ಬೆಂಗಳೂರು : ಕಾಂಗ್ರಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿಯಾದರೆ ನಾನು ಅವರಿಗೆ ಬೆಂಬಲವಾಗಿ ನಿಲ್ಲುತ್ತೇನೆ ಎಂದು ಮಾಜಿ ಪ್ರಧಾನಿ ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ. ದೇವೇಗೌಡ ಅಭಯಹಸ್ತ ನೀಡಿದ್ದಾರೆ.
ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಗುರುವಾರ ನಡೆದ ಮತದಾನದ ಬಳಿಕ ಮಾತನಾಡಿರುವ ದೇವೇಗೌಡ, “ಜೆಡಿಎಸ್ ಪ್ರಾದೇಶಿಕ ಪಕ್ಷವಾಗಿದ್ದರೂ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ರಾಜ್ಯದಲ್ಲಿ ನಮಗೆ ಬೆಂಬಲ ಸೂಚಿಸಿದ್ದಾರೆ, ಹೀಗಾಗಿ ಈಗ ಅವರ ಬೆಂಬಲಕ್ಕೆ ನಿಲ್ಲಬೇಕಾದ ಜವಾಬ್ದಾರಿ ಈ ನಮ್ಮ ಮೇಲಿದೆ.
ಚುನಾವಣೆಯ ನಂತರ ರಾಹುಲ್ ಗಾಂಧಿ ಪ್ರಧಾನಿಯಾದರೆ ಲೋಕಸಭೆಯಲ್ಲಿ ನಾನು ಅವರ ಬೆಂಬಲಕ್ಕೆ ನಿಲ್ಲುತ್ತೇನೆ” ಎಂದು ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ತಮ್ಮ ರಾಜಕೀಯ ನಿವೃತ್ತಿಯ ಕುರಿತು ಮಾತನಾಡಿರುವ ಅವರು, “ನಾನು ಮುಂದಿನ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು 3 ವರ್ಷಗಳ ಹಿಂದೆಯೇ ನನ್ನ ನಿರ್ಧಾರವನ್ನು ತಿಳಿಸಿದ್ದೆ. ಆದರೆ ನನ್ನನ್ನು ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಒತ್ತಾಯಿಸಿ ನಿಲ್ಲಿಸಿದ್ದಾರೆ. ಇದರಲ್ಲಿ ಮುಚ್ಚಿಡುವಂತದ್ದು ಏನೂ ಇಲ್ಲ ಆದರೆ, ನಾನು ಚುನಾವಣಾ ರಾಜಕೀಯದಿಂದ ಹೊರಗುಳಿದಿದ್ದರು ಸಕ್ರೀಯ ರಾಜಕಾರಣದಿಂದ ಎಂದಿಗೂ ದೂರು ಉಳಿಯುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.
ಕಳೆದ ವಾರ ಆಂಧ್ರಪ್ರದೇಶದಲ್ಲಿ ಟಿಡಿಪಿ ಪಕ್ಷದ ಪರ ಪ್ರಚಾರ ನಡೆಸಲು ತೆರಳಿದ್ದ ಎಚ್.ಡಿ. ದೇವೇಗೌಡ “ವಿರೋಧ ಪಕ್ಷಗಳ ಮಹಾಘಟಬಂಧನ್ ಒಕ್ಕೂಟ ಕೇಂದ್ರದಲ್ಲಿ ಅಧಿಕಾರ ಹಿಡಿದರೆ ಚಂದ್ರಬಾಬು ನಾಯ್ಡು ಪ್ರಧಾನಿಯಾಗಲಿದ್ದಾರೆ” ಎಂದು ಹೇಳಿಕೆ ನೀಡಿದ್ದರು.
ಅಲ್ಲದೆ ರಾಜ್ಯ ಮುಖ್ಯಮಂತ್ರಿ ಕುಮಾರಸ್ವಾಮಿ ಕೇಂದ್ರದಲ್ಲಿ ತೃತೀಯ ರಂಗ ಅಧಿಕಾರಕ್ಕೇರಿದರೆ ಎಚ್.ಡಿ. ದೇವೇಗೌಡ ಪ್ರಧಾನಿಯಾಗಲಿದ್ದಾರೆ ಎಂದು ಈ ಹಿಂದೆಯೇ ಹೇಳಿಕೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.