ಮಂಡ್ಯ, ಏ.11- ಭಿನ್ನಾಭಿಪ್ರಾಯ ಮರೆತು ಉಭಯ ಪಕ್ಷಗಳ ಮುಖಂಡರು, ಕಾರ್ಯಕರ್ತರು ಒಟ್ಟಾಗಿ ಚುನಾವಣೆಯಲ್ಲಿ ಶ್ರಮಿಸುವ ಮೂಲಕ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರನ್ನು ಗೆಲ್ಲಿಸಬೇಕೆಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕರೆ ನೀಡಿದ್ದಾರೆ.
ಖಾಸಗಿ ಹೊಟೇಲ್ನಲ್ಲಿ ನಡೆದ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ಎಲ್ಲರೂ ಒಟ್ಟಾಗಿ ಚುನಾವಣೆಯನ್ನು ಎದುರಿಸಬೇಕು ಎಂದಿದ್ದಾರೆ.
ಇಂದು ಬೆಳಗ್ಗೆ ಚುನಾವಣಾ ಪ್ರಚಾರ ಕೈಗೊಳ್ಳುವ ಮುನ್ನ ಸಭೆ ನಡೆಸಿದ ಕುಮಾರಸ್ವಾಮಿ, ತಾವು ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುವುದಾಗಿ ಹೇಳಿದ್ದಾರೆ.
ಚುನಾವಣೆ ನಂತರ ನಿಮ್ಮ ಸಮಸ್ಯೆಗಳನ್ನು ಬಗೆಹರಿಸುತ್ತೇನೆಂದು ಕಾರ್ಯಕರ್ತರಿಗೆ ಭರವಸೆ ನೀಡಿದ್ದಾರೆ. ನೀತಿ-ಸಂಹಿತೆ ಜಾರಿಯಲ್ಲಿರುವುದರಿಂದ ಸಮಸ್ಯೆಗಳನ್ನು ಪರಿಹರಿಸುವ ಬಗ್ಗೆ ಯಾವುದೇ ಆಶ್ವಾಸನೆ ಕೊಡಲು ಆಗುವುದಿಲ್ಲ ಎಂದು ಹೇಳಿದ್ದಾರೆ.
ಸಭೆಯಲ್ಲಿ ಉಭಯ ಪಕ್ಷಗಳ ಸ್ಥಳೀಯ ಮುಖಂಡರು ಭಾಗವಹಿಸಿದ್ದರು. ಕಾಂಗ್ರೆಸ್ ಮುಖಂಡರ ಅಸಮಾಧಾನವನ್ನು ಶಮನಗೊಳಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್-ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರ ಮಹತ್ವದ ಸಭೆ ನಡೆಸಿದರು.