ಮೂರು ತಿಂಗಳಿನೊಳಗೆ ಉಕ್ಕಿನ ಮೇಲ್ಸೇತುವೆ ಕಾಮಗಾರಿ ಪೂರ್ಣ-ಬಿಬಿಎಂಪಿ ಅಭಿಯಂತರ ಕೆ.ಟಿ.ನಾಗರಾಜ್

ಬೆಂಗಳೂರು,ಏ.12- ಶಿವಾನಂದ ವೃತ್ತದಲ್ಲಿ ನಿರ್ಮಿಸಲಾಗುತ್ತಿರುವ ಉಕ್ಕಿನ ಮೇಲ್ಸೇತುವೆ ಕಾಮಗಾರಿ ಮೂರು ತಿಂಗಳೊಳಗೆ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲು ಬಿಬಿಎಂಪಿ ತೀರ್ಮಾನಿಸಿದೆ.

ಮೇಲ್ಸೇತುವೆ ಕಾಮಗಾರಿ ಪ್ರಗತಿಯಲ್ಲಿ ಸಾಗುತ್ತಿದ್ದು, ಜುಲೈ 30ರೊಳಗೆ ಕಾಮಗಾರಿ ಪೂರ್ಣಗೊಳಿಸುವತ್ತ ಗಮನಹರಿಸಿದ್ದೇವೆ ಎಂದು ಬಿಬಿಎಂಪಿ ಯೋಜನಾ ವಿಭಾಗದ ಮುಖ್ಯ ಅಭಿಯಂತರ ಕೆ.ಟಿ.ನಾಗರಾಜ್ ಸುದ್ದಿಗಾರರಿಗೆ ತಿಳಿಸಿದರು.

ಈಗಾಗಲೇ ಶೇ.40ರಷ್ಟು ಕಾಮಗಾರಿ ಪೂರ್ಣಗೊಂಡಿದ್ದು, ಉಳಿದ ಶೇ.60ರಷ್ಟು ಕಾಮಗಾರಿಯನ್ನು ತ್ವರಿತವಾಗಿ ಕೈಗೆತ್ತಿಕೊಳ್ಳಲಾಗುತ್ತದೆ ಎಂದು ಅವರು ವಿವರಿಸಿದರು.

ಅಂದಾಜು 60 ಕೋಟಿ ರೂ.ವೆಚ್ಚದಲ್ಲಿ ಉಕ್ಕಿನ ಮೇಲ್ಸೇತುವೆ ನಿರ್ಮಿಸಲಾಗುತ್ತಿದೆ.493 ಮೀಟರ್ ಉದ್ದದ ಸೇತುವೆ ನಿರ್ಮಾಣಕ್ಕಾಗಿ 16 ಬೃಹತ್ ಪಿಲ್ಲರ್‍ಗಳನ್ನು ನಿರ್ಮಿಸಲಾಗಿದೆ.

ಮೇಲ್ಸೇತುವೆ ನಿರ್ಮಾಣಕ್ಕಾಗಿ 1500 ಚ.ಮೀ ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆ.16 ಪಿಲ್ಲರ್‍ಗಳ ಪೈಕಿ 8 ಪಿಲ್ಲರ್‍ಗಳನ್ನು ಪೂರ್ಣಗೊಳಿಸಲಾಗಿದೆ.ಮೂರು ಪಿಲ್ಲರ್‍ಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ ಎಂದು ನಾಗರಾಜ್ ವಿವರಣೆ ನೀಡಿದರು.

ಉಕ್ಕಿನ ಮೇಲ್ಸೇತುವೆ ನಿರ್ಮಾಣದ ನಂತರ ಆ ರಸ್ತೆಯಲ್ಲಿ ಉಂಟಾಗುತ್ತಿದ್ದ ವಾಹನ ದಟ್ಟಣೆ ನಿವಾರಣೆಯಾಗಲಿದೆ ಎಂದು ಅವರು ಇದೇ ಸಂದರ್ಭದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ