ಬೆಂಗಳೂರು,ಏ.1- ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು,ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಾಲ್ಕು ದಿನಗಳ ಕಾಲ ವಿವಿಧ ಕ್ಷೇತ್ರಗಳಲ್ಲಿ ಜಂಟಿ ಚುನಾವಣಾ ಪ್ರಚಾರ ಕೈಗೊಳಲಿದ್ದಾರೆ.
ಏ.9ರಿಂದ 13ರವರೆಗೂ ದೇವೇಗೌಡರು ಮತ್ತು ಸಿದ್ದರಾಮಯ್ಯ ಜಂಟಿ ಚುನಾವನಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ವೈ.ಎಸ್.ವಿ.ದತ್ತ ತಿಳಿಸಿದರು.
ಮೇ 9ರಂದು ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಉಭಯ ನಾಯಕರು ಜಂಟಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ.ಮೈತ್ರಿ ಅಭ್ಯರ್ಥಿ ವಿಜಯಶಂಕರ್ ಪರವಾಗಿ ಚುನಾವಣಾ ಪ್ರಚಾರ ಮಾಡಲಿದ್ದು, ಮುಖಂಡರು, ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಮೈತ್ರಿ ಅಭ್ಯರ್ಥಿಯಾಗಿ ದೇವೇಗೌಡರು ಕಣದಲ್ಲಿದ್ದು, ಏ.10ರಂದು ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ. ಎಂದು ದತ್ತ ಹೇಳಿದರು.
ಏ.11ರಂದು ಹಾಸನ ಲೋಕಸಭಾ ಕ್ಷೇತ್ರದ ಅರಕಲಗೂಡು, ಅರಸಿಕೆರೆ, ಹಾಸನ, ಕಡೂರು ವಿಧಾನಸಭಾ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರವಾಗಿ ಸಚಿವ ಎಚ್.ಡಿ.ರೇವಣ್ಣ ಸೇರಿದಂತೆ ಇನ್ನಿತರ ನಾಯಕರು, ಮುಖಂಡರು ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ಏ.12ರಂದು ಹೈವೋಲ್ಟೆಜ್ ಕ್ಷೇತ್ರವೆಂದೇ ಬಿಂಬಿತವಾಗಿರುವ ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ಕುಮಾರಸ್ವಾಮಿ ಪರ ದೇವೇಗೌಡರು ಮತ್ತು ಸಿದ್ದರಾಮಯ್ಯನವರು ಜಂಟಿಯಾಗಿ ಪ್ರಚಾರ ಮಾಡಲಿದ್ದಾರೆ. 13ರಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಬಿ.ಕೆ.ಹರಿಪ್ರಸಾದ್, ಬೆಂಗಳೂರು ಕೇಂದ್ರಲೋಕಸಭಾ ಕ್ಷೇತ್ರದ ರಿಜ್ವಾನ್ ಹರ್ಷದ್, ಬೆಂಗಳೂರು ಉತ್ತರದ ಮೈತ್ರಿ ಅಭ್ಯರ್ಥಿ ಕೃಷ್ಣಭೆರೇಗೌಡ ಅವರ ಪರವಾಗಿ ಪ್ರಚಾರ ನಡೆಸಲಿದ್ದಾರೆ ಎಂದು ವಿವರಿಸಿದರು.
ನಿನ್ನೆಯಷ್ಟೇ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ದೇವೇಗೌಡರು, ಮಾಜಿ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಪರಮೇಶ್ವರ್ ಸೇರಿದಂತೆ ಇನ್ನಿತರ ನಾಯಕರು ಜಂಟಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ್ದರು.