ತಾರಕಕ್ಕೇರಿದ ಪ್ರಚಾರದ ಅಬ್ಬರ

ಬೆಂಗಳೂರು, ಏ.2- ಲೋಕಸಭಾ ಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಪ್ರಚಾರದ ಅಬ್ಬರ ತಾರಕಕ್ಕೇರುತ್ತಿದೆ.ಅತಿರಥ, ಮಹಾರಥರೂ ಕೂಡ ಚುನಾವಣಾ ಅಖಾಡಕ್ಕಿಳಿದು ಮತಯಾಚನೆಯಲ್ಲಿ ತೊಡಗಿದ್ದಾರೆ.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಬಿ.ಎಸ್.ಯಡಿಯೂರಪ್ಪ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಇಂದು ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದರು.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಮ್ಮ ತವರು ಕ್ಷೇತ್ರ ಹಾಸನದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಪರವಾಗಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದರು.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಈಶ್ವರ್ ಖಂಡ್ರೆ ಪರ ಪ್ರಚಾರ ನಡೆಸಿದರು.

ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ್‍ರಾವ್, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು ಬಿಜಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ರಮೇಶ್ ಜಿಗಜಿಣಗಿ ಪರವಾಗಿ ಮತಯಾಚನೆ ಮಾಡಿದರು.

ತುಮಕೂರು ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ದೇವೇಗೌಡರ ಪರವಾಗಿ ಪರಮೇಶ್ವರ್ ಅವರು ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದರು.

ಯಡಿಯೂರಪ್ಪನವರು ಬಳ್ಳಾರಿಯಲ್ಲಿ ಬಿಜೆಪಿ ಅಭ್ಯರ್ಥಿ ದೇವೇಂದ್ರಪ್ಪ ಅವರ ಪರವಾಗಿ ಪ್ರಚಾರ ನಡೆಸಿ ಮತಯಾಚನೆ ಮಾಡಿದರು.

ಹೈ ವೋಲ್ಟೇಜ್ ಕ್ಷೇತ್ರವೆಂದೇ ಪರಿಗಣಿತವಾಗಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ನಟರಾದ ಯಶ್, ದರ್ಶನ್ ಮೊದಲಾದವರು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಪರವಾಗಿ ಪ್ರಚಾರದಲ್ಲಿ ಭಾಗಿಯಾಗಿದ್ದರು.

ಇದೇ ಕ್ಷೇತ್ರದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿರುವ ನಿಖಿಲ್ ಕುಮಾರಸ್ವಾಮಿ ಪರವಾಗಿ ಸಚಿವರಾದ ಡಿ.ಸಿ.ತಮ್ಮಣ್ಣ, ಸಿ.ಎಸ್.ಪುಟ್ಟರಾಜು, ಸಂಸದ ಎಲ್.ಆರ್.ಶಿವರಾಮೇಗೌಡ, ಶಾಸಕಿ ಅನಿತಾ ಕುಮಾರಸ್ವಾಮಿ ಸೇರಿದಂತೆ ಹಲವು ಸ್ಥಳೀಯ ನಾಯಕರು ಪಾಲ್ಗೊಂಡು ಮತಯಾಚನೆ ಮಾಡಿದರು.

ಹೀಗೆ ವಿವಿಧ ಕ್ಷೇತ್ರಗಳಲ್ಲಿ ರಾಜಕೀಯ ಪಕ್ಷಗಳ ಪ್ರಮುಖ ನಾಯಕರು, ಮುಖಂಡರು, ಕಾರ್ಯಕರ್ತರು ಪಾಲ್ಗೊಂಡು ಪ್ರಚಾರ ನಡೆಸಿದರು.ರಾಜಕೀಯ ನಾಯಕರ ನಡುವೆ ಆರೋಪ-ಪ್ರತ್ಯಾರೋಪ ತಾರಕಕ್ಕೇರಿದ್ದು, ಕೆಲವೆಡೆ ರೋಡ್ ಶೋ ಮೂಲಕ ಮತದಾರರನ್ನು ಸೆಳೆಯುವ ಪ್ರಯತ್ನವನ್ನು ಅಭ್ಯರ್ಥಿಗಳು ಮಾಡಿದರೆ, ಮತ್ತೆ ಕೆಲವೆಡೆ ಬಹಿರಂಗ ಸಮಾವೇಶ ಮಾಡುವ ಮೂಲಕ ಮತಯಾಚನೆ ಮಾಡಲಾಯಿತು.

ಈಗಾಗಲೇ ನಾಮಪತ್ರ ಸಲ್ಲಿಸಿರುವ ರಾಜಕೀಯ ಪಕ್ಷಗಳ ಹಾಗೂ ಪಕ್ಷೇತರ ಅಭ್ಯರ್ಥಿಗಳು ಕೂಡ ತಮ್ಮದೇ ಆದ ರೀತಿಯಲ್ಲಿ ಮತದಾರರನ್ನು ಆಕರ್ಷಿಸಲು ಪ್ರಚಾರ ನಡೆಸುತ್ತಿದ್ದಾರೆ.ಬೆಳಗಿನ ವೇಳೆಯಲ್ಲಿ ರೋಡ್ ಶೋ, ಪಾದಯಾತ್ರೆ ಮೂಲಕ ಮತಯಾಚನೆ ಮಾಡಿದರೆ, ಮಧ್ಯಾಹ್ನದ ನಂತರ ಬಹಿರಂಗ ಸಮಾವೇಶ ಮಾಡುವ ಮೂಲಕ ಪ್ರಚಾರ ಕೈಗೊಳ್ಳಲಾಗುತ್ತದೆ.

ಬೇಸಿಗೆಯ ಬಿರುಬಿಸಿಲಾದ್ದರಿಂದ ಮಧ್ಯಾಹ್ನದ ವೇಳೆ ಪ್ರಚಾರ ಕಡಿಮೆಯಾಗಿರುತ್ತದೆ.ಬೆಂಗಳೂರಿನ ಮೂರು ಕ್ಷೇತ್ರಗಳಲ್ಲಿ ಕಣದಲ್ಲಿರುವ ಅಭ್ಯರ್ಥಿಗಳು ತಮ್ಮದೇ ಆದ ರೀತಿಯಲ್ಲಿ ಪ್ರಚಾರ ನಡೆಸುವ ಮೂಲಕ ಮತದಾರರನ್ನು ಸೆಳೆಯುವ ಯತ್ನ ಮಾಡುತ್ತಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ