ಬೆಂಗಳೂರು, ಏ.3- ಕಾಂಗ್ರೆಸ್ನ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಂಸದರಾದ ಪ್ರಹ್ಲಾದ್ ಜೋಷಿ, ಸಂಗಣ್ಣ ಕರಡಿ, ಮಾಜಿ ಶಾಸಕ ಮಧು ಬಂಗಾರಪ್ಪ ಸೇರಿದಂತೆ ಹಲವು ಘಟಾನುಘಟಿಗಳು ಇಂದು ನಾಮಪತ್ರ ಸಲ್ಲಿಸಿದರು.
ಬೃಹತ್ ಮೆರವಣಿಗೆ, ಅದ್ಧೂರಿ ಸಮಾವೇಶದ ಮೂಲಕ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು, ಬಿಜೆಪಿ ಪಕ್ಷದ ಹುರಿಯಾಳುಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಶಕ್ತಿ ಪ್ರದರ್ಶನ ಮಾಡಿದರು.
ಕಲಬುರಗಿಯಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿಯಿಂದ ಉಮೇಶ್ ಜಾದವ್, ಬೀದರ್ನಿಂದ ಭಗವಂತ ಕೂಬಾ, ಧಾರವಾಡದಿಂದ ಪ್ರಹ್ಲಾದ್ ಜೋಷಿ, ಚಿಕ್ಕೋಡಿಯಿಂದ ಅಣ್ಣಾಸಾಹೇಬ್ ಜೊಲ್ಲೆ, ಕೊಪ್ಪಳದಿಂದ ಸಂಗಣ್ಣ ಕರಡಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳಾದ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಮಧು ಬಂಗಾರಪ್ಪ, ಹಾವೇರಿಯಿಂದ ಡಿ.ಆರ್.ಪಾಟೀಲ್ ನಾಮಪತ್ರ ಸಲ್ಲಿಸಿದರು.
ಮಧು ಬಂಗಾರಪ್ಪ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿದಂತೆ ಹಲವು ಮುಖಂಡರು ಪಾಲ್ಗೊಂಡಿದ್ದರು.
ಶಿವಮೊಗ್ಗದಲ್ಲಿ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರು ಒಟ್ಟಾಗಿ ಬೃಹತ್ ಮೆರವಣಿಗೆಯಲ್ಲಿ ಸಾಗಿ ನಾಮಪತ್ರ ಸಲ್ಲಿಸಿದ ನಂತರ ಸಮಾವೇಶ ನಡೆಸಲಾಯಿತು.
ಸಮಾವೇಶದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿಗಳು ಮೈತ್ರಿ ಅಭ್ಯರ್ಥಿಗಳನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು.ಇಲ್ಲಿಂದಲೇ ರಾಷ್ಟ್ರಕ್ಕೆ ಹೊಸ ಸಂದೇಶ ನೀಡಬೇಕೆಂದು ಹೇಳಿದರು.
ಈ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿನ ಅಂತರವನ್ನು ಕಳೆದ ಬಾರಿ ಚುನಾವಣೆಯಲ್ಲಿ ಕಡಿಮೆ ಮಾಡಿದ್ದೇವೆ. ಈ ಬಾರಿ ಸೋಲಿಸುತ್ತೇವೆ ಎಂದರು.
ಅತ್ತ ಕಲಬುರಗಿ ಕ್ಷೇತ್ರದಲ್ಲಿ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸ್ಪರ್ಧಿಸಿರುವ ಉಮೇಶ್ ಜಾದವ್ ಅವರು ಇಂದು ನಾಮಪತ್ರ ಸಲ್ಲಿಸಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಾಬುರಾವ್ ಚಿಂಚನಸೂರ್, ಮಾಲೀಕಯ್ಯ ಗುತ್ತೇದಾರ್, ಎ.ಬಿ.ಮಾಲಕರೆಡ್ಡಿ ಸೇರಿದಂತೆ ಹಲವು ಮುಖಂಡರು ಸಾಥ್ ನೀಡಿದರು.
ಜಾದವ್ ಅವರು ನಾಮಪತ್ರ ಸಲ್ಲಿಸುವ ಮುನ್ನ ಬಿಜೆಪಿ ಕಾರ್ಯಕರ್ತರು, ವಿವಿಧ ಸಂಘಟನೆಗಳ ಕಾರ್ಯಕರ್ತರು ಬೃಹತ್ ಮೆರವಣಿಗೆ ನಡೆಸುವ ಮೂಲಕ ಶಕ್ತಿ ಪ್ರದರ್ಶನ ಮಾಡಿದರು.
ಖರ್ಗೆ ಅವರನ್ನು ಸೋಲಿಸಲೇಬೇಕೆಂದು ಬಿಜೆಪಿಕಾರ್ಯತಂತ್ರ ಹೆಣೆದಿದೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಪ್ರಹ್ಲಾದ್ ಜೋಷಿ ಅವರು ತಮ್ಮ ಬೆಂಬಲಿಗರು, ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ಸಾಗಿ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತಿತರ ಮುಖಂಡರು ಸಾಥ್ ನೀಡಿದರು.
ಚಿಕ್ಕೋಡಿಯಲ್ಲಿ ಬಿಜೆಪಿ ಅಭ್ಯರ್ಥಿ ಅಣ್ಣಾ ಸಾಹೇಬ್ ಜೊಲ್ಲೆ ಅಪಾರ ಬೆಂಬಲಿಗರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಮುಖಂಡರಾದ ಮಹಾಂತೇಶ್ ಕವಟಗಿ ಮಠ್, ಶಶಿಕಲಾ ಜೊಲ್ಲೆ ಸಾಥ್ ನೀಡಿದರು.
ಕೊಪ್ಪಳದಲ್ಲಿ ಸಂಗಣ್ಣ ಕರಡಿ ತಮ್ಮ ಭಾರೀ ಬೆಂಬಲಿಗರೊಂದಿಗೆ ತೆರಳಿ ಉಮೇದುವಾರಿಕೆ ಸಲ್ಲಿಸಿದರು.ಇದಕ್ಕೂ ಮುನ್ನ ಗವಿಸಿದ್ದೇಶ್ವರ ಮಠಕ್ಕೆ ತೆರಳಿ ಪೂಜೆ ಸಲ್ಲಿಸಿದರು.
ಆತ್ತ ಹಾವೇರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಆರ್.ಪಾಟೀಲ್ ನಾಮಪತ್ರ ಸಲ್ಲಿಸಿದರು. ಅಂತಿಮ ಕ್ಷಣದಲ್ಲಿ ಟಿಕೆಟ್ ಘೋಷಣೆಯಾದ ಕಾರಣ ಧಾರವಾಡ ಮತ್ತು ದಾವಣಗೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳು ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ.ಇಂದು ಪಕ್ಷೇತರರು ಸೇರಿದಂತೆ ಪ್ರಮುಖ ರಾಜಕೀಯ ಪಕ್ಷಗಳೆ ಘಟಾನುಘಟಿಗಳು ನಾಮಪತ್ರ ಸಲ್ಲಿಸಿದರು.