲಿ ಚಿತ್ರನಟ ನಟಿಯರು ನಡೆಸಿಕೊಟ್ಟ ಚುನಾವಣಾ ಸಮಯ ಎಂಬ ಬೀದಿ ನಾಟಕ ನಡೆಸಿಕೊಟ್ಟರು.
ನಗರ ಜಿಲ್ಲಾಧಿಕಾರಿ ವಿಜಯಶಂಕರ್, 28 ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳು, ಸಂಘದ ಅಧ್ಯಕ್ಷ ಅಮೃತ್ರಾಜ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.