ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ-ಏ.16ರಂದ ಬಹಿರಂಗ ಪ್ರಚಾರಕ್ಕೆ ತೆರೆ

ಬೆಂಗಳೂರು,ಏ.14- ರಾಜ್ಯದ ಮೊದಲ ಹಂತದ ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಬಹಿರಂಗ ಪ್ರಚಾರಕ್ಕೆ ಕೇವಲ ಎರಡು ದಿನ ಮಾತ್ರ ಅವಕಾಶವಿದೆ.

ಏಪ್ರಿಲ್ 18ರಂದು ಮತದಾನ ನಡೆಯುವ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಬಿರುಸಿನ ಚುನಾವಣಾ ಪ್ರಚಾರ ನಡೆಯುತ್ತಿದ್ದು, ಏ.16 ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ.

ರಾಜ್ಯದಲ್ಲಿ ಈ ಎರಡು ಹಂತಗಳಲ್ಲಿ ಮತದಾನ ನಡೆಯುತ್ತಿದ್ದು, ಮೊದಲ ಹಂತದ ಚುನಾವಣೆಗೆ ಪ್ರಮುಖ ರಾಜಕೀಯ ಪಕ್ಷಗಳ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ಆದ್ಯತೆ ನೀಡಿ ಮತ ಬೇಟೆಯಲ್ಲಿ ನಿರಂತರವಾಗಿ ತೊಡಗಿದ್ದು, ಆರೋಪ-ಪ್ರತ್ಯಾರೋಪಗಳು ಯಥಾರೀತಿ ಮುಂದುವರೆದಿವೆ.

ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಮೊದಲ ಹಂತದ 14 ಕ್ಷೇತ್ರಗಳಲ್ಲಿ ಬಿಜೆಪಿ 13, ಕಾಂಗ್ರೆಸ್ 10, ಜೆಡಿಎಸ್ 4 ಅಭ್ಯರ್ಥಿಗಳು ಸೇರಿದಂತೆ ಚುನಾವಣಾ ಕಣದಲ್ಲಿ ಒಟ್ಟು 241 ಅಭ್ಯರ್ಥಿಗಳು ಸ್ಪರ್ಧಿಗಿಳಿದಿದ್ದಾರೆ.

ಏ.23ರಂದು ಉಳಿದ ಇತರೆ 14 ಲೋಕಸಭಾ ಕ್ಷೇತ್ರಗಳಿಗೆ 2ನೇ ಹಂತದಲ್ಲಿ ಮತದಾನ ನಡೆಯಲಿದೆ. ಹೀಗಾಗಿ ಮೊದಲ ಹಂತದ ಮತದಾನ ಮುಗಿದ ಬಳಿಕ ರಾಷ್ಟ್ರೀಯ ಮತ್ತು ರಾಜ್ಯ ನಾಯಕರು ಬಿರುಸಿನ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ.

ಮತದಾನದ ದಿನಾಂಕ ಸಮೀಪಿಸುತ್ತಿದ್ದಂತೆಯೇ ರಾಜ್ಯದಲ್ಲಿ ಚುನಾವಣಾ ಕಾವು ಏರತೊಡಗಿದೆ. ಬೇಸಿಗೆ ಸುಡು ಬಿಸಿಲನ್ನು ಲೆಕ್ಕಿಸದೆ ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಸೇರಿದಂತೆ ಆಯಾ ಪಕ್ಷಗಳ ಕಾರ್ಯಕರ್ತರು, ಅಭ್ಯರ್ಥಿಗಳ ಬೆಂಬಲಿಗರು ಎಡಬಿಡದೆ ಪ್ರಚಾರದಲ್ಲಿ ತೊಡಗಿದ್ದಾರೆ.

ಮತದಾರರನ್ನು ಸೆಳೆಯಲು ನಾನಾ ರೀತಿಯ ತಂತ್ರ, ಪ್ರತಿತಂತ್ರಗಳನ್ನು ಮಾಡತೊಡಗಿದ್ದಾರೆ. ರಾಜಕೀಯ ಪಕ್ಷಗಳ ಅಭ್ಯರ್ಥಿಗಳಂತೆಯೇ ಪಕ್ಷೇತರ ಅಭ್ಯರ್ಥಿಗಳು ಕೂಡ ಪ್ರಚಾರದಲ್ಲಿ ಸಕ್ರಿಯರಾಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸೇರಿದಂತೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್, ಸಿದ್ದರಾಮಯ್ಯ, ಯಡಿಯೂರಪ್ಪ ಸೇರಿದಂತೆ ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಈಗಾಗಲೇ ವಿವಿಧ ಕ್ಷೇತ್ರಗಳಲ್ಲಿ ಚುನಾವಣೆ ಪ್ರಚಾರ ನಡೆಸಿ ತಮ್ಮ ತಮ್ಮ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಿದ್ದಾರೆ.

ಹೈವೋಲ್ಟೇಜ್ ಕ್ಷೇತ್ರ ಮಂಡ್ಯದಲ್ಲಿ ಚುನಾವಣಾ ಪ್ರಚಾರ ತಾರಕಕ್ಕೇರಿರುವುದಲ್ಲದೆ ತಾರಾ ರಂಗು ಪಡೆದುಕೊಂಡಿದೆ. ಪ್ರಸಕ್ತ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದರೂ ಸ್ಥಳೀಯ ಮಟ್ಟದಲ್ಲಿ ಉಭಯ ಪಕ್ಷಗಳ ಕಾರ್ಯಕರ್ತರ ನಡುವೆ ಹೊಂದಾಣಿಕೆ ಪೂರ್ಣ ಪ್ರಮಾಣದಲ್ಲಿ ಆಗಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ.

ಆದರೂ ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ರಾಜ್ಯ ಮತ್ತು ರಾಷ್ಟ್ರೀಯ ನಾಯಕರು ನಿರಂತರವಾಗಿ ಶ್ರಮಿಸಿ ಕಾರ್ಯಕರ್ತರನ್ನು ಹುರಿದುಂಬಿಸುತ್ತಿದ್ದಾರೆ.

ಒಟ್ಟಾರೆ ರಾಜ್ಯದ ಲೋಕಸಭಾ ಚುನಾವಣಾ ಕಣ ಬಿಜೆಪಿ ಹಾಗೂ ಮೈತ್ರಿ ನಡುವೆ ನೇರ ಹಣಾಹಣಿ ಏರ್ಪಟ್ಟಿದ್ದು,ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳಿಗೆ ಈ ಬಾರಿಯ ಚುನಾವಣೆ ಪ್ರತಿಷ್ಠೆಯ ಕಣವಾಗಿದೆ.

ತಮ್ಮ ತಮ್ಮ ಅಭ್ಯರ್ಥಿಗಳ ಗೆಲುವಿಗೆ ಶತಾಯಗತಾಯ ಪ್ರಯತ್ನವನ್ನು ಮಾಡುತ್ತಿದ್ದಾರೆ. ಆ ಪಕ್ಷಗಳ ಕಾರ್ಯಕರ್ತರು ಕೂಡ ಮತದಾರರನ್ನು ಆಕರ್ಷಿಸಲು ಹರಸಾಹಸಪಡುತ್ತಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ