ಬೆಂಗಳೂರು,ಏ.3-ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದರು.
ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಮತ್ತಿತರ ಸಮ್ಮುಖದಲ್ಲಿ ರತ್ನಪ್ರಭಾ ಕಮಲವನ್ನು ಮುಡಿಗೇರಿಸಿಕೊಂಡರು.
ಕಲಬುರಗಿ ಬಿಜೆಪಿ ಅಭ್ಯರ್ಥಿ ಡಾ.ಉಮೇಶ್ ಜಾಧವ್ ಅವರು ನಾಮಪತ್ರ ಸಲ್ಲಿಸಿದ ಬಳಿಕ ರತ್ನಪ್ರಭಾ ಅವರನ್ನು ಯಡಿಯೂರಪ್ಪ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರೆ.
ಈ ಹಿಂದೆಯೇ ಅವರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು.ಕಲಬುರಗಿ ಮೀಸಲು ಲೋಕಸಭಾ ಕ್ಷೇತ್ರದಿಂದ ಅವರೇ ಅಭ್ಯರ್ಥಿಯಾಗಲಿದ್ದಾರೆ ಎಂಬ ವದಂತಿಯೂ ಹಬ್ಬಿತ್ತು. ರತ್ನಪ್ರಭಾ ಸ್ಪರ್ಧಿಸಿದರೆ ದಲಿತ ಮತಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸೆಳೆಯಬಹುದೆಂಬ ಲೆಕ್ಕಾಚಾರ ಬಿಜೆಪಿಯದ್ದಾಗಿತ್ತು.
ಆದರೆ ಉಮೇಶ್ ಜಾಧವ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗಿದ್ದರಿಂದ ಕಲಬುರಗಿ ಬದಲು ಚಾಮರಾಜನಗರ ಮೀಸಲು ಕ್ಷೇತ್ರದಿಂದ ಟಿಕೆಟ್ ಪಡೆಯುವ ಪ್ರಯತ್ನ ನಡೆಸಿದ್ದರು.
ಈ ಕ್ಷೇತ್ರದಿಂದ ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್, ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದ ನಂತರ ರತ್ನಪ್ರಭಾ ಬಿಜೆಪಿಗೆ ಸೇರುವ ಪ್ರಯತ್ನ ಹಾಗೆ ಉಳಿದಿತ್ತು. ಕೆಲವು ದಿನಗಳಲ್ಲಿ ಯಡಿಯೂರಪ್ಪನವರೊಂದಿಗೆ ಮಾತುಕತೆ ನಡೆಸಿದ ಬಳಿಕ ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಮೂಲಗಳ ಪ್ರಕಾರ ರತ್ನಪ್ರಭಾ ಅವರಿಗೆ ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಸೂಕ್ತವಾದ ಸ್ಥಾನಮಾನ ನೀಡುವ ಆಶ್ವಾಸನೆ ಬಿಜೆಪಿ ನಾಯಕರು ನೀಡಿದ್ದಾರೆ ಎಂದು ತಿಳಿದುಬಂದಿದೆ.