ಬೆಂಗಳೂರು, ಏ.12-ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ಏ.18 ರಂದು ಮತದಾನ ನಡೆಯಲಿದ್ದು, ರಾಷ್ಟ್ರ ಮತ್ತು ರಾಜ್ಯಮಟ್ಟದ ರಾಜಕೀಯ ಪಕ್ಷಗಳ ನಾಯಕರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ.
ಮೊದಲ ಹಂತದ ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಕೇವಲ ನಾಲ್ಕು ದಿನ ಮಾತ್ರ ಬಾಕಿ ಉಳಿದಿರುವುದರಿಂದ ರಾಜಕೀಯ ನಾಯಕರು ನಿರಂತರವಾಗಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ.
ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಲೋಕಸಭಾ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಏ.16ರಂದು ತೆರೆ ಬೀಳಲಿದೆ. ಈ 14 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ 13, ಕಾಂಗ್ರೆಸ್ 10, ಜೆಡಿಎಸ್ 4 ಅಭ್ಯರ್ಥಿಗಳು ಸ್ಪರ್ಧೆಗಿಳಿದಿದ್ದಾರೆ. ಪಕ್ಷೇತರ ಅಭ್ಯರ್ಥಿಗಳು ಸೇರಿದಂತೆ ಒಟ್ಟು 241 ಮಂದಿ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಎಐಸಿಸಿ ಅಧ್ಯಕ್ಷ ರಾಹುಲ್ಗಾಂಧಿ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ದಿನೇಶ್ಗುಂಡೂರಾವ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಹಾಗೂ ರಾಜ್ಯ ಸಚಿವರು ಕೂಡ ಬಿರುಸಿನ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದು, ತಮ್ಮ ತಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡುತ್ತಿದ್ದಾರೆ.
ನರೇಂದ್ರ ಮೋದಿ ಹಾಗೂ ರಾಹುಲ್ಗಾಂಧಿ, ಬಿಎಸ್ಪಿ ಮುಖ್ಯಸ್ಥೆ ಮಾಯಾವತಿಯವರು ಈಗಾಗಲೇ ಒಂದು ಸುತ್ತಿನ ಚುನಾವಣಾ ಪ್ರಚಾರ ಕೈಗೊಂಡು ಮತಯಾಚನೆ ಮಾಡಿದ್ದಾರೆ. ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಪ್ರಮುಖ ರಾಷ್ಟ್ರೀಯ ನಾಯಕರು ಮತ್ತೊಂದು ಸುತ್ತಿನ ಚುನಾವಣಾ ಪ್ರಚಾರವನ್ನು ಕೈಗೊಳ್ಳುತ್ತಿದ್ದಾರೆ. ದೇವೇಗೌಡರು-ಸಿದ್ದರಾಮಯ್ಯ ಅವರು ಕಳೆದ ಮೂರ್ನಾಲ್ಕು ದಿನಗಳಿಂದಲೂ ಚುನಾವಣಾ ಪ್ರಚಾರ ಕೈಗೊಂಡು ಮೈತ್ರಿ ಅಭ್ಯರ್ಥಿ ಪರವಾಗಿ ಮತ ಯಾಚನೆಯಲ್ಲಿ ತೊಡಗಿದ್ದಾರೆ.
ಅದೇ ರೀತಿ ಕಾಂಗ್ರೆಸ್, ಬಿಜೆಪಿ ಸೇರಿದಂತೆ ಪ್ರಮುಖ ರಾಜಕೀಯ ಪಕ್ಷಗಳ ಅಧ್ಯಕ್ಷರು ಚುನಾವಣಾ ಪ್ರಚಾರದಲ್ಲಿ ಸಕ್ರಿಯರಾಗಿದ್ದಾರೆ.ಅಲ್ಲದೆ, ಕೇಂದ್ರ ಹಾಗೂ ರಾಜ್ಯ ಸಚಿವರೂ ಕೂಡ ವಿವಿಧ ಕ್ಷೇತ್ರಗಳಲ್ಲಿ ಪ್ರಚಾರ ಕೈಗೊಂಡು ತಮ್ಮ ತಮ್ಮ ಅಭ್ಯರ್ಥಿ ಪರವಾಗಿ ಮತ ಯಾಚನೆ ಮಾಡುತ್ತಿದ್ದು, ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ.
ಚುನಾವಣಾ ಕಣದಲ್ಲಿರುವ ರಾಜಕೀಯ ಪಕ್ಷಗಳ ಹಾಗೂ ಪಕ್ಷೇತರ ಅಭ್ಯರ್ಥಿಗಳು ಕೂಡ ಬೇಸಿಗೆಯ ಸುಡು ಬಿಸಿಲನ್ನು ಲೆಕ್ಕಿಸದೆ ತಮ್ಮ ಅಭಿಮಾನಿಗಳು, ಬೆಂಬಲಿಗರೊಂದಿಗೆ ನಿರಂತರವಾಗಿ ಮತಯಾಚನೆಯಲ್ಲಿ ತೊಡಗಿದ್ದಾರೆ.
ಒಟ್ಟಾರೆ ಮೊದಲ ಹಂತದ ಚುನಾವಣಾ ಕಣದಲ್ಲಿ ಆರೋಪ-ಪ್ರತ್ಯಾರೋಪಗಳ ಸುರಿಮಳೆಯಾಗುತ್ತಿದ್ದು, ಪ್ರಚಾರದ ಅಬ್ಬರ ತಾರಕಕ್ಕೇರಿದೆ.