ಬೆಂಗಳೂರು, ಏ.1- ಲೋಕಸಭೆ ಚುನಾವಣೆ ಪ್ರಚಾರದ ಕಾವು ರಾಜ್ಯದಲ್ಲಿ ಹೆಚ್ಚಾಗಿದ್ದು, ವಿವಿಧ ರಾಜಕೀಯ ಪಕ್ಷಗಳ ನಾಯಕರು ಮತಯಾಚನೆಯಲ್ಲಿ ತೊಡಗಿದ್ದಾರೆ.
ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯೂ ಆಗಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಬೆಳಗಾವಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಾಗಲಕೋಟೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ಗುಂಡೂರಾವ್ ಸೇರಿದಂತೆ ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ.
ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರದಲ್ಲಿ ಪ್ರಚಾರ ಕೈಗೊಂಡಿದ್ದಾರೆ.ಆಯಾ ಪಕ್ಷಗಳ ನಾಯಕರು ತಮ್ಮ ತಮ್ಮ ಅಭ್ಯರ್ಥಿಗಳ ಪರವಾಗಿ ರೋಡ್ಶೋ, ಬಹಿರಂಗ ಪ್ರಚಾರದ ಮೂಲಕ ಮತಯಾಚನೆ ಮಾಡುತ್ತಿದ್ದಾರೆ.
ಪಕ್ಷೇತರ ಅಭ್ಯರ್ಥಿಗಳು ಕೂಡ ಕೆಲವು ಕ್ಷೇತ್ರಗಳಲ್ಲಿ ರಾಜಕೀಯ ಪಕ್ಷಗಳ ಅಭ್ಯರ್ಥಿಗಳಿಗಿಂತ ಕಡಿಮೆ ಇಲ್ಲದಂತೆ ಪ್ರಚಾರದಲ್ಲಿ ತೊಡಗಿದ್ದಾರೆ. ಹೈವೋಲ್ಟೇಜ್ ಕ್ಷೇತ್ರವೆಂದೇ ಬಿಂಬಿತವಾಗಿರುವ ಮಂಡ್ಯದಲ್ಲಿ ಪ್ರಚಾರದ ಅಬ್ಬರ ಜೋರಾಗಿದೆ.
ಎರಡನೇ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಂದುವರೆದಿದ್ದರೂ ಈಗಾಗಲೇ ಹಲವು ಕ್ಷೇತ್ರಗಳಲ್ಲಿ ಪ್ರಚಾರವನ್ನು ರಾಜಕೀಯ ಪಕ್ಷಗಳು ಕೈಗೊಂಡಿವೆ.
ಬಾಗಲಕೋಟೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ಗುಂಡೂರಾವ್ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ತಮ್ಮ ಪಕ್ಷದ ಅಭ್ಯರ್ಥಿ ಪರವಾಗಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ.
ಬೆಳಗಾವಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಯಾಚನೆಯಲ್ಲಿ ತೊಡಗಿದ್ದರೆ, ಕೊಪ್ಪಳದಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಕೂಡ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದರು.
ಎಚ್.ಡಿ.ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರು ತುಮಕೂರು ಲೋಕಸಭಾ ಕ್ಷೇತ್ರದ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ವಿವಿಧೆಡೆ ಜೆಡಿಎಸ್ ಆಯೋಜಿಸಿದ್ದ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಮತಯಾಚನೆ ಮಾಡಲಿದ್ದಾರೆ.
ಇದೇ ರೀತಿ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಚುನಾವಣೆ ಕಾವು ರಂಗೇರತೊಡಗಿದೆ. ವಿವಿಧ ರಾಜಕೀಯ ಪಕ್ಷಗಳ ನಾಯಕರ ನಡುವೆ ಆರೋಪ-ಪ್ರತ್ಯಾರೋಪಗಳು ನಿರಂತರವಾಗಿ ನಡೆಯುತ್ತಿವೆ.