ಮೈತ್ರಿ ಪಕ್ಷಗಳಿಂದ ಏ.7ರಂದು ಮತ್ತು ಏ.8ರಂದು ಜಂಟಿ ಪತ್ರಿಕಾಗೋಷ್ಠಿ

ಬೆಂಗಳೂರು,ಏ.5-ಮೈಸೂರು, ಮಂಡ್ಯ ಲೋಕಸಭಾ ಕ್ಷೇತ್ರಗಳಲ್ಲಿ ಮಿತ್ರ ಪಕ್ಷಗಳ ನಡುವೆ ಉಂಟಾಗಿರುವ ಗೊಂದಲಗಳನ್ನು ಸರಿಪಡಿಸಲು ಎರಡು ಪಕ್ಷಗಳ ನಾಯಕರು ಹರಸಾಹಸ ಮಾಡುತ್ತಿದ್ದಾರೆ.

ಮೈಸೂರಿನಲ್ಲಿ ಏ.7ರಂದು ಜಂಟಿ ಪತ್ರಿಕಾಗೋಷ್ಠಿ ನಡೆಸಿ ಗೊಂದಲಗಳಿಗೆ ತೆರೆ ಎಳೆಯುವ ಸಾಧ್ಯತೆ ಇದ್ದು , ಮಾರನೇ ದಿನ ಏ.8ರಂದು ಮೈಸೂರಿನಲ್ಲಿ ದೇವೇಗೌಡರು ಮತ್ತು ಸಿದ್ದರಾಮಯ್ಯನವರು ಒಂದೇ ವೇದಿಕೆಯಲ್ಲಿ ಕುಳಿತು ಬಹಿರಂಗ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಆ ಮೂಲಕ ಮೈಸೂರಿನಲ್ಲಿ ಉಂಟಾಗಿರುವ ಅಸಮಾಧಾನವನ್ನು ತಿಳಿಗೊಳಿಸುವ ಪ್ರಯತ್ನ ನಡೆಸಲಾಗುತ್ತಿದೆ.

ಈವರೆಗೂ ಮಂಡ್ಯ ಲೋಕಸಭಾ ಚುನಾವಣಾ ಕಣದಿಂದ ದೂರ ಉಳಿದಿದ್ದ ಸಚಿವ ಜಿ.ಟಿ.ದೇವೇಗೌಡರು ಇಂದು ಬೆಳಗ್ಗೆ ಖಾಸಗಿ ಹೋಟೆಲ್‍ನಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ ನಡೆಸಿದರು.

ಆದರೆ ಸಭೆಯಲ್ಲಿ ಒಮ್ಮತದ ಅಭಿಪ್ರಾಯ ವ್ಯಕ್ತವಾಗಲಿಲ್ಲ. ಕಾಂಗ್ರೆಸ್ ಜೊತೆಗಿನ ಮೈತ್ರಿಗೆ ವಿರೋಧ ವ್ಯಕ್ತವಾಯಿತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿ.ಟಿ.ದೇವೇಗೌಡರ ಪರವಾಗಿ ಮತ್ತು ಸಿದ್ದರಾಮಯ್ಯನವರ ವಿರುದ್ಧವಾಗಿ ಕೆಲಸ ಮಾಡುವಾಗ ಸಾಕಷ್ಟು ಬಡಿದಾಡಿಕೊಂಡಿದ್ದೇವೆ. ಈಗ ರಾಜಕೀಯ ಎದುರಾಳಿಗಳ ಜೊತೆ ಹೊಂದಾಣಿಕೆ ಮಾಡಿಕೊಳ್ಳಿ ಎಂದು ಹೇಳಿದರೆ ಹೇಗೆ ಸಾಧ್ಯ? ಎಂದು ಮುಖಂಡರನ್ನು ಕಾರ್ಯಕರ್ತರು ಪ್ರಶ್ನಿಸಿದರು.

ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಜಿ.ಟಿ.ದೇವೇಗೌಡರು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋತರೆ ಅದರ ಹೊಣೆಯನ್ನು ನಾನು ಹೊರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಲೋಕಸಭಾ ಚುನಾವಣೆ ನಡೆದಿತ್ತು. ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಎಚ್.ವಿಶ್ವನಾಥ್ ಸೋಲು ಕಂಡಿದ್ದರು.ಸಿದ್ದರಾಮಯ್ಯ ಅದರ ನೈತಿಕ ಹೊಣೆ ಹೊತ್ತಿದ್ದರಾ?ಎಂದು ಜಿಟಿಡಿ ಪ್ರಶ್ನಿಸಿದರು.

ಮೈಸೂರು ಲೋಕಸಭಾ ಕ್ಷೇತ್ರದಲ್ಲಿ 8 ವಿಧಾನಸಭಾ ಕ್ಷೇತ್ರಗಳಿವೆ. ನನ್ನ ಒಂದೇ ಕ್ಷೇತ್ರ ಬರುವುದಿಲ್ಲ. ಹಾಗಾಗಿ ಚುನಾವಣೆ ಸೋಲಿನ ಹೊಣೆಯನ್ನು ನಾನು ಹೊತ್ತುಕೊಳ್ಳುವುದಿಲ್ಲ ಎಂದು ಹೇಳಿದರು.

ಇತ್ತ ಬೆಂಗಳೂರಿನಲ್ಲಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಮೈಸೂರಿನಲ್ಲಿ ಗೊಂದಲ ಬಗೆಹರಿಯುತ್ತದೆ. ಎಲ್ಲ ನಾಯಕರು ಒಂದಾಗಿ ಜಂಟಿ ಪತ್ರಿಕಾಗೋಷ್ಠಿ ನಡೆಸುವ ಮೂಲಕ ಅಸಮಾಧಾನವನ್ನು ತೊಡೆದುಹಾಕಲಿದ್ದಾರೆ ಎಂದು ತಿಳಿಸಿದರು.

ಮಂಡ್ಯ ಕ್ಷೇತ್ರದಲ್ಲಿ ಕೆಳಹಂತದ ಕಾರ್ಯಕರ್ತರ ನಡುವೆ ಗೊಂದಲಗಳಿವೆ. ನಾನು ಈಗಾಗಲೇ ಮಾತುಕತೆ ನಡೆಸಿದ್ದೇನೆ. ಶೀಘ್ರದಲ್ಲಿ ಎಲ್ಲವೂ ಬಗೆಹರಿಯುತ್ತದೆ ಎಂದರು.

ಜೆಡಿಎಸ್ ಮುಖಂಡ ಹಾಗೂ ಸಚಿವ ಸಾ.ರಾ.ಮಹೇಶ್ ಮಾತನಾಡಿ, ಕ್ಷೇತ್ರದಲ್ಲಿ ಹೊಂದಾಣಿಕೆ ಸಮಸ್ಯೆ ಇರುವುದನ್ನು ಒಪ್ಪಿಕೊಂಡರು.ಮೇಲ್ನೋಟದಲ್ಲಿ ನಾಯಕರು ಹೊಂದಾಣಿಕೆ ಮಾಡಿಕೊಂಡರೆ ಸಾಲದು.ಕೆಳಹಂತದಲ್ಲಿ ಕಾರ್ಯಕರ್ತರನ್ನು ಒಗ್ಗೂಡಿಸುವ ಕೆಲಸವಾಗಬೇಕು ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ