ಚಿತ್ರದುರ್ಗ, ಏ.16- ಬಿಜೆಪಿ ಎಲ್ಲ ಸಮುದಾಯದವರಿಗೂ ಆದ್ಯತೆ ನೀಡಿದೆ. ಆದರೆ, ಕಾಂಗ್ರೆಸ್ ಪಕ್ಷ ಲೋಕಸಭಾ ಚುನಾವಣೆ ಗೆಲ್ಲಲು ಕೀಳುಮಟ್ಟದ ರಾಜಕಾರಣ ಮಾಡುತ್ತಿದೆ ಎಂದು ಮಾಜಿಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದರು.
ನಗರದ ಬಿಸಿನೀರು ಮುದ್ದಪ್ಪ ಪ್ರೌಢಶಾಲಾ ಆವರಣದಲ್ಲಿ ಬಿಜೆಪಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲು ಎಂತಹ ಕೀಳುಮಟ್ಟದ ರಾಜಕಾರಣ ಮಾಡುತ್ತಿದೆ ಎಂಬುದು ಎಲ್ಲರಿಗೂ ತಿಳಿದಿದೆ. ಮತ್ತೆ ವೀರಶೈವ ಮತ್ತು ಲಿಂಗಾಯತ ಸಮಾಜವನ್ನು ಒಡೆಯುವ ಹುನ್ನಾರ ನಡೆಸುತ್ತಿದ್ದಾರೆ ಎಂದು ಗುಡುಗಿದರು.
ಬಿಜೆಪಿಯಲ್ಲಿ ಎಲ್ಲ ಸಮುದಾಯದವರಿಗೂ ಆದ್ಯತೆ ಇದೆ. ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರಪತಿ ಸ್ಥಾನಕ್ಕೆ ಅರವಿಂದ್ ಕೋವಿಂದ್ ಅವರನ್ನು ತಂದಿದ್ದಾರೆ. ವಾಜಪೇಯಿ ಅವರ ಕಾಲದಲ್ಲಿ ಅಬ್ದುಲ್ ಕಲಾಂ ಅವರನ್ನು ರಾಷ್ಟ್ರಪತಿಗಳನ್ನಾಗಿ ಮಾಡಿ ಅಲ್ಪಸಂಖ್ಯಾತ ಸಮುದಾಯಕ್ಕೆ ಆದ್ಯತೆ ನೀಡಿದ್ದರು ಎಂದು ಹೇಳಿದರು.
ಮೋದಿ ಅವರು ಮುಂದಿನ ದಿನಗಳಲ್ಲಿ ಮೂಲಭೂತ ಸೌಕರ್ಯಕ್ಕೆ ಹಾಗೂ ಪ್ರತಿ ಹಳ್ಳಿಯಲ್ಲೂ ಶುದ್ಧ ಕುಡಿಯುವ ನೀರಿಗೆ ಆದ್ಯತೆ ನೀಡಲಿದ್ದಾರೆ. ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಸಾಕಷ್ಟು ಹೋರಾಟ ನಡೆಸಿದ್ದೆ, ಅನುದಾನವನ್ನೂ ನೀಡಿದ್ದೆ ಈ ನಿಟ್ಟಿನಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಅಧಿಕ ಮತಗಳನ್ನು ನೀಡಿ ಗೆಲ್ಲಿಸುವ ಮೂಲಕ ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಿ ಮಾಡಬೇಕು ಎಂದು ಮನವಿ ಮಾಡಿದರು.
ಚಿತ್ರದುರ್ಗ ಲೋಕಸಭಾ ಕ್ಷೇತ್ರ ಅಭ್ಯರ್ಥಿ ನಾರಾಯಣಸ್ವಾಮಿ ಅವರು, 2ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಲಿದ್ದಾರೆ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ರಾಷ್ಟ್ರಿಕೃತ ಬ್ಯಾಂಕ್ಗಳಲ್ಲಿನ ರೈತರ ಸಾಲಮನ್ನಾ ಮಾಡದೆ, ನೀರಾವರಿ ಯೋಜನೆಗೆ ಒತ್ತು ನೀಡದೆ ರೈತರ ನಂಬಿಕೆಗೆ ದ್ರೋಹ ಬಗೆದಿದ್ದಾರೆ ಎಂದು ಟೀಕಾಪ್ರಹಾರ ನಡೆಸಿದರು.
ರಾಹುಲ್ ಗಾಂಧಿ ಇನ್ನೂ ಎಳಸು ರಾಜಕೀಯ ಅನುಭವ ಇಲ್ಲ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿ ಛೀಮಾರಿ ಹಾಕಿದೆ ಎಂದು ಇದೇ ವೇಳೆ ಯಡಿಯೂರಪ್ಪ ವ್ಯಂಗ್ಯವಾಡಿದರು.