ಬೆಂಗಳೂರು,ಏ.7- ರಾಜ್ಯದಲ್ಲಿ ನಡೆಯುತ್ತಿರುವ ಲೋಕಸಭೆ ಚುನಾವಣೆ ಕಾವು ಏರತೊಡಗಿದ್ದು, ಮುಖ್ಯಮಂತ್ರಿ, ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ.
ಎರಡೂ ಹಂತಗಳ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಆಯಾ ಪಕ್ಷಗಳ ಅಧಿಕೃತ ಅಭ್ಯರ್ಥಿಗಳ ಪರವಾಗಿ ರಾಜಕೀಯ ಪಕ್ಷಗಳ ನಾಯಕರು ರೋಡ್ ಶೋ, ಬಹಿರಂಗ ಸಮಾವೇಶದ ಮೂಲಕ ಮತಯಾಚನೆ ಮಾಡತೊಡಗಿದ್ದಾರೆ.ರಾಜಕೀಯ ಪಕ್ಷಗಳ ನಾಯಕರು ತಮ್ಮ ತಮ್ಮ ಸರ್ಕಾರದ ಸಾಧನೆಗಳನ್ನು ಜನರ ಮುಂದಿಟ್ಟು ಮತ ಯಾಚಿಸುವುದು ಒಂದೆಡೆಯಾದರೆ , ಆರೋಪ ಪ್ರತ್ಯಾರೋಪಗಳ ಸುರಿಮಳೆ ಮತ್ತೊಂದೆಡೆ ಕೇಳಿಬರುತ್ತಿದೆ. ಹಲವು ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರಕ್ಕೆ ತಾರಾ ರಂಗು ದೊರೆತಿದೆ.
ಬೇಸಿಗೆ ಬಿರು ಬಿಸಿಲನ್ನು ಲೆಕ್ಕಿಸದೆ ಬೆಳಗ್ಗೆಯಿಂದ ಸಂಜೆವರೆಗೂ ನಿರಂತರವಾಗಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ.ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಸಚಿವ ಕೃಷ್ಣಭೆರೇಗೌಡರ ಪರವಾಗಿ ಮತಯಾಚನೆ ಮಾಡಿದರು.
ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ಉಭಯ ಪಕ್ಷಗಳ ಹಲವು ನಾಯಕರು, ಮುಖಂಡರು ಕೂಡ ಕುಮಾರಸ್ವಾಮಿ ಜೊತೆಗೂಡಿ ಚುನಾವಣಾ ಪ್ರಚಾರ ಕೈಗೊಂಡರು.
ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಚ್.ಯಡಿಯೂರಪ್ಪ ಅವರು ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿಸ್ವಾಮಿ ಪರ ಚುನಾವಣಾ ಪ್ರಚಾರ ನಡೆಸಿದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಂಗಳೂರು ಕೇಂದ್ರ ಹಾಗೂ ಉತ್ತರ ಲೋಕಸಭಾ ಕ್ಷೇತ್ರವ್ಯಾಪ್ತಿಯಲ್ಲಿ ಮತ ಪ್ರಚಾರ ನಡೆಸಿದರು. ಬೆಂಗಳೂರು ಕೇಂದ್ರದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ರಿಜ್ವಾನ್ ಹರ್ಷದ್ ಪರವಾಗಿ ನಡೆದ ಚುನಾವಣಾ ಪ್ರಚಾರದಲ್ಲೂ ಸಿದ್ದರಾಮಯ್ಯ ಮತ ಯಾಚನೆ ಮಾಡಿದರು.
ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ದೇವೇಂದ್ರಪ್ಪ ಅವರ ಪರವಾಗಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಚುನಾವಣಾ ಪ್ರಚಾರ ನಡೆಸಿದರು. ಕಲಬುರಗಿ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಸಂಸದ ಮಲ್ಲಿಕಾರ್ಜುನ ಖರ್ಗೆ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಅಭ್ಯರ್ಥಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಕೋಲಾರದಲ್ಲಿ ಮೈತ್ರಿ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ಸೇರಿದಂತೆ ಬಹುತೇಕ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರದಲ್ಲಿ ಬಿರುಸಿನ ಮತಯಾಚನೆಯಲ್ಲಿ ತೊಡಗಿದ್ದರು.
ತಮ್ಮದೇ ಆದ ರೀತಿಯಲ್ಲಿ ಮತದಾರರನ್ನು ಓಲೈಸಲು ತಂತ್ರ, ಪ್ರತಿತಂತ್ರಗಳನ್ನು ಅನುಸರಿಸ ತೊಡಗಿದ್ದಾರೆ. ರಾಜ್ಯ ಪ್ರತಿನಿಧಿಸುವ ಕೇಂದ್ರ ಸಚಿವರು ಹಾಗೂ ರಾಜ್ಯ ಸಚಿವರುಗಳು ಚುನಾವಣಾ ಪ್ರಚಾರದಲ್ಲಿ ನಿರಂತರವಾಗಿ ಪಾಲ್ಗೊಂಡು ಮತಯಾಚನೆ ಮಾಡುತ್ತಿದ್ದಾರೆ.