
ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ಕರ್ನಾಟಕ ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಸಿದ್ಧಪಡಿಸಿದ್ದು, ಇಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಬೆಂಗಳೂರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ.
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಪದ್ಮನಾಭನಗರ ಕ್ಷೇತ್ರದಲ್ಲಿ ರೋಡ್ ಶೋ ನಡೆಯಲಿದೆ. ಸಂಜೆ 6 ಗಂಟೆಗೆ ಬನಶಂಕರಿ ದೇವಾಲಯದಿಂದ 1 ಕಿ.ಮೀ. ದೂರದವರೆಗೆ ರೋಡ್ ಶೋ ನಡೆಯಲಿದೆ. ಈ ವೇಳೆ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಪರ ಮತಯಾಚನೆ ಮಾಡಲಿದ್ದಾರೆ. ಬಿಜೆಪಿ ನಾಯಕರಾದ ಆರ್. ಅಶೋಕ್, ವಿ. ಸೋಮಣ್ಣ, ಸತೀಶ್ ರೆಡ್ಡಿ, ರವಿಸುಬ್ರಮಣ್ಯ, ಉದಯ್ ಗರುಡಾಚಾರ್ ಸೇರಿದಂತೆ ಹಲವು ಬಿಜೆಪಿ ಮುಖಂಡರು ಅಮಿತ್ ಶಾಗೆ ಸಾಥ್ ನೀಡಲಿದ್ದಾರೆ.
ಬಿಜೆಪಿಯ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ನಿರ್ಮಲಾ ಸೀತಾರಾಮನ್ ಮುಂತಾದವರು ಸೇರಿದಂತೆ ರಾಜ್ಯದ ಬಿಜೆಪಿ ನಾಯಕರ ಹೆಸರೂ ಇದೆ. ಬಿಜೆಪಿ ದಕ್ಷಿಣ ಕ್ಷೇತ್ರದಲ್ಲಿ ಅಭ್ಯರ್ಥಿಯ ಆಯ್ಕೆ ವಿಚಾರದಲ್ಲಿ ಕಾರ್ಯಕರ್ತರಲ್ಲಿ ಅಸಮಾಧಾನ ಉಂಟಾಗಿತ್ತು. ತೇಜಸ್ವಿನಿ ಅನಂತ್ಕುಮಾರ್ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿ ಘೋಷಿಸಬೇಕೆಂದು ಒತ್ತಾಯಿಸಲಾಗಿತ್ತು. ಆದರೆ, ಕೊನೆ ಕ್ಷಣದಲ್ಲಿ ತೇಜಸ್ವಿ ಸೂರ್ಯ ಅವರನ್ನು ಅಭ್ಯರ್ಥಿಯೆಂದು ಘೋಷಿಸಲಾಯಿತು.