ಬೆಂಗಳೂರು, ಏ.15- ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳ ಚುನಾವಣೆ ಬಹಿರಂಗ ಪ್ರಚಾರಕ್ಕೆ ನಾಳೆ ತೆರೆ ಬೀಳಲಿದೆ.
ಏ.18ರಂದು ಮತದಾನ ನಡೆಯಲಿದ್ದು, ನಾಳೆ ಸಂಜೆ 14 ಕ್ಷೇತ್ರಗಳ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದ್ದು, ಚುನಾವಣಾ ಪ್ರಚಾರದಲ್ಲಿರುವ ರಾಷ್ಟ್ರೀಯ, ರಾಜ್ಯ ನಾಯಕರು, ಕೇಂದ್ರ ಮತ್ತು ರಾಜ್ಯ ಸಚಿವರು ಸೇರಿದಂತೆ ಪ್ರಮುಖ ರಾಜಕೀಯ ಪಕ್ಷಗಳ ನೇತಾರರು ಬಿರುಸಿನ ಚುನಾವಣಾ ಪ್ರಚಾರ ಕೈಗೊಂಡಿದ್ದಾರೆ.
ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಚಿಕ್ಕಬಳ್ಳಾಪುರ, ಕೋಲಾರ ಲೋಕಸಭಾ ಕ್ಷೇತ್ರಗಳಿಗೆ ಮಾ.19ರಂದು ಅಧಿಸೂಚನೆ ಹೊರಡಿಸಲಾಗಿತ್ತು.
ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡು ಚುನಾವಣಾ ಪ್ರಚಾರ ರಂಗೇರತೊಡಗಿತ್ತು.
ಮೊದಲ ಹಂತದ 14 ಕ್ಷೇತ್ರಗಳಲ್ಲಿ ಕಾಂಗ್ರೆಸ್ 10, ಬಿಜೆಪಿ 13, ಜೆಡಿಎಸ್ 4 ಕ್ಷೇತ್ರಗಳಲ್ಲಿ ಸ್ಪರ್ಧಿಸಿವೆ. ಪಕ್ಷೇತರ ಅಭ್ಯರ್ಥಿಗಳು ಸೇರಿದಂತೆ ಚುನಾವಣಾ ಕಣದಲ್ಲಿ 241 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಎರಡನೆ ಹಂತದ ಉಳಿದ 14 ಕ್ಷೇತ್ರಗಳಿಗೆ ಏಪ್ರಿಲ್ 23ರಂದು ಮತದಾನ ನಡೆಯಲಿದ್ದು, ಏ.21ರ ವರೆಗೂ ಬಹಿರಂಗ ಪ್ರಚಾರಕ್ಕೆ ಅವಕಾಶವಿದೆ. ರಾಜಕೀಯ ಪಕ್ಷಗಳ ನಾಯಕರು ಮೊದಲ ಹಂತದ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುತ್ತಿದ್ದಂತೆ ಎರಡನೆ ಹಂತದ ಪ್ರಚಾರಕ್ಕೆ ಆದ್ಯತೆ ನೀಡಲಿದ್ದಾರೆ.
ಮೊದಲ ಹಂತದ ಚುನಾವಣೆಗೆ ನಾಳೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುತ್ತಿದ್ದಂತೆ ಮತದಾರರಲ್ಲದವರು ಕ್ಷೇತ್ರ ಬಿಟ್ಟು ತೆರಳಬೇಕಾಗುತ್ತದೆ.ಹೀಗಾಗಿ ಇಂದು ಮತ್ತು ನಾಳೆ ರಾಜಕೀಯ ನಾಯಕರು ವಿವಿಧ ಲೋಕಸಭಾ ಕ್ಷೇತ್ರಗಳಲ್ಲಿ ಅಬ್ಬರದ ಚುನಾವಣಾ ಪ್ರಚಾರ ಕೈಗೊಂಡು ತಮ್ಮ ತಮ್ಮ ಅಭ್ಯರ್ಥಿಗಳ ಪರವಾಗಿ ಮತ ಯಾಚಿಸುತ್ತಿರುವುದಲ್ಲದೆ ಆರೋಪ-ಪ್ರತ್ಯಾರೋಪಗಳ ಸುರಿಮಳೆಗೈಯ್ಯುತ್ತಿದ್ದಾರೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬುನಾಯ್ಡು, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಜಗದೀಶ್ ಶೆಟ್ಟರ್, ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಪ್ರಮುಖ ರಾಜಕೀಯ ಪಕ್ಷಗಳ ರಾಜ್ಯಾಧ್ಯಕ್ಷರು, ಆಯಾ ಪಕ್ಷಗಳ ಮುಖಂಡರು ಚುನಾವಣಾ ಅಖಾಡಕ್ಕಿಳಿದಿದ್ದು, ಬಹಿರಂಗ ಪ್ರಚಾರದಲ್ಲಿ ತೊಡಗಿದ್ದಾರೆ.
ಈಗಾಗಲೇ ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ, ಬಿಜೆಪಿ ಅಧ್ಯಕ್ಷ ಅಮಿತ್ ಷಾ ಸೇರಿದಂತೆ ರಾಷ್ಟ್ರ ಹಾಗೂ ರಾಜ್ಯಮಟ್ಟದ ಹಲವು ನಾಯಕರು ರಾಜ್ಯದಲ್ಲಿ ಚುನಾವಣಾ ಪ್ರಚಾರ ನಡೆಸಿದ್ದಾರೆ.
ಒಟ್ಟಾರೆ ಕೊನೆಯ ಎರಡು ದಿನಗಳ ಚುನಾವಣಾ ಪ್ರಚಾರ ತಾರಕಕ್ಕೇರಿದ್ದು, ಎಲ್ಲೆಡೆ ಅಬ್ಬರದ ಪ್ರಚಾರ ನಡೆಯುತ್ತಿದೆ. ಕೆಲವೆಡೆ ರೋಡ್ ಶೋ, ಬಹಿರಂಗ ಸಮಾವೇಶದ ಮೂಲಕ ಮತಯಾಚನೆ ಮಾಡಲಾಗುತ್ತಿದೆ.