ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಆಶಯದಂತೆ ಮೋದಿ ಆಡಳಿತ: ಸದಾನಂದಗೌಡ

ಬೆಂಗಳೂರು,ಏ.14-ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ಐದು ವರ್ಷಗಳಲ್ಲಿ ಜಾತಿ, ಮತ, ಧರ್ಮ ನೋಡದೆ ಸರ್ವಧರ್ಮ ಸಮನ್ವಯತೆಯೊಂದಿಗೆ ಆಡಳಿತ ನಡೆಸಿದ್ದಾರೆ ಎಂದು ಕೇಂದ್ರ ಸಚಿವ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವಿ.ಸದಾನಂದಗೌಡ ಪ್ರಶಂಸಿಸಿದರು.

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 128ನೇ ಜನ್ಮದಿನಾಚರಣೆ ಪ್ರಯುಕ್ತ ಯಶವಂತಪುರ ಸರ್ಕಲ್‍ನಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದರು.

ದೇಶದಲ್ಲಿರುವ ಪ್ರತಿಯೊಬ್ಬ ಪ್ರಜೆಗಳಿಗೂ ಸಂವಿಧಾನಬದ್ದ ಸವಲತ್ತುಗಳು ಸಿಕ್ಕಾಗ ಮಾತ್ರ ರಾಷ್ಟ್ರ ಅಭಿವೃದ್ಧಿಯಾಗಲು ಸಾಧ್ಯವಾಗುತ್ತದೆ ಎಂಬುದು ಅಂಬೇಡ್ಕರ್ ಅವರ ಆಶಯವಾಗಿತ್ತು. ಅದನ್ನು ನನಸು ಮಾಡುವ ನಿಟ್ಟಿನಲ್ಲಿ ನರೇಂದ್ರ ಮೋದಿ ಅವರು 130 ಕೋಟಿ ಜನರ ನಿರೀಕ್ಷೆಗೆ ತಕ್ಕಂತೆ ಯಶಸ್ವಿ ಆಡಳಿತ ನೀಡಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಇಡೀ ಜಗತ್ತಿನಲ್ಲಿ ಅತ್ಯಂತ ಸರ್ವಶ್ರೇಷ್ಠವಾದ ಸಂವಿಧಾನವನ್ನು ನೀಡಿದ ಕೀರ್ತಿ ಬಾಬಾ ಸಾಹೇಬ್ ಅಂಬೇಡ್ಕರ್‍ಗೆ ಸಲ್ಲುತ್ತದೆ. ಈ ಹಿನ್ನೆಲೆಯಲ್ಲಿ ಮೊದಲ ಬಾರಿಗೆ ನಮ್ಮ ಸರ್ಕಾರ ಸಂವಿಧಾನ ದಿನ ಆಚರಣೆಯನ್ನು ಜಾರಿ ಮಾಡಲು ತೀರ್ಮಾನಿಸಿದೆವು. ಇದರ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ ಎಂದು ಹೇಳಿದರು.

ಕಾಂಗ್ರೆಸ್ ಕೇವಲ ಅಂಬೇಡ್ಕರ್ ಅವರ ಹೆಸರನ್ನು ವೋಟ್ ಬ್ಯಾಂಕ್‍ಗೆ ಸೀಮಿತಗೊಳಿಸಿದೆ. 60 ವರ್ಷ ಕೇಂದ್ರದಲ್ಲಿ ಆಡಳಿತ ನಡೆಸಿದರೂ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದವರು, ದೀನದಲಿತರು, ಅಲೆಮಾರಿಗಳು, ಆದಿವಾಸಿಗಳು ಸೇರಿದಂತೆ ಸಮಾಜದ ಕಟ್ಟಕಡೆಯ ಯಾವುದೇ ವ್ಯಕ್ತಿಗೆ ಸಂವಿಧಾನಬದ್ಧ ಸವಲತ್ತುಗಳು ಸಿಗಲಿಲ್ಲ. ಇಂಥ ತಳ ಸಮುದಾಯಗಳನ್ನು ಗುರುತಿಸಿ ಅವರನ್ನು ಸಮಾಜದ ಮುನ್ನೆಲೆಗೆ ತಂದಿದ್ದು ಮೋದಿ ಎಂದರು.

ಅಂಬೇಡ್ಕರ್ ಸಂಸತ್‍ಗೆ ಆಯ್ಕೆಯಾಗಿದ್ದರೆ ತಮಗೆ ಉಳಿಗಾಲವಿಲ್ಲ ಎಂಬುದನ್ನು ಅರಿತಿದ್ದ ಕಾಂಗ್ರೆಸ್ ನಾಯಕರು ಅವರನ್ನು ಚುನಾವಣೆಯಲ್ಲಿ ಸೋಲಿಸಲು ಷಡ್ಯಂತ್ರ ನಡೆಸಿದರು. ಕೊನೆಗೆ ರಾಜ್ಯಸಭಾ ಸದಸ್ಯರಾಗಿ, ಕಾನೂನು ಸಚಿವರಾಗಿ ಅವರು ಮಾಡಿದ ಕೆಲಸ ಇತಿಹಾಸದಲ್ಲಿ ಅಚ್ಚಳಿಯದೆ ಉಳಿದಿದೆ ಎಂದರು.

ಈ ಬಾರಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ನನ್ನ ಗೆಲುವು ಖಚಿತ. ನನ್ನ ವಿರುದ್ಧ ಯಾರೂ ಏನೇ ಅಪಪ್ರಚಾರ ಮಾಡಿದರೂ ಮತದಾರ ನನ್ನುನ್ನು ಕೈ ಬಿಡುವ ಪ್ರಶ್ನೆಯೇ ಇಲ್ಲ. ಐದು ವರ್ಷಗಳ ಅವಧಿಯಲ್ಲಿ ಜನರ ನಿರೀಕ್ಷೆಗೆ ತಕ್ಕಂತೆ ಆಡಳಿತ ನೀಡಿರುವಾಗ ಬೇರೊಬ್ಬರನ್ನು ಹೇಗೆ ಬೆಂಬಲಿಸುತ್ತಾರೆ ಎಂದು ಪ್ರಶ್ನಿಸಿದರು.

ಇಂದು ಬೆಳಗಿನಿಂದಲೇ ಸದಾನಂದಗೌಡ ಅವರು ಹೆಬ್ಬಾಳ, ಯಶವಂತಪುರ, ಬ್ಯಾಟರಾಯನಪುರ, ಪುಲಿಕೇಶಿನಗರ, ಸದಾಶಿವನಗರ ಮತ್ತಿತರ ಕಡೆ ಬೆಂಬಲಿಗರೊಂದಿಗೆ ಬಿರುಸಿನ ಪ್ರಚಾರ ನಡೆಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ