ಪ್ರಚಾರದಲ್ಲಿ ನಿರತರಾಗಿರುವ ರಾಜಕೀಯ ಪಕ್ಷಗಳ ಪ್ರಮುಖ ನಾಯಕರು

ಬೆಂಗಳೂರು,ಏ.5- ಲೋಕಸಭೆ ಚುನಾವಣೆ ಕಾವು ರಾಜ್ಯದಲ್ಲಿ ಏರತೊಡಗಿದ್ದು, ವಿವಿಧ ರಾಜಕೀಯ ಪಕ್ಷಗಳ ಪ್ರಮುಖ ನಾಯಕರು ಪ್ರಚಾರದಲ್ಲಿ ನಿರತರಾಗಿದ್ದಾರೆ.

ಬೇಸಿಗೆ ಬಿರುಬಿಸಿಲಿನ ನಡುವೆಯೂ ಅಬ್ಬರದ ಚುನಾವಣಾ ಪ್ರಚಾರ ರಾಜ್ಯಾದ್ಯಂತ ನಡೆಸಲಾಗುತ್ತಿದೆ.ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಎಸ್.ಎಂ.ಕೃಷ್ಣ, ಸಿದ್ದರಾಮಯ್ಯ, ಜಗದೀಶ್ ಶೆಟ್ಟರ್ ಸೇರಿದಂತೆ ಪ್ರಮುಖ ನಾಯಕರು ಇಂದು ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದರು.

ಅಲ್ಲದೆ ರಾಜ್ಯ ಹಾಗೂ ಕೇಂದ್ರ ಸಚಿವರು ಕೂಡ ವಿವಿಧ ಕ್ಷೇತ್ರಗಳಲ್ಲಿ ತಮ್ಮ ತಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಿದರು.ರೋಡ್ ಶೋ, ಸಮಾವೇಶಗಳ ಮೂಲಕ ಪ್ರಚಾರ ನಡೆಸಿ ಮತದಾರರನ್ನು ಓಲೈಸುವ ಪ್ರಯತ್ನವನ್ನು ಮಾಡಲಾಯಿತು.

ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿರುವ ದೇವೇಗೌಡರು ಇಂದು ಮಧುಗಿರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ಕೈಗೊಂಡು ಮತಯಾಚನೆ ಮಾಡಿದರು.

ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ಕಾಂಗ್ರೆಸ್-ಜೆಡಿಎಸ್‍ನ ಹಲವು ನಾಯಕರು ಗೌಡರಿಗೆ ಸಾಥ್ ನೀಡಿದರು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಪರವಾಗಿ ಮತಯಾಚನೆ ಮಾಡಿದರು.

ಕೊಪ್ಪ , ಮೂಡಿಗೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಮೋದ್ ಮಧ್ವರಾಜ್ ಪರವಾಗಿ ಚುನಾವಣಾ ಪ್ರಚಾರದಲ್ಲಿ ಮುಖ್ಯಮಂತ್ರಿ ಭಾಗವಹಿಸಿದ್ದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ , ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್ ಪರವಾಗಿ ಮತಯಾಚನೆ ಮಾಡಿದರು.

ಬೀದರ್ ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಭಗವಂತ್ ಕೂಬ ಪರವಾಗಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಚುನಾವಣಾ ಪ್ರಚಾರ ನಡೆಸಿದರು.

ಹಾಸನ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎ.ಮಂಜು ಪರವಾಗಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಪ್ರಚಾರ ನಡೆಸಿ ಮತಯಾಚನೆ ಮಾಡಿದರು.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿ ಸಚಿವ ಕೃಷ್ಣಭೆರೇಗೌಡರ ಪರವಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಮೊದಲಾದ ಮುಖಂಡರು ಮತ ಯಾಚನೆ ಮಾಡಿದರು.

ಹೀಗೆ ಆಯಾ ಕ್ಷೇತ್ರಗಳಲ್ಲಿ ವಿವಿಧ ರಾಜಕೀಯ ಪಕ್ಷಗಳ ಹಾಗೂ ಪಕ್ಷೇತರ ಅಭ್ಯರ್ಥಿಗಳು ಮತಯಾಚನೆಯಲ್ಲಿ ತೊಡಗಿದ್ದರು.

ರಾಜಕೀಯ ಪಕ್ಷಗಳ ನಾಯಕರ ನಡುವೆ ಪರಸ್ಪರ ಆರೋಪ-ಪ್ರತ್ಯಾರೋಪವು ಎಂದಿನಂತೆ ಮುಂದುವರೆದಿತ್ತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ